ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಹಾಗೂ ಸಮಾಜ ಭಾಂದವರ ಸಮಾವೇಶ ಹಿನ್ನೆಲೆಯಲ್ಲಿ ಶಿವಮೊಗ್ಗಕ್ಕಿಂದು ಹಲವು ಮುಖಂಡರು ಆಗಮಿಸಲಿದ್ದಾರೆ. ಈ ಪೈಕಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಇಂದು ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿದ್ದಾರೆ. ಅವರನ್ನು ಸ್ವಾಗತಿಸಲು ಜಿಲ್ಲಾ ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಶನಿವಾರ ಬೆಳಗ್ಗೆ 9.30ಕ್ಕೆ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಆಗಮಿಸಲಿರುವ ಹರಿಪ್ರಸಾದ್ ಅವರು, ಪಕ್ಷದ ಪ್ರಮುಖರು, ವಿವಿಧ ಘಟಕಗಳ ಮುಖ್ಯಸ್ಥರು ಹಾಗೂ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಸಿ. ಯೋಗೀಶ್ ತಿಳಿಸಿದ್ದಾರೆ.
ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವುದು ಹಾಗೂ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಉದ್ದೇಶದಿಂದ ಕೆಪಿಸಿಸಿ ಅಧ್ಯಕ್ಷರು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ ಅಂಥಾ ಮಾಹಿತಿ ನೀಡಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು, ವಿವಿಧ ಘಟಕಗಳ ಪ್ರಮುಖರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಬೇಕು. ಆದರೆ, ಯಾವುದೇ ಕಾರಣಕ್ಕೂ ಹಾರ, ತುರಾಯಿಗಳನ್ನು ತರಬಾರದು ಎಂದು ಎಚ್.ಸಿ. ಯೋಗೀಶ್ ಮನವಿ ಮಾಡಿದರು.
ಇಂದು ಮಹಾನಗರ ಪಾಲಿಕೆಗೆ ಸಚಿವ ಮಧು ಬಂಗಾರಪ್ಪ ಭೇಟಿ
ಇನ್ನೂ ಇವತ್ತು ಜಿಲ್ಲಾ ಉಸ್ತುವಾರಿ ಸಚಿವರು ಸಹ ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಶಿವಮೊಗ್ಗ ದಸರಾ ಮಹೋತ್ಸವ ಹಾಗೂ ಜಂಬೂಸವಾರಿ ವೇಳೆ ನಡೆದ ಅವಘಡದ ಕುರಿತು ಚರ್ಚಿಸಲು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಶನಿವಾರ ಬೆಳಗ್ಗೆ 9ರಿಂದ 10 ಗಂಟೆಯವರೆಗೆ ಶಿವಮೊಗ್ಗ ಮಹಾನಗರ ಪಾಲಿಕೆಗೆ ಭೇಟಿ ನೀಡಲಿದ್ದಾರೆ. ದಸರಾ ಜಂಬೂಸವಾರಿ ವೇಳೆ ಸಂಭವಿಸಿದ ಅವಘಡ, ಬೆಳ್ಳಿ ಮಂಟಪ ಜಖಂಗೊಂಡಿರುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಪಾಲಿಕೆಯ ಅಧಿಕಾರಿಗಳೊಂದಿಗೆ ಸಚಿವರು ಸಮಾಲೋಚನೆ ನಡೆಸಲಿದ್ದಾರೆ ಎಂದು ಯೋಗೀಶ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಎಸ್.ಕೆ. ಮರಿಯಪ್ಪ, ನಾಗರಾಜ್ ಕಂಕಾರಿ, ಎಚ್. ಪಾಲಾಕ್ಷಿ, ಶಿವಕುಮಾರ್, ಕಲೀಂ ಪಾಷಾ, ಧೀರರಾಜ್ ಹೊನ್ನವಿಲೆ, ವಿಶ್ವನಾಥ್ ಕಾಶಿ, ರಾಜಶೇಖರ್, ನೂರುಲ್ಲಾ ಮಜರ್, ನಿರಂಜನ್ ಮತ್ತಿತರರು ಉಪಸ್ಥಿತರಿದ್ದರು.
ಇನ್ನೂ ಇಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಲಿರುವ ಸಚಿವ ಮಧು ಬಂಗಾರಪ್ಪ ಅವರು, ಕೆಪಿಸಿಸಿ ಅಧ್ಯಕ್ಷರೊಂದಿಗೆ ನಡೆಯುವ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಬೆಳಗ್ಗೆ 11.15ಕ್ಕೆ ತೀರ್ಥಹಳ್ಳಿಯ ಸುವರ್ಣ ಸಂಸ್ಕೃತಿ ಭವನದ ಆವರಣದಲ್ಲಿ ನಡೆಯಲಿರುವ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಹಾಗೂ ಸಮಾಜದ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣಾ ಸಮಿತಿ, ಆರ್ಯ ಈಡಿಗರ ಸಂಘ, ಬಿಲ್ಲವ ಸಂಘ ಹಾಗೂ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಶಿವಮೊಗ್ಗ ಹಾಗೂ ತೀರ್ಥಹಳ್ಳಿಯಲ್ಲಿ ನಡೆಯಲಿರುವ ಈ ಸಭೆಗಳು ಮತ್ತು ಕಾರ್ಯಕ್ರಮಗಳಲ್ಲಿ ಸಚಿವ ಮಧು ಬಂಗಾರಪ್ಪ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
