ಸುದ್ದಿಯ ಸ್ಥಳ: Bengaluru, Karnataka
ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ. ಒಟ್ಟು 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ದಾಖಲೆ ಪರಿಶೀಲನೆ, ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆಗೆ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ನವೆಂಬರ್ 19ರಿಂದ ದಾಖಲೆ ಪರಿಶೀಲನೆ ಪ್ರಕ್ರಿಯೆ ಆರಂಭವಾಗಲಿದ್ದು, 2027ರ ಜನವರಿ 18ರಂದು ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಸೂಚಿಸಲಾಗಿದೆ.
ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಾಗರಾಜ ಅವರು ನವೆಂಬರ್ 17ರಂದು ಈ ಸಂಬಂಧ ಅಧಿಕೃತ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಮೂಲ ವೃಂದದ 505 ಹುದ್ದೆಗಳು ಹಾಗೂ ಕಲ್ಯಾಣ ಕರ್ನಾಟಕ ವೃಂದದ 67 ಹುದ್ದೆಗಳು ಸೇರಿದಂತೆ ಒಟ್ಟು 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಹಿಂದೆ ನೇಮಕಾತಿಗೆ ಸಂಬಂಧಿಸಿದಂತೆ 2026ರ ಜುಲೈ 3, ಜುಲೈ 10 ಹಾಗೂ ನವೆಂಬರ್ 7ರಂದು ಹೊರಡಿಸಲಾಗಿದ್ದ ಆದೇಶಗಳು ಮತ್ತು ಅಧಿಸೂಚನೆಗಳನ್ನು ಉಲ್ಲೇಖಿಸಿ ಹೊಸ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಕಂದಾಯ ಇಲಾಖೆಯ ಮೂಲ ವೃಂದದಲ್ಲಿ ಖಾಲಿ ಇರುವ 505 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ 21 ಜಿಲ್ಲೆಗಳಲ್ಲಿ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶೇ 35ಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳ ಜಿಲ್ಲಾವಾರು ಅರ್ಹತಾ ವಿವರಗಳನ್ನು ಸಿದ್ಧಪಡಿಸಲಾಗಿದೆ. ಇದರೊಂದಿಗೆ ಪ್ರಕಟಿಸಲಾದ ಎಂಎಸ್ ಎಕ್ಸೆಲ್ ವಿವರಗಳನ್ನು ಪಾಸ್ವರ್ಡ್ ರಕ್ಷಿತ ರೂಪದಲ್ಲಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ರವಾನಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ಅನ್ವಯ ಅರ್ಹ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ನಡೆಸಲು ಸೂಚಿಸಲಾಗಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ 1:3 ಅನುಪಾತದಲ್ಲಿ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆಗೆ ಆಹ್ವಾನಿಸಿ, ಪರಿಶೀಲನೆ ಪೂರ್ಣಗೊಂಡ ನಂತರ 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲು ನಿರ್ದೇಶಿಸಲಾಗಿದೆ.ಅಭ್ಯರ್ಥಿಗಳ ದಾಖಲೆ ಪರಿಶೀಲನೆ, ಆಯ್ಕೆ ಪಟ್ಟಿ ಪ್ರಕಟಣೆ, ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಮತ್ತು ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆ ಸೇರಿದಂತೆ ನೇಮಕಾತಿಯ ಪ್ರತಿಯೊಂದು ಹಂತಕ್ಕೂ ಪ್ರತ್ಯೇಕ ದಿನಾಂಕಗಳನ್ನು ನಿಗದಿಪಡಿಸಲಾಗಿದೆ.
ನವೆಂಬರ್ 19ರಿಂದ 21ರವರೆಗೆ ದಾಖಲೆ ಪರಿಶೀಲನೆ
- ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯಲ್ಲಿ ನಿಗದಿಪಡಿಸಿರುವ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ 1:3 ಅನುಪಾತದಲ್ಲಿ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ನವೆಂಬರ್ 19ರಿಂದ 21ರವರೆಗೆ ದಾಖಲೆ ಪರಿಶೀಲನೆಗಾಗಿ ಪ್ರಕಟಿಸಲಾಗುವುದು.
- ಡಿಸೆಂಬರ್ 7ರಿಂದ 10ರವರೆಗೆ 1:3 ಅನುಪಾತದಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಲಾಗುವುದು. ಇದೇ ಅವಧಿಯಲ್ಲಿ ವಿಶೇಷಚೇತನ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲು ಸೂಚಿಸಲಾಗಿದೆ.
- ದಾಖಲೆ ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಡಿಸೆಂಬರ್ 14ರಂದು 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು. ಈ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ಡಿಸೆಂಬರ್ 15ರಿಂದ 21ರವರೆಗೆ ಅವಕಾಶ ಕಲ್ಪಿಸಲಾಗಿದೆ.
- ಅಭ್ಯರ್ಥಿಗಳಿಂದ ಸ್ವೀಕರಿಸಲಾದ ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ ಡಿಸೆಂಬರ್ 24ರಂದು ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ವೇಳಾಪಟ್ಟಿಯಲ್ಲಿ ಸೂಚಿಸಲಾಗಿದೆ.
- 2027ರ ಜನವರಿ 1ರಂದು ಜಾತಿ ಸಿಂಧುತ್ವ, ಪೊಲೀಸ್ ವರದಿ ಹಾಗೂ ಶೈಕ್ಷಣಿಕ ಪ್ರಮಾಣಪತ್ರಗಳ ನೈಜತೆ ಪರಿಶೀಲನೆಗೆ ಸಂಬಂಧಿಸಿದ ಷರತ್ತುಗಳನ್ನು ಒಳಗೊಂಡ ನೇಮಕಾತಿ ಆದೇಶಗಳನ್ನು ಹೊರಡಿಸಲು ಸೂಚಿಸಲಾಗಿದೆ.
- ಜನವರಿ 18ರಂದು ಅಂತಿಮ ಆಯ್ಕೆ ಪಟ್ಟಿಯಿಂದ ವಿವಿಧ ಕಾರಣಗಳಿಂದ ಹುದ್ದೆಗಳು ಖಾಲಿಯಾದಲ್ಲಿ, ಅರ್ಹ ಅಭ್ಯರ್ಥಿಗಳ ಪೈಕಿ ಅದೇ ಪ್ರವರ್ಗ ಅಥವಾ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳನ್ನು ಹೆಚ್ಚುವರಿ ಆಯ್ಕೆ ಪಟ್ಟಿಯಲ್ಲಿ ಪ್ರಕಟಿಸುವುದು ಹಾಗೂ ನಿಯಮಾನುಸಾರ ನೇಮಕಾತಿ ಆದೇಶ ನೀಡುವ ಕುರಿತು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಈ ವೇಳಾಪಟ್ಟಿಗೆ ಅನುಗುಣವಾಗಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸುವಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಾಗರಾಜ ನಿರ್ದೇಶನ ನೀಡಿದ್ದಾರೆ.
