ಮಲೆನಾಡು ಟುಡೆ ಸುದ್ದಿ / : ಶಿವಮೊಗ್ಗ: ಕಸ್ತೂರಿ ರಂಗನ್ ಸಮಿತಿ ವರದಿಯ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರವು 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಈಗಾಗಲೇ ವಿಧಾನಸಭೆಯಲ್ಲಿ ಈ ವರದಿಯನ್ನು ತಿರಸ್ಕರಿಸುವ ತೀರ್ಮಾನವನ್ನು ತೆಗೆದುಕೊಂಡು ಕೇಂದ್ರಕ್ಕೆ ಕಳುಹಿಸಿರುವುದರಿಂದ ಈ ವರದಿಯ ಜಾರಿಗೆ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಈ ವರದಿಯನ್ನು ತಿರಸ್ಕರಿಸಿರುವುದಾಗಿ ಕೇಂದ್ರಕ್ಕೆ ಅಧಿಕೃತವಾಗಿ ಮಾಹಿತಿ ನೀಡಿದ್ದರೂ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಈಗ ಮತ್ತೆ ಪಶ್ಚಿಮ ಘಟ್ಟಗಳಲ್ಲಿನ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಿ, ಹೊಸ ಕರಡು ಅಧಿಸೂಚನೆ ಪ್ರಕಟಿಸಿದೆ. ಇದು ಖಂಡನೀಯ. ಈ ಕರಡು ಅಧಿಸೂಚನೆಯನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಈಗಾಗಲೇ ಈ ವಿಷಯದ ಕುರಿತು ರಾಜ್ಯ ಸರ್ಕಾರ ಸ್ಪಷ್ಟ ತೀರ್ಮಾನ ತೆಗೆದುಕೊಂಡಿದೆ. ಅರಣ್ಯ ಸಚಿವರಾದ ರಾಮಲಿಂಗರೆಡ್ಡಿಯವರು ಸಹ ವಿಧಾನಸಭೆಯಲ್ಲಿಯೇ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದಾರೆ.
ಕಸ್ತೂರಿ ರಂಗನ್ ಸಮಿತಿ ವರದಿ ಹೇಳಿರುವಂತೆಯೇ ಕರ್ನಾಟಕದ ರಾಜ್ಯದ 1.576 ಗ್ರಾಮ ವ್ಯಾಪ್ತಿಯ 20,668 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಈ ಕರಡು ಅಧಿಸೂಚನೆಯಲ್ಲಿ ಗುರುತಿಸಲಾಗಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ 484 ಗ್ರಾಮಗಳು ಪ್ರಸ್ತಾವಿತ ಪಟ್ಟಿಯಲ್ಲಿವೆ. ಜನವಸತಿ ಪ್ರದೇಶ, ಕೃಷಿ ಭೂಮಿ ಇರುವ ಪ್ರದೇಶವನ್ನೂ ಪರಿಸರ ಸೂಕ್ಷ್ಮ ಪ್ರದೇಶ ಎಂದು
ಗುರುತಿಸಿರುವುದರಿಂದ ಮಲೆನಾಡಿನ ರೈತರು ಸಹಜವಾಗಿಯೇ ಆತಂಕಗೊಂಡಿದ್ದಾರೆ. ಆದರೆ ಸರ್ಕಾರ ಈ ವರದಿಯ ಜಾರಿಗೆ ಅವಕಾಶ ನೀಡುವುದಿಲ್ಲ. ಈ ಕರಡು ಅಧಿಸೂಚನೆಯನ್ನು ವಿರೋಧಿಸಲಿದೆ. ಹೀಗಾಗಿ ಮಲೆನಾಡಿನ ಜನರು ಆತಂಕ ಪಡುವ ಅಗತ್ಯ ಇಲ್ಲ ಎಂದಿದ್ದಾರೆ.
ಮಲೆನಾಡಿನ ರೈತರ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಕ್ರಮಕ್ಕೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ನಮ್ಮ ಸರ್ಕಾರ ರೈತರ ಪರವಾಗಿದೆ ಎಂದರು.
ವಿಪಕ್ಷ ನಾಯಕರು ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ತೀರ್ಮಾನವನ್ನು ಖಂಡಿಸುವುದಕ್ಕೆ ಬದಲಾಗಿ ಗೊಂದಲ ಉಂಟುಮಾಡುವ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಈ ವಿಚಾರವಾಗಿ ನಾನು ವೈಯಕ್ತಿಕವಾಗಿಯೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿದ್ದೇನೆ. ಮುಖ್ಯಮಂತ್ರಿಗಳು ಸಹ ಈ ಕರಡು ಅಧಿಸೂಚನೆಯನ್ನು ವಿರೋಧಿಸುವ ತೀರ್ಮಾನ ಪ್ರಕಟಿಸಿದ್ದಾರೆ. ರೈತರ ಜೊತೆ ನಿಲ್ಲುವುದಾಗಿ ಅಭಯ ನೀಡಿದ್ದಾರೆ. ಹೀಗಾಗಿ ಮಲೆನಾಡಿನ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ.
ಆದ್ದರಿಂದ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ರೈತರು ಯಾವುದೇ ಆತಂಕ ಪಡಬಾರದು ಎಂದಿದ್ದಾರೆ.
ನಮ್ಮ ತಂದೆ ಎಸ್. ಬಂಗಾರಪ್ಪ ಅವರು ಸದಾ ರೈತರು ಹಾಗೂ ಜನಸಾಮಾನ್ಯರ ಪರವಾಗಿ ನಿಂತವರು. ಅವರ ಆಶಯಗಳನ್ನು ಎತ್ತಿಹಿಡಿಯುವುದೇ ನನ್ನ ಗುರಿ. ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ ಎಂಬುದನ್ನು ಸಚಿವ ಮಧು ಬಂಗಾರಪ್ಪ ಪ್ರಕಟಣೆಯ ಮೂಲಕ ಸ್ಪಷ್ಟಪಡಿಸಿದ್ದಾರೆ.
