ಸುದ್ದಿಯ ಸ್ಥಳ: Shivamogga district, Karnataka
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಭದ್ರಾ ಬಲದಂಡೆ ಮತ್ತು ಎಡದಂಡೆ ನಾಲೆಗಳಿಗೆ ಕನಿಷ್ಠ 20 ದಿನಗಳ ಕಾಲ ನೀರು ಹರಿಸುವಂತೆ ಆಗ್ರಹಿಸಿ ರೈತರು ನಡೆಸ್ತಿರುವ ಹೋರಾಟ ಇದೀಗ ಇನ್ನೊಂದು ಮಜಲು ಪಡೆದುಕೊಂಡಿದೆ. ಈ ನಿಟ್ಟಿನಲ್ಲಿ ಹೋರಾಟ ಮುಂದುವರಿಸಿರುವ ರೈತರು, ಇದೇ ನವೆಂಬರ್ 30ರಂದು ಶಿವಮೊಗ್ಗ ನಗರದ ಮುಖ್ಯ ರಸ್ತೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ರಸ್ತೆ ಬಂದ್ ಪ್ರತಿಭಟನೆ ವಿವರ
ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ರೈತ ಸಂಘಟನೆಗಳು ಹೋರಾಟದ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಹಿತರಕ್ಷಣಾ ಸಮಿತಿ ವತಿಯಿಂದ ಈ ಹೋರಾಟ ಹಮ್ಮಿಕೊಳ್ಳಲಾಗಿದೆ. ರೈತ ಸಂಘದ ಸಂಸ್ಥಾಪಕ ಸದಸ್ಯ ಕೆ.ಟಿ. ಗಂಗಾಧರ್ ಅವರ ನೇತೃತ್ವದಲ್ಲಿ ಸೋಮವಾರ (ನವೆಂಬರ್ 30) ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಯಲಿದೆ.
ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರಿಸಲು ನೀರಿನ ಅಗತ್ಯವಿದೆ. ಆದ್ದರಿಂದ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಬಲದಂಡೆ ಮತ್ತು ಎಡದಂಡೆ ನಾಲೆಗಳಿಗೆ ಕನಿಷ್ಠ 20 ದಿನ ನೀರು ಹರಿಸಲು ಕ್ರಮ ಕೈಗೊಳ್ಳಬೇಕು, ಇಲ್ಲವಾದಲ್ಲಿ ಹೋರಾಟ ಮುಂದುವರಿಯುವುದು ಎಂದು ಎಂದು ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್. ಮಂಜುನಾಥೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
