ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಗರದ ಗಾಂಧಿ ಬಜಾರ್ (Shivamogga Gandhi Bazaar) ಪ್ರದೇಶದಲ್ಲಿ ನಿನ್ನೆ ದಿನ ವಿವಿಧ ಅಂಗಡಿಗಳ ಮೇಲೆ ಮಹಾನಗರ ಪಾಲಿಕೆ ಅಧಿಕಾರಿಗಳು ಸೋಮವಾರ ದಿಢೀರ್ ದಾಳಿ ನಡೆಸಿದ್ದು, ಒಟ್ಟು ₹20 ಸಾವಿರ ದಂಡ ವಿಧಿಸಿದ್ದಾರೆ. ಮಹಾನಗರ ಪಾಲಿಕೆ ಆಯುಕ್ತ ಕೆ. ಮಾಯಣ್ಣಗೌಡ ಅವರ ನಿರ್ದೇಶನದ ಮೇರೆಗೆ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.
ಗಾಂಧಿ ಬಜಾರ್‌ನಲ್ಲಿ ನಿಷೇಧಿತ ಪ್ಲಾಸ್ಟಿಕ್‌ನ್ನು ದಾಸ್ತಾನು ಮಾಡಿಕೊಂಡು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಕ್ಯಾರಿ ಬ್ಯಾಗ್ ಹಾಗೂ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಪರಿಶೀಲಿಸಿದ್ದಾರೆ. ಅಲ್ಲದೆ ಅಲ್ಲಿದ್ದ ನಿಷೇಧಿತ ಪ್ಲಾಸ್ಟಿಕ್‌ನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತಾಗಿ ಅಂಗಡಿ ಮಾಲೀಕರಿಗೆ ದಂಡ ವಿಧಿಸಿದ ಅಧಿಕಾರಿಗಳು, ಮುಂದಿನ ದಿನಗಳಲ್ಲಿ ಇಂತಹ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.
ಕಾರ್ಯಾಚರಣೆ ವೇಳೆ ಮಹಾನಗರ ಪಾಲಿಕೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಪರಿಸರ), ಆರೋಗ್ಯ ನಿರೀಕ್ಷಕರು ಹಾಗೂ ಪೌರ ಕಾರ್ಮಿಕ ಸಿಬ್ಬಂದಿ ಉಪಸ್ಥಿತರಿದ್ದರು.
