ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ (Shivamogga POCSO Case)ಅಪರಾಧಿಗೆ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1.62 ಲಕ್ಷ ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1) ಶುಕ್ರವಾರ ತೀರ್ಪು ನೀಡಿದೆ. ಈ ಬಗ್ಗೆ ನೀಡಿರುವ ಪ್ರಕಟಣೆಯ ವಿವರ ಹೀಗಿದೆ.
20 ವರ್ಷದ ವ್ಯಕ್ತಿಯೊಬ್ಬ 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಬಳಿಕ ಆಕೆಯ ಬಳಿ ಇದ್ದ ಬಂಗಾರದ ಸರವನ್ನು ತೆಗೆದುಕೊಂಡು ಹೋಗಿದ್ದ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ 2022ರಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆ ಕೈಗೊಂಡಿದ್ದ ಅಂದಿನ ತನಿಖಾಧಿಕಾರಿ ಕೃಷ್ಣಾ ನಾಯ್ಕ , ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಆರೋಪಿಯನ್ನು ಅಪರಾಧಿ ಎಂದು ತೀರ್ಮಾನಿಸಿದೆ.
ಅಪರಾಧಿಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆಯೊಂದಿಗೆ ಒಟ್ಟು ₹1.62 ಲಕ್ಷ ದಂಡ ವಿಧಿಸಲಾಗಿದ್ದು, ನೊಂದ ಬಾಲಕಿಗೆ ₹62 ಸಾವಿರ ಪರಿಹಾರ ನೀಡುವಂತೆಯೂ ನ್ಯಾಯಾಲಯ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶ ನಿಂಗನಗೌಡ ಭ. ಪಾಟೀಲ್ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದ್ದು, ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು.
