ಸುದ್ದಿಯ ಸ್ಥಳ: Bengaluru, Karnataka
ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ರಾಜ್ಯದ ಎಲ್ಲ ಶಾಲಾ ಕಾಲೇಜುಗಳಲ್ಲಿ ನಾಳೆ ಅಂದರೆ ನವೆಂಬರ್ 26ರಂದು ಸಂವಿಧಾನ ದಿನಾಚರಣೆ ಆಯೋಜಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರ ಕಚೇರಿ ಸುತ್ತೋಲೆ ಹೊರಡಿಸಿದೆ. ಸಂವಿಧಾನದ ಮಹತ್ವ, ಮೌಲ್ಯಗಳು ಹಾಗೂ ತತ್ವಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ವಿವಿಧ ಚಟುವಟಿಕೆಗಳನ್ನು ಆಯೋಜಿಸಲು ಸೂಚಿಸಲಾಗಿದೆ.ಈ ಬಗ್ಗೆ ಪೂರ್ತಿ ವಿವರ ಹೀಗಿದೆ
ಸಂವಿಧಾನ ದಿನಾಚರಣೆ
ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ಪ್ರತಿ ವರ್ಷ ನವೆಂಬರ್ 26ರಂದು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ. ಸಂವಿಧಾನದಲ್ಲಿ ಅಡಕವಾಗಿರುವ ಮೌಲ್ಯಗಳು ಮತ್ತು ತತ್ವಗಳನ್ನು ಎತ್ತಿ ತೋರಿಸುವ ಹಾಗೂ ಪುನರುಚ್ಚರಿಸುವ ಉದ್ದೇಶದಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಪ್ರಸಕ್ತ ಸಾಲಿನ ಸಂವಿಧಾನ ದಿನಾಚರಣೆಯನ್ನು ರಾಜ್ಯದ ಎಲ್ಲ ಶಾಲಾ ಕಾಲೇಜುಗಳಲ್ಲಿ ಆಚರಿಸುವಂತೆ ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಂಟಿ ಕಾರ್ಯದರ್ಶಿಗಳು ನವೆಂಬರ್ 20ರಂದು ಪತ್ರದ ಮೂಲಕ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ನವೆಂಬರ್ 23ರಂದು ಸುತ್ತೋಲೆ ಹೊರಡಿಸಿದೆ.
ಪ್ರಮುಖ ಅಂಶಗಳು
- ನವೆಂಬರ್ 26ರಂದು ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನಾ ಸಮಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲಾ ಸಿಬ್ಬಂದಿ ಹಾಗೂ ಪೋಷಕರು ಒಟ್ಟಾಗಿ ಸಂವಿಧಾನದ ಪೀಠಿಕೆಯನ್ನು ಓದುವಂತೆ ಸೂಚಿಸಲಾಗಿದೆ.
- ಸಂವಿಧಾನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಚಿತ್ರಕಲೆ, ಪೋಸ್ಟರ್ ತಯಾರಿಕೆ, ರಸಪ್ರಶ್ನೆ, ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಬೇಕು. ಸಂವಿಧಾನದಿಂದ ಪ್ರೇರಿತವಾದ ಬುಕ್‌ಮಾರ್ಕ್‌ಗಳು, ಬ್ಯಾಡ್ಜ್‌ಗಳು ಅಥವಾ ಕೊಲಾಜ್‌ಗಳನ್ನು ವಿನ್ಯಾಸಗೊಳಿಸಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು ಎಂದು ತಿಳಿಸಲಾಗಿದೆ.
- ಭಾರತದ ಸಂವಿಧಾನದ ಐತಿಹಾಸಿಕ ವಿಕಾಸ ಹಾಗೂ ಸಂವಿಧಾನ ರೂಪಿಸಿದ ಪ್ರಮುಖ ವ್ಯಕ್ತಿಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಸಿದ್ಧಪಡಿಸಿರುವ ಕಿರು ಟಿಪ್ಪಣಿಯನ್ನು ಬಳಸಿಕೊಳ್ಳಲು ಸೂಚಿಸಲಾಗಿದೆ.
- ಜಿಲ್ಲಾ ಹಂತದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಆಡಳಿತ ಮತ್ತು ಅಭಿವೃದ್ಧಿ ವಿಭಾಗದ ಉಪನಿರ್ದೇಶಕರು ಎಲ್ಲ ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು.
- ಕಾರ್ಯಕ್ರಮದ ಉತ್ತಮ ಗುಣಮಟ್ಟದ ಜಿಯೋ ಟ್ಯಾಗ್ ಹೊಂದಿರುವ ಛಾಯಾಚಿತ್ರಗಳು ಹಾಗೂ ವಿಡಿಯೋಗಳನ್ನು ಅಪ್‌ಲೋಡ್ ಮಾಡಿ, ಅವುಗಳ ಲಿಂಕ್‌ಗಳನ್ನು ಇಲಾಖೆಯು ಒದಗಿಸಿರುವ ಸ್ಪ್ರೆಡ್‌ಶೀಟ್‌ನಲ್ಲಿ ನಮೂದಿಸುವಂತೆ ನಿರ್ದೇಶನ ನೀಡಲಾಗಿದೆ.
- ಈ ಸಂಬಂಧ ಎಲ್ಲ ಜಿಲ್ಲೆಗಳ ಆಡಳಿತ ವಿಭಾಗದ ಉಪನಿರ್ದೇಶಕರು, ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು, ಅಭಿವೃದ್ಧಿ ವಿಭಾಗದ ಉಪನಿರ್ದೇಶಕರು, ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಾಲಾ ಮುಖ್ಯಶಿಕ್ಷಕರಿಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
