ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದಾದ ಗಣೇಶ ಚತುರ್ಥಿ ಹಾಗೂ ಮುಸ್ಲಿಮರ ಪವಿತ್ರ ಹಬ್ಬವಾದ ಈದ್-ಮಿಲಾದ್ ಆಚರಣೆಯ ಸಂದರ್ಭದಲ್ಲಿ, ಮೆರವಣಿಗೆಗಳ ವೇಳೆ ನಡೆಯುವ ಕೆಲ ಸನ್ನಿವೇಶಗಳು ನಾಡಿನ ಕೋಮು ಸೌಹಾರ್ದತೆಯನ್ನು ಎತ್ತಿ ತೋರಿಸುತ್ತವೆ. ಅದಕ್ಕೊಂದು ಸಾಕ್ಷಿ ಎಂಬಂತೆ, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿ ಗ್ರಾಮದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯ ವೇಳೆ ಮುಸ್ಲಿಂ ಬಾಂಧವರು ಕೋಮು ಸೌಹಾರ್ದತೆಯನ್ನು ಮೆರೆದಿದ್ದಾರೆ.
ಸಾಗರ ತಾಲೂಕಿನ ಆವಿನಹಳ್ಳಿ ಗ್ರಾಮದಲ್ಲಿ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಗಣೇಶ ಚತುರ್ಥಿಯ ದಿನದಂದು ಗಣಪತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಮೂರು ದಿನಗಳ ಪೂಜೆಯ ನಂತರ, ರಾತ್ರಿ ವೇಳೆಯಲ್ಲಿ ಗಣಪತಿಯ ವಿಸರ್ಜನಾ ಮೆರವಣಿಗೆಯನ್ನು ವಿಜೃಂಭಣೆಯಿಂದ ನಡೆಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಮೆರವಣಿಗೆಯು ಆವಿನಹಳ್ಳಿಯ ಮಸೀದಿಯ ಎದುರು ಬಂದಾಗ, ಅಲ್ಲಿದ್ದ ಮುಸ್ಲಿಂ ಬಾಂಧವರು ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಭಕ್ತಾದಿಗಳಿಗೆ ಹಾಗೂ ಸಾರ್ವಜನಿಕರಿಗೆ ಉಪಹಾರ, ನೀರು ಮತ್ತು ತಂಪು ಪಾನೀಯಗಳನ್ನು ವಿತರಿಸಿ ಪ್ರೀತಿ-ಸೌಹಾರ್ದತೆಯನ್ನು ವ್ಯಕ್ತಪಡಿಸಿದ್ದಾರೆ.

ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರಿಗೆ ಉಪಹಾರ ಹಾಗೂ ತಂಪು ಪಾನೀಯಗಳನ್ನು ವಿತರಿಸುವ ಮೂಲಕ, ಆವಿನಹಳ್ಳಿಯ ಮುಸ್ಲಿಂ ಬಾಂಧವರು ಭಾವೈಕ್ಯತೆ ಮತ್ತು ಸೌಹಾರ್ದತೆಗೆ ಮಾದರಿಯಾಗಿದ್ದಾರೆ.
