BY Vijayendra / ಮಲೆನಾಡು ಟುಡೆ ಸುದ್ದಿ / ಶಿಕಾರಿಪುರ / ಜಿಲ್ಲೆಯ ಶಿಕಾರಿಪುರದಲ್ಲಿ ಗೋ ಕಳ್ಳರಿಂದ ಭಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ. ಅಲ್ಲದೆ ಅವರ ಕಾರನ್ನು ಜಖಂಗೊಳಿಸಲಾಗಿದೆ. ಈ ಘಟನೆ ಬೆನ್ನಲ್ಲೆ ಶಿಕಾರಿಪುರ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಶಿಕಾರಿಪುರ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ, ಹಲ್ಲೆಗೊಳಗಾದ ಭಜರಂಗದಳ ಕಾರ್ಯಕರ್ತರ ಆರೋಗ್ಯ ವಿಚಾರಿಸಿದರು.
ನಿನ್ನೆ ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಯಕರ್ತರನ್ನು ಭೇಟಿಯಾದ ವಿಜಯೇಂದ್ರ ಬಳಿಕ ಮೀಡಿಯಾಗಳ ಮುಂದೆ ಮಾತನಾಡುತ್ತ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಅಂತಾ ದೂರಿದ್ರು. ಸಿಎಂ ಡಿ.ಕೆ. ಶಿವಕುಮಾರ್ ಅವರು ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ. ಆದರೆ, ಶಿಕಾರಿಪುರದಲ್ಲಿ ಭಜರಂಗದಳ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಬೇರೆ ಬೇರೆ ವಿಚಾರಗಳ ಬಗ್ಗೆ ಮಾತನಾಡುವ ಗೃಹಸಚಿವರು ಇಂತಹ ಘಟನೆಗಳ ಕುರಿತು ಎಚ್ಚೆತ್ತುಕೊಳ್ಳಬೇಕು ಎಂದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಇಚ್ಛಾಶಕ್ತಿ ಸರ್ಕಾರಕ್ಕೆ ಇದ್ದರೆ ಶಿಕಾರಿಪುರದಲ್ಲಿ ನಡೆದಿರುವ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಘಟನೆಗೆ ಬಳಸಿದ ವಾಹನಗಳನ್ನು ಸೀಜ್ ಮಾಡಿದರೆ ಮಾತ್ರ ಸಾಕಾಗುವುದಿಲ್ಲ. ದೇಶದ್ರೋಹಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಆರೋಪಿಗಳಿಗೆ ಜಾಮೀನು ಸಿಗದ ರೀತಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದರು. ಅಲ್ಲದೆ ಘಟನೆ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರೊಂದಿಗೆ ಮಾತನಾಡಿರುವುದಾಗಿ ಅವರು ತಿಳಿಸಿದರು.
ಶಿವಮೊಗ್ಗ ಸೇರಿದಂತೆ ರಾಜ್ಯ ಶಾಂತಿಯುತವಾಗಿದೆ. ಆದರೆ, ಈ ರೀತಿಯ ಘಟನೆಗಳು ಮುಂದುವರಿದರೆ ಕಾನೂನು ಸುವ್ಯವಸ್ಥೆ ಕೈಮೀರಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಲಿದೆ ಅಂತಾ ಎಚ್ಚರಿಸಿದ್ರು.
