ಶಿವಮೊಗ್ಗ : ನಾವೆಲ್ಲರೂ ದೇವಸ್ಥಾನಗಳಿಗಿಂತ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕಿದ್ದು, ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಣ ಇಲಾಖೆಯ ಜವಾಬ್ದಾರಿ ಅತ್ಯಂತ ದೊಡ್ಡದು ಎಂದು ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು.
ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿವಮೊಗ್ಗ ಎಜಾಕ್ಸ್ ಇಂಜಿನಿಯರಿಂಗ್ ಲಿಮಿಟೆಡ್ ಮತ್ತು ಎಜಾಕ್ಸ್ ಇಂಜಿನಿಯರಿಂಗ್ ಚಾರಿಟಬಲ್ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಎಜಾಕ್ಸ್ ಇಂಜಿನಿಯರಿಂಗ್ ಚಾರಿಟಬಲ್ ಟ್ರಸ್ಟ್ ಸಿ.ಎಸ್.ಆರ್. ನಿಧಿಯ ಅಡಿಯಲ್ಲಿ ರೂ.13.5 ಕೋಟಿ ವೆಚ್ಚದ ನೂತನ ಕಟ್ಟಡ ಶಂಕುಸ್ಥಾಪನೆಯನ್ನು ನೆರವೇರಿಸಿ ಮಾತನಾಡಿಡಿದರ ಅವರು ಉತ್ತಮ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯಲ್ಲಿ ಹಲವು ಮಹತ್ವದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇಂದು ತಮ್ಮ ಇಲಾಖೆಗೆ ಬಹಳ ಮಹತ್ವದ ದಿನವಾಗಿದೆ. ನಮ್ಮ ಶಾಲೆ ನಮ್ಮ ಜವಾಬ್ದಾರಿ ಎಂಬ ಪರಿಕಲ್ಪನೆಯಡಿ ಸಮಾಜದ ಸಹಭಾಗಿತ್ವದೊಂದಿಗೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ದೇವಸ್ಥಾನಗಳಿಗಿಂತ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕಿದ್ದು, ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಣ ಇಲಾಖೆಯ ಜವಾಬ್ದಾರಿ ಅತ್ಯಂತ ದೊಡ್ಡದು ಎಂದು ಹೇಳಿದರು.
ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶ ಹೊಂದಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ 11 ಕೆಪಿಎಸ್ ಶಾಲೆಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ ನೆರವಿನಡಿ ಮತ್ತಷ್ಟು 24 ಕೆಪಿಎಸ್ ಶಾಲೆಗಳು ಮಂಜೂರಾಗಿವೆ ಎಂದು ತಿಳಿಸಿದರು.
ಸಿಎಸ್‌ಆರ್ ನಿಧಿಯಡಿ ರಾಜ್ಯದಾದ್ಯಂತ 1,000 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳನ್ನು ಅಭಿವೃದ್ಧಿಪಡಿಸುವ ಯೋಜನೆ ಕೈಗೊಳ್ಳಲಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ 35 ಕೆಪಿಎಸ್ ಶಾಲೆಗಳನ್ನು ಸ್ಥಾಪಿಸುವ ಕಾರ್ಯ ಪ್ರಗತಿಯಲ್ಲಿದೆ. ಎಜಾಕ್ಸ್ ಇಂಜಿನಿಯರಿಂಗ್ ಚಾರಿಟೇಬಲ್ ಟ್ರಸ್ಟ್‌ನ ನೆರವಿನಿಂದ ನಿರ್ಮಾಣವಾಗಲಿರುವ ಈ ಕಟ್ಟಡದಲ್ಲಿ 35 ಸುಸಜ್ಜಿತ ತರಗತಿ ಕೊಠಡಿಗಳು, ಶೌಚಾಲಯಗಳು ಹಾಗೂ ಅಕ್ಷರ ದಾಸೋಹ ಭವನ ನಿರ್ಮಾಣವಾಗಲಿದೆ. ಕಟ್ಟಡವನ್ನು ಎರಡು ವರ್ಷದೊಳಗೆ ಪೂರ್ಣಗೊಳಿಸಿ ಶಿಕ್ಷಣ ಇಲಾಖೆಗೆ ಹಸ್ತಾಂತರಿಸುವ ಗುರಿ ಹೊಂದಲಾಗಿದೆ ಎಂದರು.
ಪ್ರತಿಯೊಬ್ಬರೂ ತಾವು ಓದಿದ ಶಾಲೆಯನ್ನು ತಮ್ಮ ಮನೆಯಂತೆ ಭಾವಿಸಬೇಕು : ವಿಜಯ್ ಕುಮಾರ್
ಈ ಸಂದರ್ಭದಲ್ಲಿ ಶಿವಮೊಗ್ಗ ಎಜಾಕ್ಸ್ ಇಂಜಿನಿಯರಿಂಗ್ ಲಿಮಿಟೆಡ್ ಮತ್ತು ಎಜಾಕ್ಸ್ ಇಂಜಿನಿಯರಿಂಗ್ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷ ವಿಜಯ್ ಕುಮಾರ್ ಮಾತನಾಡಿ ಪ್ರತಿಯೊಬ್ಬರೂ ತಾವು ಓದಿದ ಶಾಲೆಯನ್ನು ತಮ್ಮ ಮನೆಯಂತೆ ಭಾವಿಸಿ ಅದರ ಅಭಿವೃದ್ಧಿಗೆ ಕೈಜೋಡಿಸಬೇಕು. ಸಮಾಜದ ಪ್ರತಿಯೊಬ್ಬರಿಗೂ ಉತ್ತಮವಾಗಿ ಬದುಕುವ ಹಕ್ಕಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಜಿಲ್ಲೆ, ರಾಜ್ಯ ಹಾಗೂ ದೇಶದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು. ಈಗಾಗಲೇ ಬಾಣಾವರ ಹಾಗೂ ಗೌರಿಬಿದುನೂರು ಸೇರಿದಂತೆ ಅನೇಕ ಕಡೆ ಶಾಲೆಗಳನ್ನು ಸ್ಥಾಪಿಸಿದ್ದೇವೆ. ಶಿವಮೊಗ್ಗದಲ್ಲಿ ಇದು 5 ನೇ ಕೆಪಿ ಎಸ್ ಶಾಲೆ ರಾಜ್ಯದಾದ್ಯಂತ ಮುಂದಿನ 5 ವರ್ಷದಲ್ಲಿ 10 ಜಿಲ್ಲೆಗಳಲ್ಲಿ ಕೆಪಿಎಸ್ ಶಾಲೆಗಳನ್ನು ಸ್ಥಾಪಿಸುವ ಗುರಿ ಹೊಂದಿದ್ದೇವೆ ನಮ್ಮ ಕಾರ್ಯ ಹೀಗೆ ಮುಂದುವರೆಯಲಿದೆ ಎಂದರು.
ಮಕ್ಕಳ ಕಲಿಕೆ ಹಾಗೂ ಶೈಕ್ಷಣಿಕ ಅಭಿವೃದ್ಧಿಗಾಗಿ ವಿವಿಧ ರೀತಿಯಲ್ಲಿ ಹಣವನ್ನು ವಿನಿಯೋಗಿಸಲಾಗುತ್ತಿದೆ. ಕೆಪಿಎಸ್ ಶಾಲೆಯಲ್ಲಿ ಒಂದೇ ಸೂರಿನಡಿ ವಿವಿಧ ಹಂತಗಳ ಶಿಕ್ಷಣವನ್ನು ಪಡೆಯಲು ಅವಕಾಶವಿದ್ದು, ಮಕ್ಕಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ ಎಂದರು.ಶಿಕ್ಷಣ ಮಾತ್ರವಲ್ಲದೆ ಹಲವು ಸಮಾಜಮುಖಿ ಕ್ಷೇತ್ರಗಳಿಗೂ ಸಂಸ್ಥೆಯಿಂದ ಹಣವನ್ನು ವಿನಿಯೋಗಿಸಲಾಗುತ್ತಿದೆ. ನಮ್ಮ ಕೆಲಸ ಇಲ್ಲಿಗೆ ಮುಗಿಯುವುದಿಲ್ಲ. ಮಕ್ಕಳ ಹಾಗೂ ಸಮಾಜದ ಒಳಿತಿಗಾಗಿ ನಮ್ಮ ಸೇವೆ ನಿರಂತರವಾಗಿ ಮುಂದುವರಿಯಲಿದೆ ಎಂದು ಹೇಳಿದರು.
ರಾಜಕೀಯ ಚುನಾವಣೆಯಲ್ಲಿ ಮಾತ್ರ. ಚುನಾವಣೆಗಳ ನಂತರ ಅಭಿವೃದ್ಧಿಯೇ ನಮ್ಮ ಮಂತ್ರ : ಎಸ್ ಎನ್ ಚನ್ನಬಸಪ್ಪ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ, ಇದು ಶಿವಮೊಗ್ಗಕ್ಕೆ ಅವಿಸ್ಮರಣೀಯ ದಿನವಾಗಿದ್ದು, ಶ್ರಾವಣ ಮಾಸದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೊಸ ಶಕ್ತಿ ತುಂಬುವ ಕಾರ್ಯಕ್ಕೆ ಚಾಲನೆ ದೊರೆತಿದೆ. ಇದು ಕೇವಲ ಕಾರ್ಯಕ್ರಮವಲ್ಲ, ಒಂದು ಮಹತ್ವದ ಕಾರ್ಯ. ರೂ.13.5 ಕೋಟಿ ವೆಚ್ಚದ ಯೋಜನೆ ಸಣ್ಣ ವಿಷಯವಲ್ಲ. ಎಜಾಕ್ಸ್ ಸಂಸ್ಥೆ ಹಾಗೂ ವಿಜಯ್ ಕುಮಾರ್ ಅವರ ಶಿಕ್ಷಣದ ಮೇಲಿನ ಕಾಳಜಿ ಮತ್ತು ಸಮಾಜಮುಖಿ ಕಾರ್ಯ ಶ್ಲಾಘನೀಯ. ಇಂತಹ ಯೋಜನೆಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿವೆ ಎಂದು ಹೇಳಿದರು.
ಹಿಂದೆ ಸರ್ಕಾರಿ ಶಾಲೆಗಳ ಸಣ್ಣಪುಟ್ಟ ದುರಸ್ತಿ ಕಾರ್ಯಗಳಿಗೂ ಹಣದ ಕೊರತೆ ಎದುರಾಗುತ್ತಿತ್ತು. ಮಹಾನಗರ ಪಾಲಿಕೆಯಿಂದ ಕೇವಲ ರೂ.0.50 ಸಾವಿರದಷ್ಟು ನೆರವು ನೀಡಲಾಗುತ್ತಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದ್ದು, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ದೊಡ್ಡ ಮಟ್ಟದ ಯೋಜನೆಗಳು ಜಾರಿಯಾಗುತ್ತಿರುವುದು ಸಂತಸದ ಸಂಗತಿ ಎಂದು ತಿಳಿಸಿದರು.
ರಾಜಕೀಯ ಚುನಾವಣೆಯಲ್ಲಿ ಮಾತ್ರ. ಚುನಾವಣೆಗಳ ನಂತರ ಅಭಿವೃದ್ಧಿಯೇ ನಮ್ಮ ಮಂತ್ರವಾಗಿದ್ದು, ಸಚಿವ ಮಧು ಬಂಗಾರಪ್ಪ ಅವರ ಮಾರ್ಗದರ್ಶನದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳು ಆಗುತ್ತಿವೆ. ಶ್ರಾವಣ ಮಾಸದಲ್ಲಿ ಶಂಕುಸ್ಥಾಪನೆ ನೆರವೇರಿಸಿರುವುದು ಶುಭ ಸಂಕೇತವಾಗಿದ್ದು, ಈ ಶಾಲಾ ಕಟ್ಟಡ ಶೀಘ್ರದಲ್ಲೇ ಪೂರ್ಣಗೊಂಡು ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯ ಒದಗಿಸಲಿ ಎಂದು ಆಶಿಸಿದರು.
ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಿರುವ ಸಚಿವ ಮಧು ಬಂಗಾರಪ್ಪ, ಎಜಾಕ್ಸ್ ಸಂಸ್ಥೆ ಹಾಗೂ ಎಲ್ಲ ಸಹಭಾಗಿಗಳಿಗೆ ಅಭಿನಂದನೆ ಸಲ್ಲಿಸಿದ ಅವರು, ಈ ಯೋಜನೆ ಶಿವಮೊಗ್ಗ ಜಿಲ್ಲೆಯ ಶಿಕ್ಷಣ ಇತಿಹಾಸದಲ್ಲಿ ಪ್ರಮುಖ ಮೈಲುಗಲ್ಲಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ, ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ, ಎಜಾಕ್ಸ್ ಇಂಜಿನಿಯರಿಂಗ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕೆ. ವಿಜಯ್, ಕಲ್ಯಾಣಿ ವಿಜಯ್, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಬಾಲ್ಕಿಶ್ ಬಾನು, ಪಲ್ಲವಿ, ಜಿಲ್ಲಾ ಪಂಚಾಯತ್ ಸಿಇಒ ಹೇಮಂತ್ ಎನ್., ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಮಾಜಿ ಕಾರ್ಪೊರೇಟರ್ ಪ್ರಭಾಕರ್, ಚೇತನ್ ಕೆ ಗೌಡ, ಯೋಗೀಶ್, ಚಂದ್ರಭೂಪಾಲ್, ಮಧು, ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದ
