ಸುದ್ದಿಯ ಸ್ಥಳ: Shivamogga district, Karnataka
ಮಲೆನಾಡುಟುಡೆ ಸುದ್ದಿ / ಶಿವಮೊಗ್ಗ : ಭದ್ರಾ ಎಡ ಮತ್ತು ಬಲದಂಡೆ ನಾಲೆಗಳಿಗೆ ತಕ್ಷಣವೇ ನೀರು ಹರಿಸುವಂತೆ ಆಗ್ರಹಿಸಿ ಶಿವಮೊಗ್ಗದಲ್ಲಿ ರೈತರ ಹೋರಾಟ ತೀವ್ರಗೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ರಾಜ್ಯ ರೈತ ಸಂಘ ಹಾಗೂ ಭದ್ರಾ ಅಚ್ಚುಕಟ್ಟುದಾರರ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ನೂರಾರು ರೈತರು ಬೀದಿಗಿಳಿದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೊದಲಿಗೆ ಶಿವಮೊಗ್ಗ ಜಿಲ್ಲಾಧಿಕಾರಿ (DC) ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತರು, ಬಳಿಕ ನಗರದ ನೆಹರೂ ರಸ್ತೆಯಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಕಚೇರಿಯತ್ತ ಬೃಹತ್ ಪಾದಯಾತ್ರೆ ನಡೆಸಿದರು. ಸಚಿವರ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ಮಾರ್ಗಮಧ್ಯೆಯೇ ತಡೆದು ನಿಲ್ಲಿಸಿದ್ದಾರೆ.
ರೈತರಿಗೆ ಇಷ್ಟೆಲ್ಲಾ ತೊಂದರೆಯಾಗುತ್ತಿದ್ದರೂ ಉಸ್ತುವಾರಿ ಸಚಿವರು ಜಿಲ್ಲೆಗೆ ಆಗಮಿಸಿಲ್ಲ, ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ಇದೇ ವೇಳೆ ಮುಖ್ಯಮಂತ್ರಿ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಮಧು ಬಂಗಾರಪ್ಪ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಭದ್ರಾ ಎಡ ಮತ್ತು ಬಲ ನಾಲೆಗಳಿಗೆ ಕನಿಷ್ಠ 20 ದಿನಗಳ ಕಾಲ ನೀರು ಹರಿಸಿ ಒಣಗುತ್ತಿರುವ ಅಡಿಕೆ ತೋಟಗಳನ್ನು ಉಳಿಸಬೇಕು. ಇಂದು ಸಂಜೆಯೊಳಗೆ ಸರ್ಕಾರ ನೀರು ಬಿಡುವ ಕುರಿತು ಅಧಿಕೃತ ಆದೇಶ ಹೊರಡಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು; ಆದೇಶ ಬರುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಡಿಸಿ ಕಚೇರಿ ಹಾಗೂ ಉಸ್ತುವಾರಿ ಸಚಿವರ ಕಚೇರಿ ಬಳಿ ನೂರಾರು ಪೊಲೀಸರನ್ನು ನಿಯೋಜಿಸಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.
