ಶಿವಮೊಗ್ಗ: ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ದ್ವೇಷ ಭಾಷಣ ವಿರೋಧಿ ಕಾಯ್ದೆಯು 1975ರ ತುರ್ತುಪರಿಸ್ಥಿತಿಗಿಂತಲೂ ಅತ್ಯಂತ ಕರಾಳ ಪರಿಸ್ಥಿತಿಯನ್ನು ರಾಜ್ಯದಲ್ಲಿ ಸೃಷ್ಟಿಸಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗಮನಕ್ಕೆ: ಶಿವಮೊಗ್ಗ ಜಿಲ್ಲಾ ಪಂಚಾಯತಿಯಲ್ಲಿ ಅಕೌಂಟ್ಸ್ ಮ್ಯಾನೇಜರ್ ಹುದ್ದೆ! ಉದ್ಯೋಗ ಸುದ್ದಿ!
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ದೇಶದಲ್ಲಿ ತುರ್ತುಸ್ಥಿತಿ ಘೋಷಿಸಿ ವಂದೇ ಮಾತರಂ ಮತ್ತು ಭಾರತ್ ಮಾತಾ ಕಿ ಜೈ ಎನ್ನುವವರನ್ನು ಜೈಲಿಗೆ ಹಾಕಲಾಗಿತ್ತು. ಈಗ ರಾಜ್ಯ ಸರ್ಕಾರ ಜಾರಿಗೆ ತರುತ್ತಿರುವ ದ್ವೇಷ ಭಾಷಣ ಕಾಯ್ದೆಯು ಅದೇ ಹಾದಿಯಲ್ಲಿದ್ದು, ಇದನ್ನು ವಿರೋಧಿಸಿ ಹಿಂದೂಗಳೆಲ್ಲರೂ ಒಟ್ಟಾಗಿ ಹೋರಾಟ ನಡೆಸಲಿದ್ದೇವೆ ಎಂದು ಎಚ್ಚರಿಸಿದರು. ಪಾಕಿಸ್ತಾನ ಜಿಂದಾಬಾದ್ ಎನ್ನುವವರಿಗೆ ಶಿಕ್ಷೆಯಾಗುತ್ತಿಲ್ಲ, ಆದರೆ ಹಿಂದೂಗಳ ಮೇಲಿನ ಹಲ್ಲೆ ಖಂಡಿಸಿದರೆ ಎಫ್‌ಐಆರ್ ದಾಖಲಿಸಲಾಗುತ್ತಿದೆ ಎಂದು ದೂರಿದ ಅವರು, ರಾಜ್ಯಪಾಲರು ಈ ಬಿಲ್‌ಗೆ ಅನುಮೋದನೆ ನೀಡಬಾರದು ಎಂದು ಆಗ್ರಹಿಸಿದರು.
ಇದೇ ವೇಳೆ ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ವಾಗ್ದಾಳಿ ನಡೆಸಿದ ಈಶ್ವರಪ್ಪ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆಯ ಗೊಂದಲದಿಂದಾಗಿ ರಾಜ್ಯದ ಜನತೆ ಪಶ್ಚಾತ್ತಾಪ ಪಡುತ್ತಿದ್ದಾರೆ. ಇಬ್ಬರ ಹೇಳಿಕೆಗಳಿಗೂ ತಾಳ-ತಂತಿಯಿಲ್ಲದಂತಾಗಿದ್ದು, ಇಡೀ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ.
ಕಾಂಗ್ರೆಸ್ ಹೈಕಮಾಂಡ್ ಸಂಪೂರ್ಣ ಶಕ್ತಿ ಕಳೆದುಕೊಂಡಿದ್ದು, ರಾಜ್ಯದ ಉಸ್ತುವಾರಿಗಳೂ ನಾಪತ್ತೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿದ್ದರೂ ಅವರಿಗೆ ರಾಜ್ಯದ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಟೀಕಿಸಿದರು. ಅಲ್ಲದೆ, ಪೂಜ್ಯ ಸ್ವಾಮೀಜಿಗಳನ್ನು ಜಾತಿಗೆ ಸೀಮಿತಗೊಳಿಸಿ ಸಮಾಜವನ್ನು ಒಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಮುಂದಿನ ಚುನಾವಣೆಯಲ್ಲಿ ಹಿಂದುತ್ವದ ಪರ ಮತ್ತು ವಿರೋಧಿಗಳ ನಡುವೆ ನೇರ ಹೋರಾಟ ನಡೆಯಲಿದೆ ಎಂದು ಹೇಳಿದರು.
