ಸುದ್ದಿಯ ಸ್ಥಳ: Sagara, Shivamogga, Karnataka
ಮಲೆನಾಡು ಟುಡೆ ಸುದ್ದಿ / ಸಾಗರ / ಪಶ್ಚಿಮಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಗೆ ಸಂಬಂಧಿಸಿದ ಕಸ್ತೂರಿರಂಗನ್ ವರದಿಯಲ್ಲಿನ ಅಂಶಗಳನ್ನು ಪರಿಶೀಲಿಸಲು ರಾಜ್ಯ ಸರ್ಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿಗೆ ಸಾಮಾಜಿಕ ಹೋರಾಟಗಾರ ಬಿ.ಆರ್. ಜಯಂತ್ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.ಕಸ್ತೂರಿರಂಗನ್ ವರದಿಯಲ್ಲಿರುವ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಿ, ಅಗತ್ಯ ಮಾರ್ಪಾಡುಗಳು ಹಾಗೂ ಸೂಕ್ತ ಪರಿಹಾರ ಕ್ರಮಗಳ ಕುರಿತು ಸರ್ಕಾರಕ್ಕೆ ಶಿಫಾರಸು ಸಲ್ಲಿಸುವ ಉದ್ದೇಶದಿಂದ ಈ ಸಮಿತಿಯನ್ನು ರಚಿಸಲಾಗಿದೆ.
ಬಿ.ಆರ್. ಜಯಂತ್ ನೇಮಕ
ನವೆಂಬರ್ 12ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಪ್ರಕಾರ, ಕರ್ನಾಟಕ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ ಕುನ್ಹಾ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ನಿವೃತ್ತ ಐಎಫ್ಎಸ್ ಅಧಿಕಾರಿ ವಿಜಯಕುಮಾರ್ ಗೋಗಿ, ಎಸ್ಎಸ್ಎಲ್ಆರ್ ಆಯುಕ್ತರು, ಅರಣ್ಯ ಇಲಾಖೆಯ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕೆಎಸ್ಆರ್ಎಸ್ಎಸಿ ನಿರ್ದೇಶಕರು ಸೇರಿದಂತೆ ವಿವಿಧ ಕ್ಷೇತ್ರಗಳ ತಜ್ಞರನ್ನು ಸಮಿತಿಯಲ್ಲಿ ಒಳಗೊಳ್ಳಲಾಗಿದೆ.
ಪಶ್ಚಿಮಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆ, ಕಸ್ತೂರಿರಂಗನ್ ವರದಿಯಲ್ಲಿನ ಶಿಫಾರಸುಗಳು ಹಾಗೂ ಅರಣ್ಯ ಮತ್ತು ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಮಿತಿ ಅಧ್ಯಯನ ನಡೆಸಲಿದೆ. ವರದಿಯಲ್ಲಿನ ಅಂಶಗಳಿಗೆ ಅಗತ್ಯವಿರುವ ಮಾರ್ಪಾಡುಗಳು ಮತ್ತು ಪರಿಹಾರ ಕ್ರಮಗಳನ್ನು ಗುರುತಿಸಿ ರಾಜ್ಯ ಸರ್ಕಾರಕ್ಕೆ ಶಿಫಾರಸುಗಳನ್ನು ಸಲ್ಲಿಸಲಿದೆ.
