ಸುದ್ದಿಯ ಸ್ಥಳ: Bhadravati, Shivamogga, Karnataka
ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಭದ್ರಾ ಜಲಾಶಯದ ಬಲದಂಡೆ ಮತ್ತು ಎಡದಂಡೆ ನಾಲೆಗಳಿಗೆ ತಲಾ 10 ದಿನಗಳ ಕಾಲ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಅವರು ಮುಖ್ಯಮಂತ್ರಿ, ನೀರಾವರಿ ಸಚಿವ ಚೆಲುವರಾಯಸ್ವಾಮಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಮಾತುಕತೆ ನಡೆಸಿ ನೀರು ಹರಿಸುವಂತೆ ಮನವಿ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಆ ಹಿನ್ನೆಲೆಯಲ್ಲಿ ಭದ್ರಾ ಬಲದಂಡೆ ನಾಲೆಗೆ 10 ದಿನಗಳ ಕಾಲ ಪ್ರತಿದಿನ 1,500 ಕ್ಯೂಸೆಕ್ ಹಾಗೂ ಎಡದಂಡೆ ನಾಲೆಯಲ್ಲಿ 10 ದಿನಗಳ ಕಾಲ ಪ್ರತಿದಿನ 500 ಕ್ಯೂಸೆಕ್ ನೀರು ಹರಿಸಲು ತೀರ್ಮಾನಿಸಲಾಗಿದೆ. ಇದರೊಂದಿಗೆ ಗೋಂದಿ ನಾಲೆಗೂ ನೀರು ಹರಿಸಲು ಸರ್ಕಾರ ಒಪ್ಪಿಗೆ ನೀಡಿದೆ ಎಂದು ಬಸವರಾಜಪ್ಪ ಮಾಹಿತಿ ನೀಡಿದ್ದಾರೆ.ಈ ಕುರಿತು ಸೋಮವಾರ ಅಧಿಕೃತ ಆದೇಶದ ಪ್ರತಿ ಹೊರಬೀಳುವ ನಿರೀಕ್ಷೆಯಿದೆ ಎಂದಿದ್ದಾರೆ. ಭದ್ರಾ ಜಲಾಶಯದಲ್ಲಿ ಪ್ರಸ್ತುತ 172.3 ಅಡಿ ನೀರು ಸಂಗ್ರಹವಿದ್ದು, ರೈತರ ಸಂಕಷ್ಟಕ್ಕೆ ಸ್ಪಂದಿಸಿ ನೀರು ಹರಿಸಲು ನಿರ್ಧಾರ ಕೈಗೊಂಡ ಮುಖ್ಯಮಂತ್ರಿ, ನೀರಾವರಿ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಅವರಿಗೆ ರೈತರ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ.
