ಶಿವಮೊಗ್ಗ: ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ಮುಂಜಾಗ್ರತಾ ಕ್ರಮವಾಗಿ, ಆಗಸ್ಟ್ 25 ರಿಂದ 28 ರವರೆಗೆ ಜಿಲ್ಲೆಯಾದ್ಯಂತ ಯಾವುದೇ ಬೈಕ್ ರ್ಯಾಲಿಗಳನ್ನು ನಡೆಸದಂತೆ ನಿಷೇಧಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಪೊಲೀಸ್ ಕಾಯ್ದೆ-1963 ರ ಕಲಂ 35(3) ರಡಿ ನೀಡಿರುವ ಅಧಿಕಾರವನ್ನು ಬಳಸಿ ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ದಿನಾಂಕ 25-08-2026 ರಿಂದ 28-08-2026 ರವರೆಗೆ ನಿಷೇಧ ಜಾರಿಯಲ್ಲಿರುತ್ತದೆ. ಆಗಸ್ಟ್ 26 ರಂದು ಈದ್ ಮಿಲಾದ್ ಆಚರಣೆ ನಡೆಯಲಿದ್ದು, ಸೌಹಾರ್ದತೆ, ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
