KARNATAKA NEWS/ ONLINE / Malenadu today/ Oct 2, 2023 SHIVAMOGGA NEWS’
ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ನಡೆದ ಗಲಾಟೆ ವಿಚಾರವಾಗಿ ನಿನ್ನೆಯೆ 144 ಸೆಕ್ಷನ್ ಜಾರಿ ಮಾಡಲಾಗಿತ್ತು. ಇದರ ಬೆನ್ನಲ್ಲೆ, ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ನಗರ ಪಾಲಿಕೆ ವ್ಯಾಪ್ತಿಯಡಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಈ ಸಂಬಂಧ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಆದೇಶದಲ್ಲಿ ಏನಿದೆ?
ಭಾರತೀಯ ದಂಡ ಪ್ರಕ್ರಿಯಾ ಸಂಹಿತ 1973 ರ ಕಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಡಾ.ಸಲ್ವಮಣಿ .ಆರ್ ಭಾ.ಆ.ಸೇ., ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ಶಿವಮೊಗ್ಗ ಜಿಲ್ಲೆ, ಯವರು ಈ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಪ್ರದೇಶಗಳಲ್ಲಿಯೂ ದಿನಾಂಕ:01.10,2023 ರ ರಾತ್ರಿ:12.00 ಗಂಟೆಯಿಂದ ಮುಂದಿನ ಆದೇಶದವರೆಗೆ ಈ ಕಳಕಂಡ ನಿಬಂಧನೆಗಳನ್ನು ವಿಧಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿದ್ದಾರೆ.
ಏನು ನಿಬಂಧನೆ
1) ನಿಷೇಧಿತ ಅವಧಿಯಲ್ಲಿ ಐದು ಜನರಿಗಿಂತ ಹೆಚ್ಚು ಜನರು ಗುಂಪುಗೂಡುವುದನ್ನು ಮತ್ತು ಓಡಾಡುವುದನ್ನು ನಿಷೇಧಿಸಲಾಗಿದೆ.
2) ನಿಷೇದಾಜ್ಞೆಯ ಅವಧಿಯಲ್ಲಿ ಯಾವುದೇ ಮರವಣಿಗೆ, ಪ್ರತಿಭಟನೆ ಹಾಗೂ ಸಭೆ-ಸಮಾರಂಭ ನಡೆಸುವುದನ್ನು ನಿಷೇಧಿಸಲಾಗಿದೆ.
3) ಯಾವುದೇ ರೀತಿಯ ಘೋಷಣೆಗಳನ್ನು ಕೂಗುವುದು, ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುವುದನ್ನು ಹಾಗೂ ಪ್ರಚೋದನಾಕಾರಿ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಕಟ್ಟುವುದನ್ನು ನಿಷೇಧಿಸಲಾಗಿದೆ.
4) ಯಾವುದೇ ರೀತಿಯ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವುದು ಮತ್ತು ಉಪಯೋಗಿಸುವುದನ್ನು ಹಾಗೂ ಯಾವುದೇ ಸ್ಫೋಟಕ ವಸ್ತುಗಳನ್ನು ಹೊಂದುವುದನ್ನು ಮತ್ತು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.
5) ಈ ಹಿಂದೆಯೇ ಪೂರ್ವಾನುಮತಿಯನ್ನು ಪಡೆದು ನಿಗಧಿಯಾದಂತಹ ಕಾರ್ಯಕ್ರಮಗಳನ್ನು ನಡೆಸಲು ಅನುಮತಿಸಿದೆ.
ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 188ರ ಪ್ರಕಾರ ಶಿಸ್ತು ಕ್ರಮವನ್ನು ಜರುಗಿಸಲಾಗುತ್ತದೆ.
ಇನ್ನಷ್ಟು ಸುದ್ದಿಗಳು




