ಭದ್ರಾ ನಾಲೆಗಳಿಗೆ ನೀರು ಹರಿಸಲು ಆಗ್ರಹ: ನ.25ರಂದು ಟ್ರ್ಯಾಕ್ಟರ್ ರ‍್ಯಾಲಿ, ಡಿಸಿ ಕಚೇರಿಗೆ ಮುತ್ತಿಗೆ

ಹಂಚಿಕೊಳ್ಳಿ
WhatsApp Facebook X Telegram
Bhadra Canal Water Release Farmers to Hold Tractor Rally in Shivamogga on November 25
Bhadra Canal Water Release Farmers to Hold Tractor Rally in Shivamogga on November 25

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಭದ್ರಾ ಜಲಾಶಯದ ಎಡ ಮತ್ತು ಬಲದಂಡೆ ನಾಲೆಗಳಿಗೆ 20 ದಿನಗಳ ಕಾಲ ನೀರು ಹರಿಸುವಂತೆ ಒತ್ತಾಯಿಸಿ ನವೆಂಬರ್ 25ರಂದು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಟ್ರ್ಯಾಕ್ಟರ್ ರ‍್ಯಾಲಿ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ರೈತ ಸಂಘದ ವರಿಷ್ಠ ನಾಯಕ ಕೆ.ಟಿ. ಗಂಗಾಧರ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ 25ರಂದು ಬೆಳಗ್ಗೆ 10 ಗಂಟೆಗೆ ಪುರಲೆ ಗ್ರಾಮದ ವೃತ್ತದಿಂದ ಟ್ರ್ಯಾಕ್ಟರ್ ರ‍್ಯಾಲಿ ಆರಂಭಿಸಲಾಗುವುದು. ರ‍್ಯಾಲಿ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಲಿದ್ದು, ಬಳಿಕ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಭದ್ರಾ ನಾಲೆಗಳ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದಿರುವ ಅಡಕೆ, ತೆಂಗು ಹಾಗೂ ಬಾಳೆ ಬೆಳೆಗಳು ನೀರಿನ ಕೊರತೆಯಿಂದ ಒಣಗುವ ಪರಿಸ್ಥಿತಿ ಎದುರಾಗಿದೆ. ಬೆಳೆಗಳನ್ನು ಉಳಿಸಿಕೊಳ್ಳಲು ಸದ್ಯ ನೀರಿನ ಅಗತ್ಯವಿದೆ. ಇಂತಹ ಸಂದರ್ಭದಲ್ಲಿ ನಾಲೆಗಳಿಗೆ ನೀರು ಹರಿಸದೆ ಸರ್ಕಾರ ಅಚ್ಚುಕಟ್ಟು ಪ್ರದೇಶದ ರೈತರಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.

ಸರ್ಕಾರ ತಕ್ಷಣವೇ ನೀರಾವರಿ ಸಲಹಾ ಸಮಿತಿ ಸಭೆ ಕರೆದು ಭದ್ರಾ ಜಲಾಶಯದ ಎಡ ಮತ್ತು ಬಲದಂಡೆ ನಾಲೆಗಳಿಗೆ 20 ದಿನಗಳ ಕಾಲ ನೀರು ಹರಿಸಲು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಜನವರಿಯಿಂದ ಮೇವರೆಗೆ ಪ್ರತಿ ತಿಂಗಳು 20 ದಿನಗಳ ಕಾಲ ರೈತರ ಬೆಳೆಗಳಿಗೆ ನಾಲೆಗಳ ಮೂಲಕ ನೀರು ಒದಗಿಸುವ ವೇಳಾಪಟ್ಟಿಯನ್ನು ಪ್ರಕಟಿಸಬೇಕು ಎಂದು ಆಗ್ರಹಿಸಿದರು.

ನೀರಿನ ಅಭಾವದ ನಡುವೆಯೇ ಭದ್ರಾ ಮೇಲ್ದಂಡೆ ಯೋಜನೆಗೆ ಪರೀಕ್ಷಾರ್ಥವಾಗಿ ನೀರು ಹರಿಸಿರುವುದು ವಿವೇಚನೆಯ ಕ್ರಮವಲ್ಲ. ಸರ್ಕಾರದ ಈ ನೀತಿ ಖಂಡನೀಯ. ಪ್ರಸ್ತುತ ರೈತರ ಬೆಳೆಗಳಿಗೆ ನೀರು ಬಿಡುಗಡೆ ಮಾಡುವುದು ಅನಿವಾರ್ಯವಾಗಿದೆ ಎಂದರು.

ತುಂಗಾ ಏತ ನೀರಾವರಿ ಯೋಜನೆಗೆ ಬಾಕಿ ಇರುವ ಅನುದಾನವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಬಿಡುಗಡೆ ಮಾಡಬೇಕು. ರೈತರ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಒತ್ತಾಯಿಸಿದರು.

ಭದ್ರಾ ಜಲಾಶಯವನ್ನು ವಿಶ್ವೇಶ್ವರಯ್ಯ ನೀರಾವರಿ ನಿಗಮದ ಅಧೀನಕ್ಕೆ ಒಳಪಡಿಸುವ ಪ್ರಯತ್ನ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಜಲಾಶಯವನ್ನು ಪ್ರಸ್ತುತ ಇರುವ ಕರ್ನಾಟಕ ನೀರಾವರಿ ನಿಗಮದ ವ್ಯಾಪ್ತಿಯಲ್ಲಿಯೇ ಮುಂದುವರಿಸಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಜಗನ್ನಾಥ್, ಯಶವಂತ್ ರಾವ್ ಘೋರ್ಪಡೆ, ಜಗದೀಶ್, ಕೃಷ್ಣಮೂರ್ತಿ, ಗೊಂದಿ ಜಯರಾಮ್, ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor