ಮಲೆನಾಡುಟುಡೆ ನ್ಯೂಸ್/ ಸಾಗರ : ತಂದೆ ಹಾಗೂ ಮಗಳು ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮಗಳು ಸ್ಥಳದಲ್ಲೇ ಸಾವನ್ನಪ್ಪಿ, ತಂದೆ ಗಂಭೀರವಾಗಿ ಗಾಯಗೊಂಡಿರುವ ದುರಂತ ಘಟನೆ ಸಾಗರ ತಾಲೂಕಿನ ನೆಲ್ಲಿಬೀಡಿನಲ್ಲಿ ನಡೆದಿದೆ. ಮಳೂರು ಗ್ರಾಮದ ಅರ್ಚನಾ ಜೈನ್ ಸಾವನ್ನಪ್ಪಿದ ದುರ್ದೈವಿಯಾಗಿದ್ದು, ಗಾಯಾಳು ನೀಲಕುಮಾರ್ ಜೈನ್ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ವಿವರ
ಮೃತರಾದ ಅರ್ಚನಾ ಅವರು ಉಡುಪಿಯಲ್ಲಿ ಹಾಸ್ಟೆಲ್ ವಾರ್ಡನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ರಜೆಯ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದ ಅವರು, ರಜೆ ಮುಗಿಸಿ ಉಡುಪಿಗೆ ಮರಳಬೇಕಿತ್ತು. ಹೀಗಾಗಿ ಅರ್ಚನಾ ಅವರನ್ನು ತಂದೆ ನೀಲಕುಮಾರ್ ಜೈನ್ ಬಸ್ ಸ್ಟ್ಯಾಂಡ್ಗೆ ಬಿಡಲು ಬೈಕ್ನಲ್ಲಿ ಕರೆದೊಯ್ಯುತ್ತಿದ್ದರು. ಈ ಸಂದರ್ಭದಲ್ಲಿ ಮರಳು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ಲಾರಿ ಇವರ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಮುಂಭಾಗ ನುಜ್ಜುಗುಜ್ಜಾಗಿದ್ದು, ಅಪಘಾತದ ತೀವ್ರತೆಗೆ ಅರ್ಚನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ನೀಲಕುಮಾರ್ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
