ಶಿವಮೊಗ್ಗ: ಜನವರಿ-ಫೆಬ್ರವರಿ ಒಳಗೆ ಆಶ್ರಯ ಮನೆಗಳ ಹಂಚಿಕೆ, ಆತಂಕ ಬೇಡ ಎಂದ ಶಾಸಕ ಚನ್ನಬಸಪ್ಪ

ಹಂಚಿಕೊಳ್ಳಿ
WhatsApp Facebook X Telegram
Shivamogga Ashraya Houses Allotment by Feb
Shivamogga Ashraya Houses Allotment by Feb

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ : ಶಿವಮೊಗ್ಗ ನಗರದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಬಹುದಿನಗಳ ಕನಸಾದ ಆಶ್ರಯ ಮನೆಗಳ ಹಂಚಿಕೆ ಪ್ರಕ್ರಿಯೆಗೆ ವೇಗ ನೀಡಲಾಗಿದ್ದು, ಮುಂಬರುವ ಜನವರಿ ಅಥವಾ ಫೆಬ್ರವರಿ ತಿಂಗಳ ಒಳಗಾಗಿ ಬಾಕಿ ಉಳಿದಿರುವ ಎಲ್ಲಾ ಅರ್ಹ ಫಲಾನುಭವಿಗಳಿಗೆ ಮೂಲಭೂತ ಸೌಕರ್ಯಗಳೊಂದಿಗೆ ಮನೆಗಳನ್ನು ಹಸ್ತಾಂತರಿಸಲಾಗುವುದು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಭರವಸೆ ನೀಡಿದ್ದಾರೆ.

ಇಂದು ಶಿವಮೊಗ್ಗದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು 3,000 ಆಶ್ರಯ ಮನೆಗಳ ನಿರ್ಮಾಣಕ್ಕಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಪರಿಶಿಷ್ಟ ಜಾತಿ (SC) ಹಾಗೂ ಸಾಮಾನ್ಯ ವರ್ಗದ ಫಲಾನುಭವಿಗಳಿಗಾಗಿ ಒಟ್ಟು 262.62 ಕೋಟಿ ರೂಪಾಯಿ ವೆಚ್ಚದ ಯೋಜನೆ ರೂಪಿಸಲಾಗಿದ್ದು, ಇದರಲ್ಲಿ ಕಟ್ಟಡ ನಿರ್ಮಾಣಕ್ಕಾಗಿಯೇ 146.52 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಈ ಪೈಕಿ ಈಗಾಗಲೇ ಸುಮಾರು 100 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, ಉಳಿದ 5 ಕೋಟಿ ರೂಪಾಯಿ ಬಿಡುಗಡೆಗೆ ಬಾಕಿ ಇದೆ ಎಂದು ಯೋಜನೆಯ ಆರ್ಥಿಕ ವಿವರಗಳನ್ನು ಹಂಚಿಕೊಂಡರು .

ಈ ಹಿಂದೆ ವಿ. ಸೋಮಣ್ಣ ಅವರು ವಸತಿ ಸಚಿವರಾಗಿದ್ದ ಅವಧಿಯಲ್ಲಿ ಈ ಯೋಜನೆಗೆ ಸಂಬಂಧಿಸಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿತ್ತು. ತದನಂತರ ಜಮೀರ್ ಅಹಮದ್ ಖಾನ್ ಅವರು ವಸತಿ ಸಚಿವರಾದ ಬಳಿಕವೂ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಮಸ್ಯೆಗಳ ಕುರಿತು ಚರ್ಚಿಸಲಾಗಿದೆ. ಇಲ್ಲಿಯವರೆಗೆ ಈ ಯೋಜನೆಯ ಪ್ರಗತಿಗಾಗಿ ಒಟ್ಟು 12 ಸಭೆಗಳನ್ನು ನಡೆಸಲಾಗಿದ್ದು, ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳು ಸಹ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಶಾಸಕರು ತಿಳಿಸಿದರು.

ಮನೆ ನಿರ್ಮಾಣ ವಿಳಂಬದಿಂದಾಗಿ ಬಡವರು ತಾವು ಕಟ್ಟಿದ್ದ ಹಣವನ್ನು ವಾಪಸ್ ಕೇಳುವಂತಹ ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಗುತ್ತಿಗೆದಾರರು ಹಾಗೂ ಆಶ್ರಯ ಸಮಿತಿಯೊಂದಿಗೆ ಸುದೀರ್ಘವಾಗಿ ಚರ್ಚಿಸಿ ತಾಂತ್ರಿಕ ಅಡಚಣೆಗಳನ್ನು ನಿವಾರಿಸಲಾಗಿದೆ. ಬಾಕಿ ಉಳಿದಿದ್ದ 108 ಇ-ಸ್ವತ್ತು ಸಮಸ್ಯೆಗಳನ್ನು ಬಗೆಹರಿಸುವುದರ ಜೊತೆಗೆ, ಫಲಾನುಭವಿಗಳಿಗೆ ಅಗತ್ಯವಿರುವ ಬ್ಯಾಂಕ್ ಸಾಲ ಸೌಲಭ್ಯ ಹಾಗೂ ಬಡಾವಣೆಗೆ ಬೇಕಾದ ವಿದ್ಯುತ್ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಲಾಗಿದೆ. ಆದ್ದರಿಂದ ಯಾವುದೇ ಫಲಾನುಭವಿಗಳು ಭಯಭೀತರಾಗುವ ಅಥವಾ ಆತಂಕಪಡುವ ಅಗತ್ಯವಿಲ್ಲ ಎಂದು ಚನ್ನಬಸಪ್ಪ ಸ್ಪಷ್ಟಪಡಿಸಿದರು.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor