Sharavathi Project ಶಿವಮೊಗ್ಗ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ವಿರೋಧಿಸಿ ರಾಷ್ಟ್ರಭಕ್ತ ಬಳಗ ಹಾಗೂ ಪರಿಸರಕ್ಕಾಗಿ ನಾವು ಸಂಘಟನೆಯ ವತಿಯಿಂದ ಜೂನ್ 28ರಂದು ಕಾರ್ಗಲ್ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪರಿಸರಕ್ಕಾಗಿ ನಾವು ಸಂಘಟನೆಯ ಪ್ರಮುಖರಾದ ಪ್ರೊ. ಬಿ. ಎಂ. ಕುಮಾರಸ್ವಾಮಿ ಹೇಳಿದರು.
ಇಂದು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ವಿರೋಧಿಸಿ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ ಬೆಳಿಗ್ಗೆ 7 ಗಂಟೆಗೆ ಶಿವಮೊಗ್ಗದ ಅಲ್ಲಮಪ್ರಭು ಮೈದಾನದಿಂದ ಸುಮಾರು 108 ಬಸ್ಸುಗಳಲ್ಲಿ 5000 ಕಾರ್ಯಕರ್ತರು ಕಾರ್ಗಲ್ ಕಡೆಗೆ ಹೊರಡಲಿದ್ದೇವೆ. ಈ ಹೋರಾಟಕ್ಕೆ ಬಿಳಕಿ ಮಠದ ಪೂಜ್ಯರಾದ ಶ್ರೀ ರಾಜಶೇಖರ ಶಿವಾಚಾರ್ಯ ಸ್ವಾಮೀಜಿ ಮತ್ತು ತ್ಯಾವರೆಕೆರೆ ಮಠದ ಪೂಜ್ಯರಾದ ಶ್ರೀ ಅಭಿನವ ಸಿದ್ದಲಿಂಗ ಸ್ವಾಮೀಜಿ ಅವರು ಚಾಲನೆ ನೀಡಲಿದ್ದಾರೆ, ಎಂದರು.
ಪ್ರತಿಭಟನೆಯ ವಿವರಗಳನ್ನು ನೀಡಿದ ಅವರು, ಶಿವಮೊಗ್ಗದಿಂದ ಹೊರಡುವ ಹೋರಾಟಗಾರರು ಬೆಳಿಗ್ಗೆ 10:30ಕ್ಕೆ ಸಾಗರದ ಕಾರ್ಗಲ್ನಲ್ಲಿ ಒಂದೆಡೆ ಸೇರಲಿದ್ದಾರೆ. ಅಲ್ಲಿ ಬೃಹತ್ ಸಭೆ ಜರುಗಲಿದ್ದು, ಆ ಸಭೆಯನ್ನುದ್ದೇಶಿಸಿ ಬಂಗಾರಮಕ್ಕಿಯ ಶ್ರೀ ಮಾರುತಿ ಗುರೂಜಿ ಅವರು ಭಾಷಣ ಮಾಡಲಿದ್ದಾರೆ. ಬಳಿಕ ಸಂಜೆ 4 ಗಂಟೆಗೆ ಕಾರ್ಗಲ್ನಲ್ಲಿ ಮತ್ತೊಂದು ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ಸಭೆಯ ನಂತರ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು,” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರಾಷ್ಟ್ರಭಕ್ತ ಬಳಗದ ಪ್ರಮುಖರಾದ ಕೆ. ಎಸ್. ಈಶ್ವರಪ್ಪ ಮಾತನಾಡಿ, ಇಂಧನ ಸಚಿವ ಕೆ. ಜೆ. ಜಾರ್ಜ್ ಅವರು ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಯಾಗಲೇಬೇಕೆಂದು ಏಕೆ ಹಠ ಹಿಡಿಯುತ್ತಿದ್ದಾರೆ ಎಂಬುದು ನಮಗೆ ತಿಳಿಯುತ್ತಿಲ್ಲ. ವಿದ್ಯುತ್ ಉತ್ಪಾದನೆಗೆ ಪರಿಸರವಾದಿಗಳು ಪರ್ಯಾಯ ಮಾರ್ಗಗಳನ್ನು ಸೂಚಿಸಿದರೂ ಸಹ ಸರ್ಕಾರ ಅದಕ್ಕೆ ಕಿವಿಗೊಡುತ್ತಿಲ್ಲ. ರಾಜ್ಯ ಸರ್ಕಾರದಿಂದ ಒತ್ತಡವಿದ್ದರೂ ನಾವು ಇದಕ್ಕೆ ಅನುಮತಿ ನೀಡಿಲ್ಲ ಎಂದು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರೇ ಹೇಳಿದ್ದಾರೆ. ಆದರೂ ಸಹ ಪರಿಸರಕ್ಕೆ ಹಾಗೂ ಸರ್ಕಾರಕ್ಕೆ ಹೊರೆಯಾಗುವ ಈ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಆದ್ದರಿಂದ ಈ ಯೋಜನೆಯನ್ನು ಕೂಡಲೇ ಕೈಬಿಡಬೇಕು, ಎಂದು ಆಗ್ರಹಿಸಿದರು.
