ಸೆ.20ರಂದು ಪೊಲೀಸ್ ಕಾನ್‌ಸ್ಟೆಬಲ್ ಪರೀಕ್ಷೆ: 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ! ಈ ಮಾಹಿತಿ ತಿಳಿಯಿರಿ!

ಹಂಚಿಕೊಳ್ಳಿ
WhatsApp Facebook X Telegram
Police Constable Recruitment Exam Held at 19 Centres in Shivamogga; 6,359 Candidates Attend
Police Constable Recruitment Exam Held at 19 Centres in Shivamogga; 6,359 Candidates Attend

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ /ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗಾಗಿ ಸೆ.20ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಒಟ್ಟು 34 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಅಗತ್ಯವಿರುವ ಎಲ್ಲ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್ ಅಧಿಕಾರಿಗಳಿಗೆ ಸೂಚಿಸಿದರು.

ಪೊಲೀಸ್ ಕಾನ್‌ಸ್ಟೆಬಲ್ ಪರೀಕ್ಷೆ

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪೊಲೀಸ್ ಇಲಾಖೆಯ ಕೆಎಸ್‌ಆರ್‌ಪಿ, ಕೆಎಸ್‌ಐಎಸ್‌ಎಫ್ ಹಾಗೂ ಭಾರತೀಯ ಮೀಸಲು ಪಡೆಗಳಲ್ಲಿ ಖಾಲಿ ಇರುವ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಮಧ್ಯಾಹ್ನ 3ರಿಂದ ಸಂಜೆ 4.30ರವರೆಗೆ 2 ಅವಧಿಗಳಲ್ಲಿ ಪರೀಕ್ಷೆ ನಡೆಸಲಾಗುವುದು. ಶಿವಮೊಗ್ಗ ನಗರದ 29 ಹಾಗೂ ಭದ್ರಾವತಿ ತಾಲ್ಲೂಕಿನ 5 ಕೇಂದ್ರಗಳು ಸೇರಿದಂತೆ ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.

jilla bhovi vidyavardaka sanga ad

ಪರೀಕ್ಷಾ ಕೇಂದ್ರಕ್ಕೆ ಗಡಿಯಾರ, ಎಲೆಕ್ಟ್ರಾನಿಕ್ ವಸ್ತುಗಳ ನಿಷೇಧ

ಪರೀಕ್ಷಾ ಕೇಂದ್ರದೊಳಗೆ ಗಡಿಯಾರ, ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಆಹಾರ ಪದಾರ್ಥಗಳನ್ನು ಕೊಂಡೊಯ್ಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸರ್ಕಾರ ಮತ್ತು ಪೊಲೀಸ್ ಇಲಾಖೆ ನಿಗದಿಪಡಿಸಿರುವ ವಸ್ತ್ರಸಂಹಿತೆ ಹಾಗೂ ಪರೀಕ್ಷಾ ನಿಯಮಾವಳಿಗಳಿಗೆ ಅನುಗುಣವಾಗಿ ಅಭ್ಯರ್ಥಿಗಳನ್ನು ಪರಿಶೀಲಿಸಿದ ನಂತರವೇ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪರೀಕ್ಷೆಯ ಹಿನ್ನೆಲೆಯಲ್ಲಿ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಪ್ರಶ್ನೆಪತ್ರಿಕೆಗಳನ್ನು ಸುರಕ್ಷಿತವಾಗಿ ಸಾಗಿಸಲು ತ್ರಿಸದಸ್ಯ ಸಮಿತಿ ರಚಿಸಲಾಗಿದ್ದು, ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರಶ್ನೆಪತ್ರಿಕೆಗಳ ವಿತರಣೆಗಾಗಿ ಶಿವಮೊಗ್ಗದಲ್ಲಿ 9 ಹಾಗೂ ಭದ್ರಾವತಿಯಲ್ಲಿ 2 ಸೇರಿದಂತೆ ಒಟ್ಟು 11 ಮಾರ್ಗಗಳನ್ನು ಗುರುತಿಸಲಾಗಿದೆ ಎಂದು ವಿವರಿಸಿದರು.

ಮುಖ ಗುರುತಿಸುವಿಕೆ ಮೂಲಕ ಪರೀಕ್ಷಾ ಕೊಠಡಿಗೆ ಪ್ರವೇಶ

  • ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಪ್ರವೇಶಪತ್ರಗಳನ್ನು ಸ್ಕ್ಯಾನ್ ಮಾಡಲಾಗುವುದು. ಮುಖ ಗುರುತಿಸುವಿಕೆ ತಂತ್ರಜ್ಞಾನದ ಮೂಲಕ ಅಭ್ಯರ್ಥಿಗಳ ಗುರುತು ಪರಿಶೀಲಿಸಿದ ನಂತರವೇ ಪರೀಕ್ಷಾ ಕೊಠಡಿಯೊಳಗೆ ಪ್ರವೇಶ ನೀಡಲಾಗುತ್ತದೆ.
  • ಪರೀಕ್ಷಾ ಪ್ರಕ್ರಿಯೆಯ ಮೇಲ್ವಿಚಾರಣೆಗಾಗಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ವಸ್ತ್ರಸಂಹಿತೆ ಪರಿಶೀಲನೆಗೆ ಪ್ರತ್ಯೇಕ ಅಧಿಕಾರಿಗಳನ್ನು ನೇಮಿಸಲಾಗಿದೆ. ಪ್ರತಿ 5 ಪರೀಕ್ಷಾ ಕೇಂದ್ರಗಳಿಗೆ ಒಂದರಂತೆ ಸಂಚಾರಿ ತಪಾಸಣಾ ತಂಡಗಳನ್ನು ಜಿಲ್ಲಾಡಳಿತದಿಂದ ನಿಯೋಜಿಸಲಾಗಿದೆ.
  • ಪರೀಕ್ಷೆ ನಡೆಯುವ ಸಮಯದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಕ್ರಮ ಕೈಗೊಳ್ಳುವಂತೆ ಮೆಸ್ಕಾಂಗೆ ಪತ್ರ ಬರೆಯಲಾಗಿದೆ ಎಂದು ವಿ.ಅಭಿಷೇಕ್ ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ. ಕಾರಿಯಪ್ಪ ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಳ್ಳಬೇಕಾದ ಭದ್ರತಾ ವ್ಯವಸ್ಥೆ ಹಾಗೂ ಅಭ್ಯರ್ಥಿಗಳ ತಪಾಸಣೆಗೆ ಸಂಬಂಧಿಸಿದಂತೆ ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಪ್ಪ ಗುಂಡಪಲ್ಲಿ, ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ಶಿಕ್ಷಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಸಭೆಯಲ್ಲಿ ಉಪಸ್ಥಿತರಿದ್ದರು.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor