ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಗರದ ಅಣ್ಣಾನಗರ ಚಾನೆಲ್ ಏರಿ ರಸ್ತೆಯಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನ ಪೊಲೀಸರು ಭೇದಿಸಿದ್ದಾರೆ. ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿ ರಸ್ತೆ ಬದಿಯಲ್ಲಿ ಹಾಕಿ ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಪೇಟೆ ಠಾಣೆ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಬಂಧಿತನಿಂದ ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರ ಹಾಗೂ ಬೈಕನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
ಅಕ್ಟೋಬರ್ 3ರ ರಾತ್ರಿ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅಣ್ಣಾನಗರ ಚಾನೆಲ್ ಏರಿ ರಸ್ತೆಯಲ್ಲಿ ಮೊಹಮದ್ ಅಲಿ (37) ಎಂಬವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ಬಳಿಕ ಮೃತದೇಹವನ್ನು ರಸ್ತೆ ಬದಿಯಲ್ಲಿ ಬಿಸಾಡಿದ್ದರು. ಆನಂತರ ಪ್ರಕರಣ ಬೆಳಕಿಗೆ ಬಂದಿತ್ತು. ಈ ಕುರಿತಾಗಿ ಮೃತರ ಸಹೋದರ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಿಎನ್‌ಎಸ್ 2023ರ ಕಲಂ 103(1) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗ ಪ್ರಕರಣದ ತನಿಖೆಯಲ್ಲಿ ನಿನ್ನೆ ಅಂದರೆ ಅಕ್ಟೋಬರ್ 5ರಂದು ಸೈಯ್ಯದ್ ಜಿಲಾನ್ (23) ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಸೈಯ್ಯದ್ ಜಿಲಾನ್ ಶಿವಮೊಗ್ಗ ನಗರದ ಅಶೋಕನಗರ 3ನೇ ಕ್ರಾಸ್ ನಿವಾಸಿ, ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಈತ ಮೊಹಮದ್ನನ್ನ ಕೊಲೆ ಮಾಡಿದ್ದಾನೆ ಎಂಬುದು ಗೊತ್ತಾಗಿದೆ. ಬಂಧಿತ ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
