ಮಲೆನಾಡು ಟುಡೆ ಸುದ್ದಿ / ತರೀಕೆರೆ / ಚಲಿಸುತ್ತಿದ್ದ ಕ್ಯಾಂಟರ್‌ನಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡಿದ್ದ , ಬೆಂಕಿ ನಂದಿಸಲು ತೆರಳಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಯೊಬ್ಬರು ಗಾಯಗೊಂಡ ಬಗ್ಗೆ ಮಂಗಳವಾರದ ದಿನ ವರದಿಯಾಗಿದೆ. ಟಯರ್ ಸ್ಫೋಟಗೊಂಡ ಪರಿಣಾಮ ಗಾಯಗೊಂಡಿರುವ ಅಗ್ನಿಶಾಮಕ ಸಿಬ್ಬಂದಿ ಸದ್ಯ ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಕಿತ್ಸೆ ಪಡೆಯುತ್ತಿದ್ದಾರೆ.
ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಹೋಬಳಿಯ ಶಾಂತವೇರಿ ಗ್ರಾಮದ ಬಳಿ ಘಟನೆ ನಡೆದಿದ್ದು, ತರೀಕೆರೆ ಕಡೆಯಿಂದ ಲಿಂಗದಹಳ್ಳಿ ಮಾರ್ಗವಾಗಿ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಕ್ಯಾಂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕ್ಯಾಂಟರ್‌ನ ಎಂಜಿನ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹೊತ್ತಿಕೊಂಡಿದೆ ಆನಂತರ ಚಾಲಕ ಹಾಗೂ ಕ್ಲೀನರ್ ತಕ್ಷಣ ಕ್ಯಾಂಟರ್ ನಿಲ್ಲಿಸಿ ಕೆಳಗಿಳಿದಿದ್ದಾರೆ. ಇನ್ನೂ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದೆ. ಈ ವೇಳೆ ಕ್ಯಾಂಟರ್‌ನ ಟಯರ್ ಏಕಾಏಕಿ ಸ್ಫೋಟಗೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಶಿವಪ್ರಸಾದ್ ಗಾಯಗೊಂಡಿದ್ದಾರೆ.
ಗಾಯಗೊಂಡ ಶಿವಪ್ರಸಾದ್ ಅವರನ್ನು ತಕ್ಷಣ ತರೀಕೆರೆ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳುಹಿಸಲಾಗಿದೆ.
