ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಭದ್ರಾವತಿಯ ತಮ್ಮಣ್ಣ ಕಾಲೋನಿಯಲ್ಲಿ ಬೀಗ ಹಾಕಿದ್ದ ಮನೆಯೊಂದರಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಮನೆ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತನಿಂದ ಅಂದಾಜು ₹6,20,000 ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ವಶಪಡಿಸಿಕೊಳ್ಳಲಾಗಿದೆ.
ಏನಿದು ಪ್ರಕರಣ
ಭದ್ರಾವತಿಯ ತಮ್ಮಣ್ಣ ಕಾಲೋನಿ ನಿವಾಸಿ ವಿಜಯ ಎಂಬುವವರ ಮನೆಯಲ್ಲಿ ಚಿನ್ನಾಭರಣ ಕಳವು ನಡೆದಿತ್ತು. ಮನೆಯ ಬೀಗ ಹಾಕಿದ್ದ ಸಂದರ್ಭದಲ್ಲಿ ಅಂದಾಜು ₹4,80,000 ಮೌಲ್ಯದ 44 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಹಾಗೂ 4 ಚಿನ್ನದ ಉಂಗುರ ಕಳುವಾಗಿತ್ತು. ಒಟ್ಟು 48 ಗ್ರಾಂ ತೂಕದ ಚಿನ್ನಾಭರಣ ಕಳವಾಗಿರುವ ಕುರಿತು ಹೊಸಮನೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಸಂಬಂಧ ಹೊಸಮನೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 305ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೆಲವೇ ಗಂಟೆಗಳಲ್ಲಿ ಪ್ರೇಮ್ ಕುಮಾರ್ ಅಲಿಯಾಸ್ ಗಾಂಧಿ (19) ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಅಂದಾಜು ₹6,20,000 ಮೌಲ್ಯದ 44 ಗ್ರಾಂ 300 ಮಿಲಿಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
