ಮುಗಿದ ಹೈಡ್ರಾಮ, ಶಿವಮೊಗ್ಗ ಉಪವಿಭಾಗಾಧಿಕಾರಿ ಹುದ್ದೆ ಗೊಂದಲಕ್ಕೆ ತೆರೆ! ಡಿಟೇಲ್ಸ್ ಓದಿ

ಹಂಚಿಕೊಳ್ಳಿ
WhatsApp Facebook X Telegram
ಶಿವಮೊಗ್ಗ ಉಪವಿಭಾಗಾಧಿಕಾರಿ ಹುದ್ದೆಗೆ ಸಂಬಂಧಿಸಿದ ವರ್ಗಾವಣೆ ವಿವಾದದ ಹಿನ್ನೆಲೆಯಲ್ಲಿ ಜಿ.ಎಚ್. ಸತ್ಯನಾರಾಯಣ ಹಾಗೂ ಡಾ. ಎಚ್.ಪಿ.ಎಸ್. ಮೈತ್ರಿ ಅವರ ಮುಂದಿನ ಆಡಳಿತಾತ್ಮಕ ನಡೆ ಕುತೂಹಲ ಮೂಡಿಸಿದೆ.

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ಉಪವಿಭಾಗಾಧಿಕಾರಿ (Shivamogga AC)ಹುದ್ದೆಯ ವರ್ಗಾವಣೆಗೆ ಸಂಬಂಧಿಸಿದಂತೆ ಉಂಟಾಗಿದ್ದ ಗೊಂದಲಕ್ಕೆ ರಾಜ್ಯ ಸರ್ಕಾರ ತೆರೆ ಎಳೆದಿದೆ. ಶಿವಮೊಗ್ಗ ಉಪವಿಭಾಗಾಧಿಕಾರಿ ಸತ್ಯನಾರಾಯಣ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂ ಸ್ವಾಧೀನಾಧಿಕಾರಿ ಹುದ್ದೆಗೆ ವರ್ಗಾಯಿಸಿ ಮಂಗಳವಾರ ಮರು ಅಧಿಸೂಚನೆ ಹೊರಡಿಸಲಾಗಿದೆ.

ಡಾ. ಎಚ್.ಪಿ.ಎಸ್. ಮೈತ್ರಿ ಅವರ ವರ್ಗಾವಣೆಯಿಂದ ತೆರವಾಗಿದ್ದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂ ಸ್ವಾಧೀನಾಧಿಕಾರಿ ಹುದ್ದೆಗೆ ಸತ್ಯನಾರಾಯಣ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಸತ್ಯನಾರಾಯಣ್ ಅವರು ಅ.27ರಂದು ಹೊಸ ಹುದ್ದೆಯ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ.

ಇದಕ್ಕೂ ಮೊದಲು ಸತ್ಯನಾರಾಯಣ್ ಅವರಿಗೆ ಯಾವುದೇ ಸ್ಥಳ ತೋರಿಸದೆ, ಮುಂದಿನ ಸ್ಥಳ ನಿಯುಕ್ತಿಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಕಾರ್ಯ ವರದಿ ಮಾಡಿಕೊಳ್ಳುವಂತೆ ಸರಕಾರದ ಅಧಿಸೂಚನೆಯಲ್ಲಿ ಸೂಚಿಸಲಾಗಿತ್ತು. ಈ ಆದೇಶದ ಹಿನ್ನೆಲೆಯಲ್ಲಿ ಸತ್ಯನಾರಾಯಣ್ ಅವರು ಕರ್ನಾಟಕ ಆಡಳಿತ ನ್ಯಾಯಾಧಿಕರಣದ (ಕೆಎಟಿ) ಮೊರೆ ಹೋಗಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಧಿಕರಣವು ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸತ್ಯನಾರಾಯಣ್ ಅವರು ಸೋಮವಾರ ಶಿವಮೊಗ್ಗ ಉಪವಿಭಾಗಾಧಿಕಾರಿ ಕಚೇರಿಗೆ ಆಗಮಿಸಿದ್ದರು. ಇನ್ನೊಂದೆಡೆ ಡಾ. ಎಚ್.ಪಿ.ಎಸ್. ಮೈತ್ರಿ ಅವರು ಆ.20ರಂದೇ ಶಿವಮೊಗ್ಗಕ್ಕೆ ಆಗಮಿಸಿ ವರದಿ ಮಾಡಿಕೊಂಡಿದ್ದರು. ಒಂದೇ ಹುದ್ದೆಗೆ ಸಂಬಂಧಿಸಿದಂತೆ ಉಂಟಾಗಿದ್ದ ಈ ಬೆಳವಣಿಗೆಗಳಿಂದ ಆಡಳಿತಾತ್ಮಕ ಗೊಂದಲ ಸೃಷ್ಟಿಯಾಗಿತ್ತು.

ಇದೀಗ ಸತ್ಯನಾರಾಯಣ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂ ಸ್ವಾಧೀನಾಧಿಕಾರಿ ಹುದ್ದೆಗೆ ವರ್ಗಾಯಿಸಿ ಸರಕಾರ ಮರು ಅಧಿಸೂಚನೆ ಹೊರಡಿಸಿರುವುದರಿಂದ ಶಿವಮೊಗ್ಗ ಉಪವಿಭಾಗಾಧಿಕಾರಿ ಹುದ್ದೆಗೆ ಸಂಬಂಧಿಸಿದ ವರ್ಗಾವಣೆ ಗೊಂದಲಕ್ಕೆ ತೆರೆ ಬಿದ್ದಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor