ಮಲೆನಾಡು ಟುಡೆ ಸುದ್ದಿ / ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿಯಾಗಿರುವ ಪರಿಣಾಮ, ರಾಜ್ಯದಾದ್ಯಂತ ಹವಾಮಾನದಲ್ಲಿ ಭಾರಿ ಬದಲಾವಣೆಯಾಗಿದ್ದು, ನವೆಂಬರ್ 3 ರಿಂದ 5 ರವರೆಗೆ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ (ಐಎಂಡಿ) ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ (ಕೆಎಸ್ಎನ್ಡಿಎಂಸಿ) ವರದಿಗಳು ತಿಳಿಸಿವೆ.
ಮಳೆಯ ತೀವ್ರತೆ ಹೆಚ್ಚಿರುವ ಕಾರಣ ರಾಜ್ಯದ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸಹ ಘೋಷಿಸಲಾಗಿದೆ. ವಿಶೇಷವಾಗಿ ಕರಾವಳಿ ಭಾಗದಲ್ಲಿ ಚಂಡಮಾರುತದ ಪ್ರಭಾವ ಹೆಚ್ಚು ಇರಲಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಮತ್ತು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ ಒಳನಾಡಿನ ಜಿಲ್ಲೆಗಳಲ್ಲೂ ಮೋಡಕವಿದ ವಾತಾವರಣ ಮುಂದುವರಿಯಲಿದ್ದು, ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ ಎಂದು ಕೆಎಸ್ಎನ್ಡಿಎಂಸಿ ಮಾಹಿತಿ ನೀಡಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ನವೆಂಬರ್ 3ರಂದು ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ಇದೇ ವೇಳೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ.
ನವೆಂಬರ್ 4ರಂದು ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದ್ದು, ಗುಡುಗು ಸಹಿತ ಭಾರಿ ಮಳೆಯಾಗಲಿದೆ. ನವೆಂಬರ್ 5ರಂದು ಕೂಡ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದ್ದು, ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
