ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ರಾಜ್ಯದ ದಕ್ಷಿಣ ಒಳನಾಡಿನ ಕೆಲವೆಡೆ ಬುಧವಾರದಿಂದ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಸಂಬಂಧ ಹೊರಡಿಸಲಾಗಿರುವ ಬುಲೆಟಿನ್ ಪ್ರಕಾರ, ಗಮನಿಸುವುದಾದರೆ, ಹವಾಮಾನ ಇಲಾಖೆಯ ಪ್ರಕಾರ,
ದಕ್ಷಿಣ ಒಳನಾಡಿನಲ್ಲಿ ಅಂದರೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಇನ್ನೊಂದು ವಾರ ಅಲ್ಲಲ್ಲಿ ಮಳೆಯಾಗಲಿದೆ. ಈ ಸಂಬಂಧ ಇವತ್ತು ವಿಶೇಷವಾಗಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆಯೂ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
