ಮಲೆನಾಡುಟುಡೆ ಸುದ್ದಿ / ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಶ್ರೇಯಸ್ಸಿನ ಸಾಧನೆಗಳಿಲ್ಲದೆ ಶೂನ್ಯ ಸಾಧನೆಯ ನೂರು ದಿನ ಪೂರೈಸಿದೆ ಎಂದು ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರುರಾಜ್ಯ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ನೇತೃತ್ವದ ಪಾದಯಾತ್ರೆ ಬಳ್ಳಾರಿಯಲ್ಲಿ ಅಂತಿಮ ಹಂತಕ್ಕೆ ತಲುಪಿದ್ದು, ರಾಜ್ಯಾದ್ಯಂತ ಈ ಚಳವಳಿಸಂಚಲನವನ್ನು ಸೃಷ್ಟಿಸಿದೆ. ಈ ಅಸಮರ್ಥ ಸರ್ಕಾರದ ವಿರುದ್ಧ ವಿಧಾನಸಭೆಯ ಒಳಗೂ ಮತ್ತು ಹೊರಗೂ ನಡೆಸಿದ ಸುದೀರ್ಘ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗಿದೆ ಎಂದರು.
ಸರ್ಕಾರದ ನೂರು ದಿನಗಳ ಜಾಹೀರಾತು ಪ್ರಕಟಣೆಯನ್ನು ಲೇವಡಿ ಮಾಡಿದ ಅವರು, ಭವಿಷ್ಯದ ಅಭಿವೃದ್ಧಿ ಯೋಜನೆಗಳನ್ನು ಪ್ರಕಟಿಸುವುದನ್ನು ಬಿಟ್ಟು, ಇಲ್ಲದ ಸಾಧನೆಗಳನ್ನು ಬಿಂಬಿಸಿಕೊಳ್ಳಲು ಸಾರ್ವಜನಿಕ ಹಣ ಪೋಲು ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿರ್ವಹಣೆಯ ವಿರುದ್ಧ ಅಸಮಾಧಾನ ಹೊರಹಾಕಿದರು.
ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಕಾಂಗ್ರೆಸ್ ಕೇವಲ ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ಮಾಡುತ್ತಿದೆ ಎಂದು ಕಿಡಿಕಾರಿದ ಅವರು, ಈ ಹಿಂದೆ ಕೇಂದ್ರದಲ್ಲಿದ್ದ ಯುಪಿಎ ಆಡಳಿತಾವಧಿಯಲ್ಲೇ ಗಾಡ್ಗಿಳ್ ವರದಿ ಹಾಗೂ ಕಸ್ತೂರಿ ರಂಗನ್ ಮೊದಲ ಅಧಿಸೂಚನೆ ಬಂದಿದ್ದು ಎಂಬುದನ್ನು ಮರೆತು ಈಗ ಕೇಂದ್ರದ ಬಿಜೆಪಿ ಸರ್ಕಾರದ ಮೇಲೆ ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದು ಹರಿದಾಯ್ದರು.
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ ಕಸ್ತೂರಿ ರಂಗನ್ ವರದಿಯ ಕುರಿತು ಕನಿಷ್ಠ ಅಧ್ಯಯನವಿಲ್ಲದೆ ಸಂಸದರಾದ ಬಿ. ವೈ. ರಾಘವೇಂದ್ರ, ಶೋಭಾ ಕರಂದ್ಲಾಜೆ ಹಾಗೂ ನನ್ನ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಮೊದಲು ಸಚಿವರು ಪಶ್ಚಿಮ ಘಟ್ಟಗಳ ವರದಿಯ ಬಗ್ಗೆ ಸರಿಯಾಗಿ ತಿಳಿದುಕೊಳ್ಳಲಿ ಎಂದು ಸಲಹೆ ನೀಡಿದರು.
ಕೇರಳ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರ ಕೂಡ ಕಸ್ತೂರಿ ರಂಗನ್ ವರದಿ ಕೈಬಿಡುವ ಕುರಿತು ಸೂಕ್ತ ಆಕ್ಷೇಪಣೆ ಸಿದ್ಧಪಡಿಸಿ ಕೇಂದ್ರಕ್ಕೆ ಕಳುಹಿಸಲಿ. ಈ ವರದಿ ಜಾರಿಯಾದರೆ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ರಕ್ತಪಾತ ಆಗುವುದು ಖಚಿತ. ಬಿಜೆಪಿ ಪ್ರತ್ಯೇಕವಾಗಿ ಹೋರಾಟ ಮುಂದುವರಿಸಲಿದ್ದು, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಜೊತೆ ಸೇರಿ ಹೋರಾಟ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲಿನ ಇಡಿ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿ, ಅವರು ವಿದೇಶಗಳಲ್ಲಿ ಹೂಡಿಕೆ ಮಾಡಿರುವ ಕುರಿತು ಲಭ್ಯವಿರುವ ಮಾಹಿತಿಯ ಆಧಾರದ ಮೇಲೆ ತನಿಖಾ ಸಂಸ್ಥೆ ಈ ಕ್ರಮ ಕೈಗೊಂಡಿರಬಹುದು ಎಂದು ಹೇಳಿದರು.
