ಸುದ್ದಿಯ ಸ್ಥಳ: Shivamogga district, Karnataka
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ನಗರದ ಸೈನ್ಸ್ ಮೈದಾನದಲ್ಲಿ ಎಜಾಕ್ಸ್ ಇಂಜಿನಿಯರಿಂಗ್ ಲಿಮಿಟೆಡ್ ಮತ್ತು ಎಜಾಕ್ಸ್ ಇಂಜಿನಿಯರಿಂಗ್ ಚಾರಿಟೇಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ 13.50 ಕೋಟಿ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ (KPS) ಹೊಸ ಕಟ್ಟಡದ ಪ್ರಗತಿಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಖುದ್ದು ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಕಟ್ಟಡ ನಿರ್ಮಾಣದ ಹಂತ ಹಾಗೂ ನೀಲನಕ್ಷೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಸಂಪೂರ್ಣ ಮಾಹಿತಿ ಕಲೆಹಾಕಿದರು .
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಎಜಾಕ್ಸ್ ಸಂಸ್ಥೆಯು ಅತ್ಯಂತ ಕ್ಷಿಪ್ರಗತಿಯಲ್ಲಿ ನಿರ್ಮಾಣ ಕಾರ್ಯವನ್ನು ನಡೆಸುತ್ತಿದ್ದು, ಉತ್ಕೃಷ್ಟ ಗುಣಮಟ್ಟದ ಹಾಗೂ ಆಧುನಿಕ ಸವಲತ್ತುಗಳನ್ನು ಒಳಗೊಂಡ ಶಾಲಾ ಕಟ್ಟಡ ತಲೆಎತ್ತುತ್ತಿದೆ. ಶಿಕ್ಷಣ ಇಲಾಖೆಯ ಸಮುದಾಯ ಮತ್ತು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CCSR) ಯೋಜನೆಯಡಿ ಎಜಾಕ್ಸ್ ಸಂಸ್ಥೆ 13.50 ಕೋಟಿ ವೆಚ್ಚದಲ್ಲಿ ಈ ಕಾರ್ಯ ಕೈಗೊಂಡಿರುವುದು ಅಭಿನಂದನೀಯ. ಶೈಕ್ಷಣಿಕ ಪ್ರಗತಿಗೆ ಕಾರ್ಪೊರೇಟ್ ವಲಯ ಕೈಜೋಡಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ನೂತನ ಶಾಲಾ ಸಮುಚ್ಚಯದಲ್ಲಿ 33 ಆಧುನಿಕ ತರಗತಿ ಕೊಠಡಿಗಳು, ಸ್ಮಾರ್ಟ್ ಕ್ಲಾಸ್‌ರೂಮ್‌ಗಳು, ಕಂಪ್ಯೂಟರ್ ಲ್ಯಾಬ್, ವಿಜ್ಞಾನ ಮತ್ತು STEAM ಪ್ರಯೋಗಾಲಯ, ಮುಖ್ಯೋಪಾಧ್ಯಾಯರಿಗೆ ಪ್ರತ್ಯೇಕ ಕಚೇರಿ, ಪ್ರತಿ ಮಹಡಿಯಲ್ಲೂ ಶಿಕ್ಷಕರ ಕೊಠಡಿ, ಕಲೆ ಮತ್ತು ಕರಕುಶಲ ಕೊಠಡಿ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಮೀಸಲಾದ ವಿಶೇಷ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ವಿವರಿಸಿದರು .
ಜೊತೆಗೆ ವಿಶಾಲವಾದ ಭೋಜನಾಲಯ (ಡೈನಿಂಗ್ ಹಾಲ್), ಸುಸಜ್ಜಿತ ಅಡುಗೆ ಕೋಣೆ, ಪ್ರತಿ ಅಂತಸ್ತಿನಲ್ಲೂ ಪ್ರತ್ಯೇಕ ಶೌಚಾಲಯ ಸೌಲಭ್ಯ ಹಾಗೂ ಮಕ್ಕಳ ಕ್ರೀಡಾ ಚಟುವಟಿಕೆಗಳಿಗೆ ಪೂರಕವಾಗಿ ಸುಸಜ್ಜಿತ ಆಟದ ಮೈದಾನವನ್ನೂ ಅಭಿವೃದ್ಧಿಪಡಿಸಲಾಗುತ್ತಿದೆ” ಎಂದು ಮಾಹಿತಿ ನೀಡಿದರು .
ಇದೇ ಮಾದರಿಯಲ್ಲಿ ರಾಜ್ಯಾದ್ಯಂತ ಸಿಸಿಎಸ್‌ಆರ್ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳನ್ನು ಮೇಲ್ದರ್ಜೆಗೇರಿಸುವ ವಿಸ್ತೃತ ಯೋಜನೆ ಸಿದ್ಧಪಡಿಸಲಾಗಿದೆ. ಎಲ್ಲಾ ಮಕ್ಕಳಿಗೂ ಸಮಾನ ಅವಕಾಶದೊಂದಿಗೆ ಗುಣಮಟ್ಟದ ಶಿಕ್ಷಣ, ಉತ್ತಮ ಕಲಿಕಾ ಪರಿಸರ ಹಾಗೂ ಅಗತ್ಯ ಮೂಲಭೂತ ಸೌಕರ್ಯ ಒದಗಿಸುವುದೇ ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ” ಎಂದು ಸಚಿವರು ತಿಳಿಸಿದರು.
