Shivamogga Farmers Protest ಶಿವಮೊಗ್ಗ : ನಗರದ ಶಿವಪ್ಪನಾಯಕ ಪ್ರತಿಮೆ ಮುಂಭಾಗದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ನೇತೃತ್ವದಲ್ಲಿ ರೈತರು ಮತ್ತು ಕಾರ್ಮಿಕರು ಇಂದು ಬೃಹತ್ ಪ್ರತಿಭಟನೆ ಹಾಗೂ ರಸ್ತೆ ತಡೆ ಚಳವಳಿಯನ್ನು ನಡೆಸಿದರು. ಬಲವಂತದ ಭೂಸ್ವಾಧೀನ, ಕಾರ್ಪೊರೇಟ್ ಶೋಷಣೆ ಹಾಗೂ ಬೆಲೆ ಏರಿಕೆಯನ್ನು ಖಂಡಿಸಿ ಪ್ರತಿಭಟನಾಕಾರರು ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅನ್ಯಾಯದ ಭೂಸ್ವಾಧೀನವನ್ನು ತಕ್ಷಣವೇ ತಡೆಯಬೇಕು ಮತ್ತು ನಾಲ್ಕು ಕಾರ್ಮಿಕ ಸಂಹಿತೆಗಳು, ವಿದ್ಯುತ್ ತಿದ್ದುಪಡಿ ಕಾಯ್ದೆ 2025, ಬೀಜ ಕಾಯ್ದೆ ಹಾಗೂ ವಿಬಿ ಗ್ರಾಮ್ ಜಿ ಕಾಯ್ದೆಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಈ ಸಂದರ್ಭದಲ್ಲಿ ರೈತರು ಒತ್ತಾಯಿಸಿದರು. ಡಾ. ಎಂ.ಎಸ್. ಸ್ವಾಮಿನಾಥನ್ ವರದಿ ಶಿಫಾರಸ್ಸಿನಂತೆ ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಪಡಿಸಬೇಕು, ರೈತರು, ಕೃಷಿಕೂಲಿಕಾರರು ಹಾಗೂ ಮಹಿಳೆಯರ ಸಾಲವನ್ನು ಸಂಪೂರ್ಣ ಮನ್ನಾ ಮಾಡಿ ಋಣ ಮುಕ್ತ ಕಾಯ್ದೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು .
ರಸಗೊಬ್ಬರ, ಡೀಸೆಲ್ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು ಮತ್ತು 2025-26ನೇ ಸಾಲಿನ ಬಾಕಿ ಇರುವ ಬೆಳೆ ವಿಮೆ ಪರಿಹಾರ ಹಣವನ್ನು ತಕ್ಷಣವೇ ರೈತರ ಖಾತೆಗೆ ಬಿಡುಗಡೆ ಮಾಡಬೇಕು ಎಂದು ಪಟ್ಟುಹಿಡಿದರು . ಸಾರ್ವಜನಿಕ ವಲಯಗಳ ಖಾಸಗೀಕರಣವನ್ನು ವಿರೋಧಿಸಿದ ಪ್ರತಿಭಟನಾಕಾರರು ಕಾರ್ಪೊರೇಟ್‌ಗಳೇ ದೇಶ ಬಿಟ್ಟು ತೊಲಗಿ ಎಂಬ ಘೋಷಣೆಗಳೊಂದಿಗೆ ನಗರದ ಪ್ರಮುಖ ರಸ್ತೆಯಲ್ಲಿ ಸಂಚಾರ ತಡೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
