ಶಿವಮೊಗ್ಗ ಜಿಲ್ಲೆಯಾದ್ಯಂತ ಫೆಬ್ರವರಿ 1 ರಿಂದ 7 ರವರೆಗೆ ಗಣಕಯಂತ್ರ ಶಿಕ್ಷಣ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಪ್ರಕ್ರಿಯೆಯು ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಯುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಪ್ರತಿಬಂಧಕಾಜ್ಞೆ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಪ್ರಮುಖ ಕೇಂದ್ರಗಳಾದ ಬಿ.ಹೆಚ್. ರಸ್ತೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ (ಫೆ. 1-7), ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಫೆ. 2-7), ಗೋಪಿ ಸರ್ಕಲ್ ಸಮೀಪದ ಕಸ್ತೂರಿಬಾ ಬಾಲಿಕಾ ಪದವಿಪೂರ್ವ ಕಾಲೇಜು (ಫೆ. 1) ಹಾಗೂ ವಿನೋಬನಗರದ ಶ್ರೀ ರಾಘವೇಂದ್ರ ವಾಣಿಜ್ಯ ಮತ್ತು ಗಣಕಯಂತ್ರ ಶಿಕ್ಷಣ ಸಂಸ್ಥೆಯಲ್ಲಿ (ಫೆ. 2-7) ಪರೀಕ್ಷೆಗಳು ನಡೆಯಲಿವೆ. ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಬಳಿ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಮೊಬೈಲ್ ಮತ್ತು ಜೆರಾಕ್ಸ್ ಅಂಗಡಿಗಳಿಗೆ ನಿರ್ಬಂಧ
ಪರೀಕ್ಷಾ ಅಕ್ರಮಗಳನ್ನು ತಡೆಯಲು ಪರೀಕ್ಷಾ ಕೇಂದ್ರದ ಆವರಣದಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಲ್ಲದೆ, ಪರೀಕ್ಷಾ ದಿನಗಳಂದು ಬೆಳಿಗ್ಗೆ 9:30 ರಿಂದ ಸಂಜೆ 6:00 ರವರೆಗೆ ಕೇಂದ್ರಗಳ ಸುತ್ತಮುತ್ತಲಿನ ಟೈಪಿಂಗ್, ಜೆರಾಕ್ಸ್ ಮತ್ತು ಫ್ಯಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಈ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ. ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಮತ್ತು ಜಿಲ್ಲಾಡಳಿತದ ನಿಯಮಗಳನ್ನು ಪಾಲಿಸಲು ಕೋರಲಾಗಿದೆ.
Prohibitory Orders Near exam Centers from Feb 1



