
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: 27 ವರ್ಷದ ಯುವಕನೊಬ್ಬ 13 ವರ್ಷದ ಮಾನಸಿಕ ಅಸ್ವಸ್ಥ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅಪರಾಧಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ
ಘಟನೆಗೆ ಸಂಬಂಧಿಸಿದಂತೆ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ತನಿಖೆ ಪೂರ್ಣಗೊಳಿಸಿದ ತನಿಖಾಧಿಕಾರಿ ಹಾಗೂ ಪಿಎಸ್ಐ ರಾಜುರೆಡ್ಡಿ ಅವರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ನ್ನು ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಧರ್ ವಾದ ಮಂಡಿಸಿದ್ದರು


ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಿಂಗನಗೌಡ ಬಿ. ಪಾಟೀಲ್ , ಆರೋಪಿಯ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಆತನಿಗೆ 3 ವರ್ಷಗಳ ಕಠಿಣ ಕಾರಾಗೃಹವಾಸ ಹಾಗೂ 50,000 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಇದರೊಂದಿಗೆ ನೊಂದ ಬಾಲಕಿಗೆ ಪರಿಹಾರ ರೂಪದಲ್ಲಿ 40,000 ರೂ. ನೀಡುವಂತೆ ನ್ಯಾಯಾಲಯ ಆದೇಶ ಹೊರಡಿಸಿದೆ.

