ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಮಹಾವೀರ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು, ಪಕ್ಷದ ಬಾವುಟಗಳನ್ನು ಹಿಡಿದು ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣದ ವಿರುದ್ಧ ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.
ಕೇಂದ್ರ ಸರ್ಕಾರವು ದೇಶದಲ್ಲಿ ವಿಪಕ್ಷ ನಾಯಕರನ್ನು ಗುರಿಯಾಗಿಸಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿದೆ., ರಾಹುಲ್ ಗಾಂಧಿ ಅವರ ವಿರುದ್ಧ ಹಲ್ದ್ವಾನಿಯಲ್ಲಿ ದಾಖಲಾಗಿರುವ ಸುಳ್ಳು ಎಫ್‌ಐಆರ್ ಅನ್ನು ತಕ್ಷಣವೇ ರದ್ದುಗೊಳಿಸಬೇಕೆಂದು ಒತ್ತಾಯಿಸಿದರು.
ಘಟನೆಯ ಹಿನ್ನೆಲೆ
ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಧಾರ್ಮಿಕ ಆಚರಣೆಗೆ ಜಾತಿಯ ಬಣ್ಣ ಹಚ್ಚಿ ದ್ವೇಷ ಸೃಷ್ಟಿಸಲು ಯತ್ನಿಸಿದ್ದಾರೆ ಎಂಬ ದೂರಿನ ಮೇರೆಗೆ ರಾಹುಲ್ ಗಾಂಧಿ ವಿರುದ್ಧ ಪೊಲೀಸರು ಭಾನುವಾರ ಎಫ್‌ಐಆರ್ ದಾಖಲಿಸಿದ್ದರು. ಹಲ್ದ್ವಾನಿಯ ವಾಲ್ಮೀಕಿ ಸಮುದಾಯದ ಸದಸ್ಯ ಹಾಗೂ ಶ್ರೀರಾಮ ಸೇನಾ ಧರ್ಮಾರ್ಥ ಸೇವಾ ನ್ಯಾಸ್‌ನ ಕಾರ್ಯಕರ್ತ ಅಮಿತ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಆಗಸ್ಟ್ 29ರಂದು ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗಳು ತಮ್ಮ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.
