ಆರೋಪಿಗಳ ಸುಳಿವು ನೀಡುವವರಿಗೆ 50000 ಬಹುಮಾನ ಘೋಷಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ !ಏನಿದು ವಿಚಾರ!?

ಹಂಚಿಕೊಳ್ಳಿ
WhatsApp Facebook X Telegram
Tumari Crime Cases Belur Announces ₹50,000 Reward After School Fire Attempt
Tumari Crime Cases Belur Announces ₹50,000 Reward After School Fire Attempt

ಸುದ್ದಿಯ ಸ್ಥಳ: Sagara, Shivamogga, Karnataka

ಮಲೆನಾಡು ಟುಡೆ ಸುದ್ದಿ / ತುಮರಿ / ಸಾಗರ ತಾಲ್ಲೂಕಿನ ಕರೂರು ಹೋಬಳಿ ವ್ಯಾಪ್ತಿಯಲ್ಲಿ ಕಳೆದ 2 ತಿಂಗಳಿಂದ ನಡೆಯುತ್ತಿರುವ ಸರಣಿ ಅಪರಾಧ ಪ್ರಕರಣಗಳು ಹಾಗೂ ಕೆರೆಕ್ಕೆ ಸರ್ಕಾರಿ ಶಾಲೆಗೆ ಬೆಂಕಿ ಹಚ್ಚಲು ಯತ್ನಿಸಿದ ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಗುರುವಾರ ರಾಷ್ಟ್ರೀಯ ಹೆದ್ದಾರಿ 369ರಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಇನ್ನೂ ಈ ವಿಚಾರವಾಗಿ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಆರೋಪಿಗಳನ್ನು 2-3 ದಿನಗಳಲ್ಲಿ ಪತ್ತೆಹಚ್ಚುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದು, ಖಚಿತ ಮಾಹಿತಿ ನೀಡುವವರಿಗೆ ವೈಯಕ್ತಿಕವಾಗಿ ₹50,000 ಬಹುಮಾನ ಘೋಷಿಸಿದ್ದಾರೆ.

ಕರೂರು ಹೋಬಳಿಯ ಕೆರೆಕ್ಕೆ ಸರ್ಕಾರಿ ಶಾಲೆಗೆ ಬುಧವಾರ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಲು ಯತ್ನಿಸಿದ ಘಟನೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಯಿತು. ಕಳೆದ ಕೆಲವು ತಿಂಗಳುಗಳಿಂದ ಈ ಭಾಗದಲ್ಲಿ ಕಳ್ಳತನ ಸೇರಿದಂತೆ ಹಲವು ಅಪರಾಧ ಪ್ರಕರಣಗಳು ನಡೆಯುತ್ತಿದ್ದರೂ ಆರೋಪಿಗಳನ್ನು ಬಂಧಿಸಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಗ್ರಾಮಸ್ಥರು, ತುಮರಿ ಸಮೀಪದ ರಾಷ್ಟ್ರೀಯ ಹೆದ್ದಾರಿ 369ರ ಕೆರೆಕ್ಕೆ ಬಳಿ ರಸ್ತೆ ತಡೆ ನಡೆಸಿದರು.

ಪ್ರತಿಭಟನೆಯ ಸಂದರ್ಭದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಸರಣಿ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಬೇಕು ಹಾಗೂ ಜನರಲ್ಲಿ ಉಂಟಾಗಿರುವ ಆತಂಕವನ್ನು ನಿವಾರಿಸಲು ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡ ರಚಿಸುವ ಮೂಲಕ ನಿಗದಿತ ಅವಧಿಯಲ್ಲಿ ಪ್ರಕರಣಗಳನ್ನು ಭೇದಿಸಬೇಕು ಎಂದು ಒತ್ತಾಯಿಸಿದರು.

ಕಳವಾದ ಚಿನ್ನಾಭರಣಗಳ ವಿವರ ಸಮರ್ಪಕವಾಗಿ ದಾಖಲಿಸುತ್ತಿಲ್ಲ ಎಂಬ ಆರೋಪ

ಪ್ರತಿಭಟನೆಯಲ್ಲಿ ಮಾತನಾಡಿದ ಕೇಂದ್ರ ಸಾಂಬಾರು ಮಂಡಳಿ ಸದಸ್ಯ ಪ್ರಸನ್ನ ಕೆರೆಕ್ಕೆ, ಕಳ್ಳತನ ಪ್ರಕರಣಗಳಲ್ಲಿ ದೂರುದಾರರು ಕಳೆದುಕೊಂಡ ಚಿನ್ನಾಭರಣ ಸೇರಿದಂತೆ ವಿವಿಧ ವಸ್ತುಗಳ ವಿವರಗಳನ್ನು ಪೊಲೀಸರು ಸಮರ್ಪಕವಾಗಿ ದಾಖಲಿಸುತ್ತಿಲ್ಲ ಎಂದು ಆರೋಪಿಸಿದರು.

ಕಳ್ಳತನಕ್ಕೆ ಒಳಗಾದವರು ನೀಡುವ ಮಾಹಿತಿಯನ್ನು ದೂರುಗಳಲ್ಲಿ ಯಥಾವತ್ತಾಗಿ ದಾಖಲಿಸಬೇಕು. ಕಳವಾದ ವಸ್ತುಗಳ ಪ್ರಮಾಣವನ್ನು ಕಡಿಮೆ ಮಾಡಿ ದಾಖಲಿಸುವುದರಿಂದ ಪ್ರಕರಣದ ಗಂಭೀರತೆ ಕಡಿಮೆಯಾಗುತ್ತದೆ. ಬ್ಯಾಕೋಡು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಅಪರಾಧ ಪ್ರಕರಣಗಳು ನಡೆದಿದ್ದರೂ ಸಂತ್ರಸ್ತರಿಗೆ ಸಮರ್ಪಕ ನ್ಯಾಯ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕರೂರು ಹೋಬಳಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಪರಾಧ ಪ್ರಕರಣಗಳ ತನಿಖೆಗೆ ಜಿಲ್ಲಾ ಅಥವಾ ತಾಲ್ಲೂಕು ಮಟ್ಟದಲ್ಲಿ ವಿಶೇಷ ತನಿಖಾ ತಂಡ ರಚಿಸಬೇಕು. ತನಿಖೆಗೆ ಕಾಲಮಿತಿ ನಿಗದಿಪಡಿಸಿ ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಬೇಕು ಎಂದು ಕೆಡಿಪಿ ಸದಸ್ಯ ಸತ್ಯನಾರಾಯಣ ಜಿ.ಟಿ. ಆಗ್ರಹಿಸಿದರು.

ಗ್ರಾಮಸ್ಥರ ರಸ್ತೆ ತಡೆಯಿಂದ ರಾಷ್ಟ್ರೀಯ ಹೆದ್ದಾರಿ 369ರಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಕಾರರೊಂದಿಗೆ ಮಾತುಕತೆ ನಡೆಸಿದರು. ಬಳಿಕ ರಸ್ತೆ ತಡೆ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು.

ಈ ಭಾಗದಲ್ಲಿ ನಡೆದಿರುವ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಈಗಾಗಲೇ ಹಲವು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಕರಣಗಳ ಕುರಿತು ಎಎಸ್‌ಪಿ ಅವರೊಂದಿಗೆ ಚರ್ಚಿಸಿ ವಿಶೇಷ ತನಿಖಾ ತಂಡ ರಚಿಸಲಾಗುವುದು ಎಂದು ಸಿಪಿಐ ಸಂತೋಷ ಶೆಟ್ಟಿ ತಿಳಿಸಿದರು.

ಪ್ರತಿಭಟನೆಯ ಸಂದರ್ಭದಲ್ಲಿ ಸಬ್‌ಇನ್‌ಸ್ಪೆಕ್ಟರ್ ಶ್ರೀಪತಿ ಗಿನ್ನಿ, ಬಿಇಒ ಸದಾನಂದಸ್ವಾಮಿ, ಸಿಆರ್‌ಪಿ ಪ್ರಸನ್ನ ಕುಮಾರ್, ಸಂತೋಷ ಶೆಟ್ಟಿ, ಮಂಜಯ್ಯ ಸಂಸೆ, ಗಣಪತಿ ಹಿನೋಡಿ, ಅಣ್ಣಪ್ಪ, ಶ್ರೀಧರ್ ಚುಟ್ಟಿಕೆರೆ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

ಕೆರೆಕ್ಕೆ ಸರ್ಕಾರಿ ಶಾಲೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

ಕೆರೆಕ್ಕೆ ಸರ್ಕಾರಿ ಶಾಲೆಗೆ ಬೆಂಕಿ ಹಚ್ಚಲು ಯತ್ನಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಗುರುವಾರ ರಾತ್ರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಲೆಯ ಮುಖ್ಯ ಶಿಕ್ಷಕರಿಂದ ಘಟನೆಯ ಕುರಿತು ಮಾಹಿತಿ ಪಡೆದುಕೊಂಡ ಅವರು, ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ಆರೋಪಿಗಳ ಪತ್ತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಕರೂರು ಹೋಬಳಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಕಳ್ಳತನ ಸೇರಿದಂತೆ ಹಲವು ಅಪರಾಧ ಪ್ರಕರಣಗಳು ನಡೆಯುತ್ತಿರುವುದರಿಂದ ಜನರಲ್ಲಿ ಆತಂಕ ಉಂಟಾಗಿದೆ. ಈ ನಡುವೆ ಸರ್ಕಾರಿ ಶಾಲೆಗೆ ಬೆಂಕಿ ಹಚ್ಚಲು ಯತ್ನಿಸಿರುವ ಘಟನೆ ಗಂಭೀರ ಸ್ವರೂಪದ್ದಾಗಿದ್ದು, ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ಪ್ರಕರಣದ ಆರೋಪಿಗಳನ್ನು 2-3 ದಿನಗಳಲ್ಲಿ ಪತ್ತೆಹಚ್ಚಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಈ ಭಾಗದಲ್ಲಿ ಇತ್ತೀಚೆಗೆ ಮನೆಗಳ ಕಳ್ಳತನ ಪ್ರಕರಣಗಳು ಹೆಚ್ಚಾಗಿರುವ ಕುರಿತು ಸ್ಥಳೀಯರು ಶಾಸಕರ ಗಮನಕ್ಕೆ ತಂದರು. ವಿಶೇಷವಾಗಿ ಒಂಟಿ ಮನೆಗಳಲ್ಲಿ ವಾಸಿಸುವವರು ಆತಂಕ ಎದುರಿಸುತ್ತಿದ್ದು, ಕಳ್ಳತನ ಪ್ರಕರಣಗಳ ತನಿಖೆಗೂ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ಆರೋಪಿಗಳ ಸುಳಿವು ನೀಡಿದವರಿಗೆ ₹50,000 ಬಹುಮಾನ

ಕರೂರು ಹೋಬಳಿಯಲ್ಲಿ ನಡೆದಿರುವ ಅಪರಾಧ ಪ್ರಕರಣಗಳ ಆರೋಪಿಗಳ ಕುರಿತು ಖಚಿತ ಮಾಹಿತಿ ನೀಡುವವರಿಗೆ ವೈಯಕ್ತಿಕವಾಗಿ ₹50,000 ಬಹುಮಾನ ನೀಡುವುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಘೋಷಿಸಿದರು.

ಅಪರಾಧ ಪ್ರಕರಣಗಳ ಪತ್ತೆಗೆ ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದ್ದು, ಆರೋಪಿಗಳ ಬಗ್ಗೆ ಮಾಹಿತಿ ನೀಡುವವರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಬಹುಮಾನ ಘೋಷಿಸುವಂತೆ ಸಲಹೆ ನೀಡಿದರು. ಈ ಕುರಿತು ಕರಪತ್ರಗಳನ್ನು ಸಿದ್ಧಪಡಿಸಿ ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಕೆರೆಕ್ಕೆ ಶಾಲೆಗೆ 4 ಸಿಸಿಟಿವಿ ಕ್ಯಾಮೆರಾ ಅಳವಡಿಕೆಗೆ ಕ್ರಮ

ಸರ್ಕಾರಿ ಶಾಲೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತಾ ವ್ಯವಸ್ಥೆ ಬಲಪಡಿಸುವ ಅಗತ್ಯವಿದೆ ಎಂದು ಶಾಸಕ ಬೇಳೂರು ತಿಳಿಸಿದರು. ಅಪರಾಧ ಪ್ರಕರಣಗಳ ತನಿಖೆಗೆ ಅಗತ್ಯವಾದ ಸುಳಿವುಗಳನ್ನು ಸಂಗ್ರಹಿಸಲು ಸಿಸಿಟಿವಿ ಕ್ಯಾಮೆರಾಗಳು ಸಹಕಾರಿಯಾಗಲಿವೆ. ಸಾರ್ವಜನಿಕ ಸ್ಥಳಗಳಲ್ಲಿ ಕ್ಯಾಮೆರಾಗಳ ಅಳವಡಿಕೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸೂಚಿಸಿದರು.

ಕೆರೆಕ್ಕೆ ಸರ್ಕಾರಿ ಶಾಲೆಯಲ್ಲಿ ಮುಂದಿನ ದಿನಗಳಲ್ಲಿ 4 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು. ಸ್ಥಳೀಯ ದಾನಿಗಳ ಸಹಕಾರದೊಂದಿಗೆ ಕ್ಯಾಮೆರಾಗಳನ್ನು ಅಳವಡಿಸುವ ಕಾರ್ಯ ಕೈಗೆತ್ತಿಕೊಳ್ಳಬಹುದು ಎಂದು ಹೇಳಿದರು.

ಶಾಲೆಗಳು ಸೇರಿದಂತೆ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಲು ಸ್ಥಳೀಯರ ಸಹಕಾರ ಪಡೆಯಬೇಕು. ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆಯಿಂದ ಅಪರಾಧಗಳನ್ನು ತಡೆಗಟ್ಟುವುದರ ಜೊತೆಗೆ ಪ್ರಕರಣಗಳ ತನಿಖೆಗೂ ನೆರವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಗುರುವಾರ ರಾತ್ರಿ ತುಮರಿ ಗ್ರಾಮ ಪಂಚಾಯಿತಿಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಸಭೆ ನಡೆಸಿ, ಕರೂರು ಹೋಬಳಿ ವ್ಯಾಪ್ತಿಯ ಅಪರಾಧ ಪ್ರಕರಣಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಸಿಪಿಐ ಸಂತೋಷ ಶೆಟ್ಟಿ, ಪಿಡಿಒ ಭೋಗರಾಜ್, ಕೆಡಿಪಿ ಸದಸ್ಯ ಸತ್ಯನಾರಾಯಣ ಜಿ.ಟಿ., ಮುಖ್ಯ ಶಿಕ್ಷಕಿ ಅಕ್ಷತಾ, ವನಜಾಕ್ಷಿ, ಅಶೋಕ ಬೇಳೂರು, ವಿ.ಟಿ. ಸ್ವಾಮಿ, ಭರತ್ ವಿ.ಪಿ. ಹಾಗೂ ದೇವರಾಜ್ ಕಪ್ಪದೂರು ಉಪಸ್ಥಿತರಿದ್ದರು.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor