Plastic bottle Ban ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಪರಿಸರ ಸ್ನೇಹಿ ಕ್ರಮಗಳಿಗೆ ಒತ್ತು ನೀಡುವ ಹಾಗೂ ಸ್ಥಳೀಯ ಉತ್ಪನ್ನಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹತ್ವದ ಆದೇಶಗಳನ್ನು ಹೊರಡಿಸಿದ್ದಾರೆ. ಇನ್ನು ಮುಂದೆ ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸುವಂತೆ ಅವರು ಸೂಚನೆ ನೀಡಿದ್ದಾರೆ.
ಈ ಹಿಂದೆ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬದಲಿಗೆ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಸುವಂತೆ ಸೂಚಿಸಲಾಗಿತ್ತು. ಆದೇಶವಿದ್ದರೂ ಹಲವು ಕಡೆಗಳಲ್ಲಿ ಅದರ ಪಾಲನೆ ಸಮರ್ಪಕವಾಗಿ ನಡೆಯದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿಗಳು ಈ ಕ್ರಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದ್ದಾರೆ.
ಅಷ್ಟೇ ಅಲ್ಲದೆ, ಮತ್ತೊಂದು ಮಹತ್ವದ ನಿರ್ಧಾರದಲ್ಲಿ, ಮುಖ್ಯಮಂತ್ರಿಗಳು ಮತ್ತು ಇಲಾಖಾ ಸಚಿವರುಗಳ ಸಭೆಗಳು ಸೇರಿದಂತೆ ಸಚಿವಾಲಯ ಮತ್ತು ರಾಜ್ಯದಾದ್ಯಂತ ನಡೆಯುವ ಎಲ್ಲಾ ಸರ್ಕಾರಿ ಸಭೆ-ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಸರ್ಕಾರಿ ಸ್ವಾಮ್ಯದ ಕೆಎಂಎಫ್‌ನ ನಂದಿನಿ ತಿನಿಸುಗಳನ್ನು (ತಿಂಡಿಗಳನ್ನು) ಬಳಸುವಂತೆ ಸೂಚಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳಿಗೆ ಉತ್ತೇಜನ ನೀಡುವ ಮತ್ತು ಪ್ಲಾಸ್ಟಿಕ್ ಮಾಲಿನ್ಯವನ್ನು ನಿಯಂತ್ರಿಸುವ ಈ ಎರಡು ನಿರ್ಧಾರಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.
Plastic bottle Ban


