bhadra dam : ಶಿವಮೊಗ್ಗ : ಭದ್ರಾ ಜಲಾಶಯಕ್ಕೆ ಭಾರೀ ಪ್ರಮಾಣದ ಒಳಹರಿವು ಬರುತ್ತಿರುವ ಹಿನ್ನೆಲೆಯಲ್ಲಿ ಅಣೆಕಟ್ಟಿನಲ್ಲಿರುವ ಹೆಚ್ಚುವರಿ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಹಾಗಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕೆಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಆರ್. ರವಿಚಂದ್ರ ತಿಳಿಸಿದ್ದಾರೆ.
ಪ್ರಸ್ತುತ ಭದ್ರಾ ಜಲಾಶಯಕ್ಕೆ ಪ್ರತಿದಿನ 20,000-25,000 ಕ್ಯೂಸೆಕ್‌ಗಳಷ್ಟು ನೀರು ಹರಿದುಬರುತ್ತಿದೆ. ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗುವ ಸಾಧ್ಯತೆ ಇದೆ. ಈ ಹಿನ್ನಲೆ ಅಣೆಕಟ್ಟಿನ ಸುರಕ್ಷತೆಗಾಗಿ ಸ್ಪಿಲ್‌ವೇ ಗೇಟ್‌ಗಳ ಮೂಲಕ ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
bhadra dam : ರೈತರ ಗೊಂದಲಕ್ಕೆ ಸ್ಪಷ್ಟನೆ
ಜಲಾಶಯದಲ್ಲಿ ನೀರು ಸಂಗ್ರಹಿಸದೆ ನದಿಗೆ ನೀರು ಬಿಡಲಾಗುತ್ತಿದೆ ಎಂದು ಅಚ್ಚುಕಟ್ಟು ವ್ಯಾಪ್ತಿಯ ಕೆಲವು ರೈತರು ಕಚೇರಿಗೆ ಕರೆ ಮಾಡಿ ಪ್ರಶ್ನಿಸುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಅಧಿಕಾರಿಗಳು, ಜಲಾಶಯದ ಸುರಕ್ಷತೆಗಾಗಿ ‘ರೂಲ್ ಕರ್ವ್’ (Rule Curve) ಪದ್ಧತಿಯನ್ನು ಕಡ್ಡಾಯವಾಗಿ ಪಾಲಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ನಿಯಮದ ಪ್ರಕಾರ, ಜಲಾಶಯದಲ್ಲಿ ನೀರಿನ ಸಂಗ್ರಹ ನಿಗದಿತ ಪ್ರಮಾಣಕ್ಕಿಂತ ಹೆಚ್ಚಾದಾಗ, ಹೆಚ್ಚುವರಿ ನೀರನ್ನು ಕಡ್ಡಾಯವಾಗಿ ಹೊರಬಿಡಬೇಕಾಗುತ್ತದೆ. ಇದೇ ಕಾರಣಕ್ಕೆ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ನೀರನ್ನು ನದಿಗೆ ಬಿಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ನದಿ ಪಾತ್ರದ ಜನರಿಗೆ ಸೂಚನೆ:
ಭದ್ರಾ ನದಿಯ ಎಡ ಮತ್ತು ಬಲ ದಂಡೆಯುದ್ದಕ್ಕೂ ಇರುವ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಆರ್. ರವಿಚಂದ್ರ ಮನವಿ ಮಾಡಿದ್ದಾರೆ. ಅಲ್ಲದೆ, ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು ಮತ್ತು ಜಾನುವಾರುಗಳನ್ನು ಮೇಯಿಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಈ ಸೂಚನೆಗಳನ್ನು ಪಾಲಿಸಿ ಸಹಕರಿಸುವಂತೆ ಅವರು ಕೋರಿದ್ದಾರೆ.