ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 1 ರಂದು ಶಿವಮೊಗ್ಗ ನಗರಕ್ಕೆ ಭೇಟಿ ನೀಡಲಿದ್ದಾರೆ. ಅಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಮಾಹಿತಿ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕಾರ್ಯಕ್ರಮದ ಕುರಿತು ಹಮ್ಮಿಕೊಳ್ಳಲಾಗಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ತರಲಾಗಿರುವ ಕ್ರಾಂತಿಕಾರಕ ಬದಲಾವಣೆಗಳ ಒಂದು ಪ್ರಮುಖ ಪ್ರತಿಬಿಂಬವಾಗಿ ಈ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭ ಮಾಡಲಾಗುತ್ತಿದೆ ಎಂದು ಅವರು ವಿವರಿಸಿದರು.
ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದ್ದೇನು?
- ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಅಗತ್ಯ ಬಸ್ ಸಾರಿಗೆ ವ್ಯವಸ್ಥೆ ಹಾಗೂ ಊಟದ ಸೌಲಭ್ಯಗಳನ್ನು ಜಿಲ್ಲಾಡಳಿತದಿಂದ ಕಲ್ಪಿಸಲಾಗುತ್ತಿದೆ.
- ಸಂಪೂರ್ಣ ಕಾರ್ಯಕ್ರಮದ ನಿರ್ವಹಣೆ ಹಾಗೂ ಉಸ್ತುವಾರಿಯನ್ನು ಹಿರಿಯ ಅಧಿಕಾರಿಗಳಿಗೆ ವಹಿಸಲಾಗಿದೆ. ವಿವಿಧ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ತಮ್ಮ ಕೇಂದ್ರ ಸ್ಥಾನಗಳಲ್ಲಿಯೇ ಹಾಜರಿದ್ದು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
- ಇದೇ ಬೃಹತ್ ಕಾರ್ಯಕ್ರಮದ ವೇದಿಕೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಇ-ಸ್ವತ್ತು ಖಾತೆ, ದರಖಾಸ್ತು ಪೋಡಿ ಹಾಗೂ ಕಂದಾಯ ಗ್ರಾಮಗಳ ಹಕ್ಕುಪತ್ರಗಳನ್ನು ವಿತರಿಸಲಾಗುವುದು.
- ಜೊತೆಗೆ, ಪಿಂಚಣಿ ಯೋಜನೆಗಳು ಹಾಗೂ ವಿವಿಧ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಣೆ ಮಾಡಲಾಗುವುದು.
ಇಷ್ಟೆ ಅಲ್ಲದೆ ಅಂಗವಿಕಲರಿಗೆ ನೀಡಲಾಗುವ ಸವಲತ್ತುಗಳು, ಕಾರ್ಮಿಕರಿಗೆ ಒದಗಿಸುವ ಸೌಲಭ್ಯಗಳು, ಕೃಷಿ ಮತ್ತು ತೋಟಗಾರಿಕಾ ಇಲಾಖೆಗಳ ಯಂತ್ರೋಪಕರಣಗಳು ಹಾಗೂ ಸಹಾಯಧನ ಆಧಾರಿತ ಸಾಲ ಸೌಲಭ್ಯಗಳನ್ನು ಸಹ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ವಿತರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಈ ಕಾರ್ಯಕ್ರಮದ ನೇತೃತ್ವವನ್ನು ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ವಹಿಸಿಕೊಳ್ಳಲಿದ್ದಾರೆ. ಪೂರ್ವಸಿದ್ಧತಾ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್. ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ವಿ. ಅಭಿಷೇಕ್ ಅವರು ಉಪಸ್ಥಿತರಿದ್ದರು.
ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

