ಸುದ್ದಿಯ ಸ್ಥಳ: Shivamogga district, Karnataka
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಭದ್ರಾ ಜಲಾಶಯದ ಎಡದಂಡೆ ಮತ್ತು ಬಲದಂಡೆ ನಾಲೆಗಳಿಗೆ ಕನಿಷ್ಠ 20 ದಿನಗಳ ಕಾಲ ನೀರು ಹರಿಸಬೇಕು. ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಸ್ತುತ ಹರಿಸಲಾಗುತ್ತಿರುವ ನೀರನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷೀಯ ಮಂಡಳಿ ಸದಸ್ಯ ಕೆ.ಟಿ. ಗಂಗಾಧರ್ ಒತ್ತಾಯಿಸಿದ್ದಾರೆ.
ಶಿವಮೊಗ್ಗದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಹಿತಾಸಕ್ತಿ ಕಾಪಾಡುವಂತೆ ಆಗ್ರಹಿಸಿ ನವೆಂಬರ್ 16ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು. ಅಚ್ಚುಕಟ್ಟು ಪ್ರದೇಶದ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಮಳೆಯ ಕೊರತೆಯಿಂದಾಗಿ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ರಾಜ್ಯ ಸರ್ಕಾರವೇ 30 ಜಿಲ್ಲೆಗಳ 226 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ. ಕುಡಿಯುವ ನೀರಿಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದರಿಂದ ರೈತರು ಮುಂಗಾರು ಹಂಗಾಮಿನ ಭತ್ತದ ಬೆಳೆಯನ್ನು ಕೈಬಿಟ್ಟು, ಬೇಸಿಗೆ ಹಂಗಾಮಿನ ಕೃಷಿಗಾಗಿ ನೀರನ್ನು ಕಾಯ್ದಿರಿಸಿದ್ದಾರೆ ಎಂದು ವಿವರಿಸಿದರು.
ಇಂತಹ ಪರಿಸ್ಥಿತಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ನೀರು ಹರಿಸುತ್ತಿರುವುದು ಅಚ್ಚುಕಟ್ಟು ಪ್ರದೇಶದ ರೈತರ ಹಿತಾಸಕ್ತಿಗೆ ವಿರುದ್ಧವಾಗಿದೆ. ತುಂಗಾ ನದಿಯಿಂದ ಭದ್ರಾ ಜಲಾಶಯಕ್ಕೆ ನೀರು ಹರಿಸಲಾಗಿದೆ. ಇದರ ನಂತರ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಯೋಗಿಕವಾಗಿ 3 ಟಿಎಂಸಿ ಅಡಿ ನೀರು ಹರಿಸಲಾಗಿದೆ. ಅಲ್ಲದೆ, ನಾಲೆಗಳ ಕೊನೆಯ ಭಾಗದಲ್ಲಿರುವ ಕೆರೆಗಳಿಗೆ ಹೆಚ್ಚುವರಿಯಾಗಿ 1 ಟಿಎಂಸಿ ಅಡಿ ನೀರು ಹರಿಸಲಾಗುತ್ತಿದೆ. ಇದರಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು.
ಭದ್ರಾ ಜಲಾಶಯದಲ್ಲಿ ಪ್ರಸ್ತುತ 55.84 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ. ಇದರಲ್ಲಿ 13.83 ಟಿಎಂಸಿ ಅಡಿ ಡೆಡ್ ಸ್ಟೋರೇಜ್ ಹೊರತುಪಡಿಸಿದರೆ, ಬಳಕೆಗೆ ಸುಮಾರು 42 ಟಿಎಂಸಿ ಅಡಿ ನೀರು ಮಾತ್ರ ಲಭ್ಯವಿದೆ. ಬೇಸಿಗೆ ಹಂಗಾಮಿನಲ್ಲಿ ಎಡದಂಡೆ ಹಾಗೂ ಬಲದಂಡೆ ನಾಲೆಗಳ ವ್ಯಾಪ್ತಿಯ ಭತ್ತದ ಬೆಳೆಗೆ 36 ಟಿಎಂಸಿ ಅಡಿ ನೀರು ಅಗತ್ಯವಿದೆ ಎಂದು ಮಾಹಿತಿ ನೀಡಿದರು.
ಬೇಸಿಗೆ ಹಂಗಾಮಿನಲ್ಲಿ 120 ದಿನಗಳ ಕಾಲ ನೀರು ಹರಿಸಲು ಈಗಾಗಲೇ 7 ಟಿಎಂಸಿ ಅಡಿ ನೀರಿನ ಕೊರತೆ ಎದುರಾಗಿದೆ. ನೀರಿನ ಲಭ್ಯತೆ ಮತ್ತು ಕೃಷಿ ಅಗತ್ಯಗಳ ನಡುವೆ ಇಷ್ಟೊಂದು ವ್ಯತ್ಯಾಸವಿರುವಾಗ ಭದ್ರಾ ಮೇಲ್ದಂಡೆ ಯೋಜನೆಗೆ ನೀರು ಹರಿಸುವ ನಿರ್ಧಾರ ಸಮಂಜಸವಲ್ಲ. ಆದ್ದರಿಂದ ಮೇಲ್ದಂಡೆ ಯೋಜನೆಗೆ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ, ಎಡ ಮತ್ತು ಬಲದಂಡೆ ನಾಲೆಗಳ ವ್ಯಾಪ್ತಿಯ ರೈತರಿಗೆ ಕನಿಷ್ಠ 20 ದಿನಗಳ ಕಾಲ ನೀರು ಒದಗಿಸಬೇಕು ಎಂದು ಆಗ್ರಹಿಸಿದರು.
ರೈತರು ಕೃಷಿಗಾಗಿ ನೀರನ್ನು ಅವಲಂಬಿಸಿದ್ದು, ಮುಂದಿನ ಬೇಸಿಗೆ ಬೆಳೆಗಳಿಗೆ ನೀರು ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಅಚ್ಚುಕಟ್ಟು ಪ್ರದೇಶದ ರೈತರ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲು ನವೆಂಬರ್ 16ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೆ.ಟಿ. ಗಂಗಾಧರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಲವಕುಮಾರ್, ಘೋರ್ಪಡೆ, ವೀರೇಶ್, ಯಶವಂತರಾವ್ ಮಂಜಪ್ಪಗೌಡ, ಮಂಜುನಾಥೇಶ್ವರ, ಮೋಹನ್ ಕೂಡ್ಲಿಗೆರೆ, ಹಿರಣ್ಣಯ್ಯ, ಜಗದೀಶ್ ಹಾಗೂ ರಘುನಾಥ್ ಉಪಸ್ಥಿತರಿದ್ದರು.
