SHIVAMOGGA | MALENADUTODAY NEWS | ಮಲೆನಾಡು ಟುಡೆ Dec 10, 2024
ಮಾಜಿ ಸಿಎಂ SM ಕೃಷ್ಣರವರ ನಿಧನಕ್ಕೆ ಶಿವಮೊಗ್ಗದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರು ಎಸ್‌ಎಂಕೃಷ್ಣರ ನಿವಾಸಕ್ಕೆ ತೆರಳಿ ಅವರ ಅಂತಿಮ ದರ್ಶನ ಪಡೆದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಇನ್ನೂ ಈ ಸಂಬಂಧ ತೀರ್ಥಹಳ್ಳಿಯಲ್ಲಿ ಮಾತನಾಡಿರುವ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಎಸ್ .ಎಂ ಕೃಷ್ಣ ಅಗಲಿಕೆ ನೋವು ತಂದಿದೆ. ಸಜ್ಜನ ರಾಜಕಾರಣಿಯಾಗಿದ್ದ ಅವರು ತೀರ್ಥಹಳ್ಳಿಯ ಅಳಿಯರಾಗಿದ್ದರು. ಅವರಿಗೆ ನನ್ನ ಮೇಲೆ ವಿಶೇಷ ಪ್ರೀತಿಯಿತ್ತು. ನನ್ನ ಕ್ಷೇತ್ರದ ಕಾಮಗಾರಿಗೆ ಅನುದಾನ ನೀಡುತ್ತಿದ್ದರು. ಸೌಮ್ಯ ಸ್ವಭಾವದವರಾಗಿದ್ದ ಅವರ ಅಗಲಿಕೆ ದುಃಖ ತಂದಿದೆ ಎಂದಿದ್ದಾರೆ.
ಮಹಾರಾಷ್ಟ್ರದ ರಾಜ್ಯಪಾಲ ಹುದ್ದೆಯನ್ನು ನಿರ್ವಹಿಸಿದ್ದ ಕೇಂದ್ರದ ಮಾಜಿ ಸಚಿವ ಎಸ್ ಎಂ ಕೃಷ್ಣರವರ ಇನ್ನಿಲ್ಲ ಎಂಬುದು ಅತ್ಯಂತ ನೋವು ಮತ್ತು ದುಃಖದ ಸಂಗತಿಯಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಎಸ್‌ಎಂ ಕೃಷ್ಣರವರು ನಮ್ಮ ಜಿಲ್ಲೆಯ ಅಳಿಯ ಎಂಬ ಹೆಮ್ಮೆ ನಮಗಿದೆ. ಸನ್ಮಾನ್ಯರ ನಿಧನದಿಂದಾಗಿ ನಾಡಿಗೆ ತುಂಬಲಾರದ ನಷ್ಟ ಉಂಟಾಗಿದೆ, ಅವರ ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಬರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಸಚಿವರು ತಮ್ಮ ಶೋಕ ಸಂತಾಪದಲ್ಲಿ ತಿಳಿಸಿದ್ದಾರೆ.


ಇನ್ನೊಂದೆಡೆ ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರರವರು ಎಸ್‌ಎಂಕೆ ಅಗಲಿಕೆ ಬಗ್ಗೆ ಸಂತಾಪ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಲೋಕಸಭೆ, ರಾಜ್ಯಸಭೆ, ರಾಜ್ಯ ವಿಧಾನಸಭೆ, ರಾಜ್ಯ ವಿಧಾನ ಪರಿಷತ್ ಹೀಗೆ ನಾಲ್ಕೂ ಸದನಗಳ ಸದಸ್ಯರಾಗಿದ್ದ ಹೆಗ್ಗಳಿಕೆ ಹೊಂದಿದ್ದ ಎಸ್‌ಎಂ ಕೃಷ್ಣರವರ ಬದುಕು ಎಲ್ಲರಿಗೂ ಸ್ಫೂರ್ತಿ ಆಗಿದೆ. ಹಿರಿಯ ಮುತ್ಸದ್ದಿ ರಾಜಕಾರಣಿಯನ್ನು ನಾವು ಕಳೆದುಕೊಂಡಿದ್ದು, ಇಡೀ ನಾಡಿಗೆ ಅವರ ನಿಧನದಿಂದ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಹಾಗೂ ಬಂಧು ಬಳಗಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಈ ನಡುವೆ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಎಸ್.ಎಂ.ಕೃಷ್ಣ ರವರು ನಿಧನರಾದ ಹಿನ್ನೆಲ್ಲೆಯಲ್ಲಿ ರಾಜ್ಯಸರ್ಕಾರ ಮೂರು ದಿನ ಶೋಕಾಚರಣೆ ಘೋಷಿಸಿದೆ. ದಿವಂಗತರ ಗೌರವಾರ್ಥವಾಗಿ ದಿನಾಂಕ:11.12.2024ರ ಬುಧವಾರದಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಎಲ್ಲಾ ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ) ಸಾರ್ವಜನಿಕ ರಜೆಯನ್ನು ಘೋಷಿಸಿದೆ. ದಿನಾಂಕ:10.12.2024 ರಿಂದ ದಿನಾಂಕ:12.12.2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ರಾಜ್ಯಾದ್ಯಂತ ಶೋಕಾಚರಣೆ ಮಾಡಲಾಗುವುದು ಹಾಗೂ ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಬೇಕು ಎಂದು ಸೂಚಿಸಲಾಗಿದೆ.
SUMMARY | Former Chief Minister of the state SM Krishna passed away
KEY WORDS | Former Chief Minister , SM Krishna passed away.