ಸುದ್ದಿಯ ಸ್ಥಳ: Shivamogga district, Karnataka
ಮಲೆನಾಡು ಟುಡೆ ಸುದ್ದಿ / ನವದೆಹಲಿ / ಶೈಕ್ಷಣಿಕ ಪ್ರವಾಸದ ಅಂಗವಾಗಿ ರಾಷ್ಟ್ರ ರಾಜಧಾನಿ ನವದೆಹಲಿಗೆ ಆಗಮಿಸಿರುವ ಶಿವಮೊಗ್ಗ ಜಿಲ್ಲೆಯ ಸೋಗಾನೆ ಗ್ರಾಮದ ಶಾಲಾ ವಿದ್ಯಾರ್ಥಿಗಳು ನವದೆಹಲಿಯಲ್ಲಿರುವ ಕೇಂದ್ರ ಸಚಿವ ವಿ. ಸೋಮಣ್ಣ ಅವರ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ಮಕ್ಕಳನ್ನು ಪ್ರೀತಿಯಿಂದ ಬರಮಾಡಿಕೊಂಡ ಅವರು, ವಿದ್ಯಾರ್ಥಿಗಳೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿದರು.
ತಮ್ಮ ನಿವಾಸಕ್ಕೆ ಆಗಮಿಸಿದ ಎಳೆಯ ಮನಸ್ಸುಗಳೊಂದಿಗೆ ಬೆರೆತ ವಿ. ಸೋಮಣ್ಣ , ಮಕ್ಕಳನ್ನ ತಮ್ಮ ಚೇಂಬರ್ನಲ್ಲಿ ಕೂರಿಸಿದರು, ಅಹವಾಲುಗಳನ್ನ ಆಲಿಸುವ ರೀತಿಯಲ್ಲಿ ಮಕ್ಕಳನ್ನ ಮಾತನಾಡಿಸುತ್ತಾ ತಮ್ಮ ಇಲಾಖೆಯ ಹಾಗೂ ಸಚಿವ ಸ್ಥಾನದ ಮಾಹಿತಿ ತಿಳಿಸಿದರು. ಮಕ್ಕಳ ಶೈಕ್ಷಣಿಕ ಪ್ರವಾಸದ ಅನುಭವಗಳ ಕುರಿತು ಕೇಳಿ ತಿಳಿದುಕೊಂಡರು. ಈ ವೇಳೆ ದೆಹಲಿಯಲ್ಲಿ ವೀಕ್ಷಿಸಿದ ಐತಿಹಾಸಿಕ ಸ್ಥಳಗಳು ಹಾಗೂ ಅಲ್ಲಿನ ವಿಶೇಷತೆಗಳ ಬಗ್ಗೆ ಮಕ್ಕಳು ಉತ್ಸಾಹದಿಂದ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಮಕ್ಕಳ ಮುಗ್ಧ ಮಾತುಗಳಿಗೆ ಅವರು ಸಂತಸ ವ್ಯಕ್ತಪಡಿಸಿದರು.
ಮಕ್ಕಳ ಜೊತೆಗಿನ ಖುಷಿಯನ್ನು ಹಂಚಿಕೊಂಡು ಸೋಮಣ್ಣ ವಿದ್ಯಾರ್ಥಿ ದೆಸೆಯಲ್ಲಿಯೇ ದೊಡ್ಡ ಕನಸುಗಳನ್ನು ಕಾಣುವುದನ್ನು ರೂಢಿಸಿಕೊಳ್ಳಬೇಕು. ಆ ಕನಸುಗಳನ್ನು ನನಸಾಗಿಸಿಕೊಳ್ಳಲು ನಿರಂತರ ಪ್ರಯತ್ನ ಮತ್ತು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದು ಕಿವಿಮಾತು ಹೇಳಿದರು. ಅಲ್ಲದೆ, ಮುಂಬರುವ ಶೈಕ್ಷಣಿಕ ಭವಿಷ್ಯದಲ್ಲಿ ಉನ್ನತ ಸಾಧನೆಗೈಯುವಂತೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
