ಬೇಡ್ತಿ–ವರದಾ, ಅಘನಾಶಿನಿ–ವೇದಾವತಿ ನದಿ ಜೋಡಣೆ ಯೋಜನೆ ವಿರೋಧಿಸಿ ನಾಳೆ ಬೆಂಗಳೂರಿನಲ್ಲಿ ಧರಣಿ, ಸ್ವರ್ಣವಲ್ಲಿ ಶ್ರೀಗಳ ಗೌರವಾಧ್ಯಕ್ಷತೆ

ಹಂಚಿಕೊಳ್ಳಿ
WhatsApp Facebook X Telegram
informaion news
informaion news

ಮಲೆನಾಡು ಟುಡೆ ಸುದ್ದಿ / ಬೆಂಗಳೂರು /ಪಶ್ಚಿಮಘಟ್ಟ ಹಾಗೂ ಉತ್ತರ ಕನ್ನಡ ಜಿಲ್ಲೆಯ ಪರಿಸರ ಸಂರಕ್ಷಣೆಯ ಉದ್ದೇಶದಿಂದ ಬೇಡ್ತಿ–ವರದಾ ಮತ್ತು ಅಘನಾಶಿನಿ–ವೇದಾವತಿ ನದಿ ಜೋಡಣೆ ಯೋಜನೆಗಳನ್ನು ವಿರೋಧಿಸಿ ಅಕ್ಟೋಬರ್ 10ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ಬೇಡ್ತಿ (ಗಂಗಾವಳಿ)–ವರದಾ ಮತ್ತು ಅಘನಾಶಿನಿ–ವೇದಾವತಿ ನದಿ ಜೋಡಣೆ ಯೋಜನೆಗಳನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂದು ಒತ್ತಾಯಿಸಿ ಬೇಡ್ತಿ–ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಈ ಪ್ರತಿಭಟನೆ ಆಯೋಜಿಸಿದೆ. ಅಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿರುವ ಧರಣಿಯಲ್ಲಿ ಪರಿಸರ ತಜ್ಞರು, ವಿಜ್ಞಾನಿಗಳು, ಹೋರಾಟಗಾರರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.

ಬೇಡ್ತಿ–ವರದಾ ಮತ್ತು ಅಘನಾಶಿನಿ–ವೇದಾವತಿ ನದಿ ಜೋಡಣೆ ಯೋಜನೆಗಳು ಅನುಷ್ಠಾನಗೊಂಡರೆ ಮಲೆನಾಡು ಹಾಗೂ ಕರಾವಳಿ ಪ್ರದೇಶಗಳ ನೈಸರ್ಗಿಕ ಪರಿಸರ ಮತ್ತು ಜನಜೀವನದ ಮೇಲೆ ಗಂಭೀರ ಪರಿಣಾಮ ಉಂಟಾಗಲಿದೆ ಎಂದು ಸಮಿತಿ ಆತಂಕ ವ್ಯಕ್ತಪಡಿಸಿದೆ. ಈ ಯೋಜನೆಗಳಿಂದ ಪಶ್ಚಿಮಘಟ್ಟ ಪ್ರದೇಶದಲ್ಲಿ ಭೂಕುಸಿತದ ಅಪಾಯ ಹೆಚ್ಚಾಗುವುದರ ಜೊತೆಗೆ ಜೀವವೈವಿಧ್ಯಕ್ಕೆ ಧಕ್ಕೆಯಾಗುವ ಸಾಧ್ಯತೆಯಿದೆ. ಅರಣ್ಯ ಪ್ರದೇಶಗಳಲ್ಲಿ ವಾಸಿಸುವ ಜನರು ತಮ್ಮ ನೆಲೆಗಳನ್ನು ಕಳೆದುಕೊಂಡು ಸ್ಥಳಾಂತರಗೊಳ್ಳಬೇಕಾದ ಪರಿಸ್ಥಿತಿ ಎದುರಾಗಬಹುದು. ಪರಿಸರ ಹಾಗೂ ಸ್ಥಳೀಯ ಜನರ ಬದುಕಿಗೆ ತುಂಬಲಾರದ ನಷ್ಟ ಉಂಟಾಗುವ ಆತಂಕವಿದೆ ಎಂದು ಸಮಿತಿ ತಿಳಿಸಿದೆ.

ನದಿ ಜೋಡಣೆ ಯೋಜನೆಗಳನ್ನು ಕೈಬಿಡುವಂತೆ ಒತ್ತಾಯಿಸಿ ಕಳೆದ ಒಂದು ವರ್ಷದಿಂದ ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ನಿರಂತರವಾಗಿ ಶಾಂತಿಯುತ ಹೋರಾಟ ನಡೆಸಲಾಗುತ್ತಿದೆ. ಜನಸಮಾವೇಶಗಳು, ಪಾದಯಾತ್ರೆಗಳು, ವಿಜ್ಞಾನಿಗಳ ವಿಚಾರಗೋಷ್ಠಿಗಳು ಹಾಗೂ ಪತ್ರ ಚಳವಳಿಗಳ ಮೂಲಕ ಯೋಜನೆಯ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ಇಷ್ಟೆಲ್ಲ ಹೋರಾಟಗಳ ನಡುವೆಯೂ ಬೇಡ್ತಿ–ವರದಾ ನದಿ ತಿರುವು ಯೋಜನೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಹಂತಕ್ಕೆ ತಲುಪಿದೆ. ಅಲ್ಲದೆ, ಯೋಜನೆಯ ಸರ್ವೆ ಕಾರ್ಯ ನಡೆಸಲು ಖಾಸಗಿ ಕಂಪನಿಯೊಂದಕ್ಕೆ ಟೆಂಡರ್ ನೀಡಲಾಗಿದೆ. ಇದರಿಂದ ಉತ್ತರ ಕನ್ನಡ ಜಿಲ್ಲೆಯ ಜನರ ಬದುಕಿನ ಅಳಿವು–ಉಳಿವಿನ ಪ್ರಶ್ನೆ ಎದುರಾಗಿದೆ ಎಂದು ಬೇಡ್ತಿ–ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಸ್ವರ್ಣವಲ್ಲಿ ಶ್ರೀಗಳ ಗೌರವಾಧ್ಯಕ್ಷತೆಯಲ್ಲಿ ಬೇಡ್ತಿ–ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಈ ಬೃಹತ್ ಹೋರಾಟವನ್ನು ಆಯೋಜಿಸಿದೆ. ಪ್ರತಿಭಟನೆಯನ್ನು ಯಶಸ್ವಿಗೊಳಿಸಲು ಈಗಾಗಲೇ ವ್ಯಾಪಕ ಸಂಪರ್ಕ ಅಭಿಯಾನ ಆರಂಭಿಸಲಾಗಿದೆ. ಸಾಮಾಜಿಕ ಮಾಧ್ಯಮಗಳ ಮೂಲಕವೂ ಪ್ರತಿಭಟನೆಯ ಕುರಿತು ಮಾಹಿತಿ ಹಂಚಿಕೊಳ್ಳಲಾಗುತ್ತಿದ್ದು, ಹಲವು ಸಂಘ–ಸಂಸ್ಥೆಗಳು, ಗಣ್ಯರು, ಸಾಹಿತಿಗಳು ಹಾಗೂ ಕಲಾವಿದರು ಹೋರಾಟಕ್ಕೆ ಬೆಂಬಲ ಘೋಷಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ನಾಗರಿಕರು, ಪರಿಸರ ಪ್ರೇಮಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಬೆಂಗಳೂರಿನಲ್ಲಿ ನೆಲೆಸಿರುವ ಉತ್ತರ ಕನ್ನಡ ಮೂಲದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಮಿತಿ ತಿಳಿಸಿದೆ.

ಪ್ರತಿಭಟನೆಯಲ್ಲಿ ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ, ನ್ಯಾಯಮೂರ್ತಿ ಸಿ.ಎಂ. ಜೋಶಿ, ಪರಿಸರ ತಜ್ಞ ಎ.ಎನ್. ಯಲ್ಲಪ್ಪ ರೆಡ್ಡಿ, ಪರಿಸರ ವಿಜ್ಞಾನಿ ಡಾ.ಟಿ.ವಿ. ರಾಮಚಂದ್ರ, ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ತೇಜಸ್ವಿನಿ ಅನಂತಕುಮಾರ್, ಹಿರಿಯ ನಟ ನೀರ್ನಳ್ಳಿ ರಾಮಕೃಷ್ಣ, ಡಾ.ವಿ.ಎನ್. ನಾಯಕ್, ಡಾ.ಗಿರಿಧರ್ ಕಜೆ, ಡಾ.ಶ್ರೀನಿವಾಸ್ ರೆಡ್ಡಿ, ಡಾ.ಪ್ರಕಾಶ್ ಮೇಸ್ತ, ನಾರಾಯಣ ಹೆಬ್ಬಾರ್ ಹಾಗೂ ಅರವಿಂದ ನಾಯಕ್ ಸೇರಿದಂತೆ ಹಲವು ಗಣ್ಯರು ಮತ್ತು ತಜ್ಞರು ಭಾಗವಹಿಸಲಿದ್ದಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor