ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್.ಪಿ.ಎಸ್., ಕೆ.ಎ.ಎಸ್. (ಕಿರಿಯ ಶ್ರೇಣಿ) ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ವರ್ಗಾವಣೆ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಪ್ರಸ್ತುತ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿ (ಬಿ.ಬಿ.ಎಂ.ಪಿ-7) ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಮೈತ್ರಿ ಹೆಚ್.ಪಿ.ಎಸ್. ಅವರನ್ನು ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದ್ದು, ಸದ್ಯ ಶಿವಮೊಗ್ಗದ ಉಪವಿಭಾಗಾಧಿಕಾರಿಯಾಗಿರುವ ಜಿ.ಹೆಚ್. ಸತ್ಯನಾರಾಯಣ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ.
ಜಿ.ಹೆಚ್. ಸತ್ಯನಾರಾಯಣ, ಕೆ.ಎ.ಎಸ್. (ಕಿರಿಯ ಶ್ರೇಣಿ) ಅಧಿಕಾರಿಗೆ ಮುಂದಿನ ಸ್ಥಳ ನಿಯುಕ್ತಿಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಕಾರ್ಯವರದಿ ಮಾಡಿಕೊಳ್ಳುವಂತೆ ಸರ್ಕಾರ ಸೂಚಿಸಿದೆ.
ಈ ಸಂಬಂಧ ಕರ್ನಾಟಕ ಸರ್ಕಾರದ ಸಚಿವಾಲಯ, ಡಾ. ಬಿ.ಆರ್. ಅಂಬೇಡ್ಕರ್ ವೀಧಿ, ವಿಧಾನಸೌಧ, ಬೆಂಗಳೂರಿನಿಂದ 19.08.2026ರಂದು ‘ಸಿಆಸುಇ 58 ಆಸೇಅ 2026’ ಸಂಖ್ಯೆಯಡಿ ಆದೇಶ ಹೊರಡಿಸಲಾಗಿದೆ. ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ಕೆ.ಹೆಚ್. ಆದೇಶ ಹೊರಡಿಸಿದ್ದಾರೆ.
ವರ್ಗಾವಣೆ ಅಥವಾ ಸ್ಥಳ ನಿಯುಕ್ತಿಗೊಳಿಸಲಾದ ಹುದ್ದೆಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು ಸಿ.ಟಿ.ಸಿ. ಪ್ರತಿಯನ್ನು ಕೂಡಲೇ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.
