ಮಲೆನಾಡು ಟುಡೆ ಸುದ್ದಿ/ ಆನಂದಪುರ : ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಫಘಾತದಲ್ಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಆನಂದಪುರ–ಶಿಕಾರಿಪುರ ರಾಜ್ಯ ಹೆದ್ದಾರಿಯ ದಾಸಕೊಪ್ಪ ಗ್ರಾಮದ ಮಸೀದಿ ಸಮೀಪ ಸಂಭವಿಸಿದೆ. ಮೃತ ಯುವಕನನ್ನು ದಾಸಕೊಪ್ಪ ಗ್ರಾಮದ ನಿವಾಸಿ ಮೊಹಮ್ಮದ್ ಸಿದ್ದಿಕ್ ಎಂದು ಗುರುತಿಸಲಾಗಿದೆ.
ಘಟನೆ ವಿವರ ನೋಡುವುದಾದರೆ ದಾಸಕೊಪ್ಪ ಗ್ರಾಮದ ಮಸೀದಿ ಸಮೀಪ ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಫಘಾತದ ರಭಸಕ್ಕೆ ಮೊಹಮ್ಮದ್ ಸಿದ್ದಿಕ್ ಅವರ ತಲೆ ಹಾಗೂ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಯುವಕನನ್ನು ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ.ಆದರೆ, ಗಂಭೀರವಾಗಿ ಗಾಯಗೊಂಡಿದ್ದ ಸಿದ್ದಿಕ್ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇtಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಆನಂದಪುರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೀಡಾದ ಎರಡೂ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು ಸ್ಥಳ ಮಹಜರು ನಡೆಸಲಾಗಿದೆ. ಈ ಕುರಿತು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
