SHIVAMOGGA NEWS TODAY

ಸಾಗರ ಬಂದ್ : ರಸ್ತೆಗಿಳಿದ ಅನ್ನದಾತರು, ವ್ಯಾಪಾರ ವಹಿವಾಟು ಸಂಪೂರ್ಣ ಸ್ತಬ್ಧ ಕಾರಣವೇನು ?

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Sagara Bandh ಸಾಗರ: ವಿದ್ಯುತ್ ವಲಯವನ್ನು ಖಾಸಗೀಕರಣಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಿರುವ ಕ್ರಮವನ್ನು ತೀವ್ರವಾಗಿ ಖಂಡಿಸಿ, ಸಾಗರ ನಗರದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಸಾಗರ ಬಂದ್ಗೆ ಸಾರ್ವಜನಿಕರು ಹಾಗೂ ವರ್ತಕರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. 

ಬೆಳ್ಳಂಬೆಳಗ್ಗೆಯಿಂದಲೇ ರೈತ ಮುಖಂಡರು ಹಾಗೂ ಹೋರಾಟಗಾರರು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಪ್ರತಿಭಟನೆಗೆ ಬೆಂಬಲಿಸುವಂತೆ ಕೋರಿದ್ದು, ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ವರ್ತಕರು ಸ್ವಯಂಪ್ರೇರಿತರಾಗಿ ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವಹಿವಾಟು ಸ್ಥಗಿತಗೊಳಿಸಿದ್ದಾರೆ.

ಈ ಬೃಹತ್ ಹೋರಾಟಕ್ಕೆ ಸಾಗರ ನಗರದ ಹಸಿ ಮೀನು ಮಾರಾಟಗಾರರ ಸಂಘ, ಹೋಟೆಲ್ ಮಾಲೀಕರ ಸಂಘ ಹಾಗೂ ವರ್ತಕರ ಸಂಘ ಸೇರಿದಂತೆ ವಿವಿಧ ಪ್ರಮುಖ ಸಂಘ-ಸಂಸ್ಥೆಗಳು ಮುಕ್ತ ಬೆಂಬಲ ನೀಡಿವೆ. ವಿದ್ಯುತ್ ಖಾಸಗೀಕರಣದಿಂದಾಗಿ ಸಾಮಾನ್ಯ ಗ್ರಾಹಕರು, ಬಡವರು ಹಾಗೂ ರೈತಾಪಿ ವರ್ಗದ ಮೇಲೆ ಅತಿ ದೊಡ್ಡ ಆರ್ಥಿಕ ಹೊರೆ ಬೀಳಲಿದೆ ಎಂದು ಆಕ್ರೋಶ ಹೊರಹಾಕಿರುವ ಪ್ರತಿಭಟನಾಕಾರರು, ನಗರದ ಪ್ರಸಿದ್ಧ ಗಣಪತಿ ದೇವಸ್ಥಾನದಿಂದ ಟ್ರ್ಯಾಕ್ಟರ್‌ಗಳ ಮೂಲಕ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದರು. ಬಂದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಸ್ಥಳೀಯ ಪೊಲೀಸ್ ಇಲಾಖೆಯು ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಿದೆ .

ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಗುಡುಗಿದ ಜಿಲ್ಲಾ ರೈತ ಸಂಘದ ಅಧ್ಯಕ್ಷ ದಿನೇಶ್ ಶಿರವಾಳ ಅವರು, ವಿದ್ಯುತ್ ಪ್ರಸರಣ ಮತ್ತು ವಿತರಣಾ ವ್ಯವಸ್ಥೆಯನ್ನು ಯಾವುದೇ ಕಾರಣಕ್ಕೂ ಖಾಸಗಿ ಕಂಪನಿಗಳ ಪಾಲಾಗಲು ಬಿಡುವುದಿಲ್ಲ. ಸರ್ಕಾರಿ ಸ್ವಾಮ್ಯದಲ್ಲೇ ಇದು ಉಳಿಯಬೇಕು. ಖಾಸಗೀಕರಣದ ಪ್ರಸ್ತಾವನೆಯನ್ನು ಸರ್ಕಾರ ತಕ್ಷಣವೇ ಹಿಂಪಡೆಯಬೇಕು, ಎಂದು ಕಠಿಣ ಆಗ್ರಹ ಮಾಡಿದರು. ಸರ್ಕಾರ ತನ್ನ ಹಠಮಾರಿ ನಿಲುವನ್ನು ಬಿಡುವವರೆಗೂ ಹೋರಾಟ ವಿಶ್ರಮಿಸುವುದಿಲ್ಲ ಎಂದು ಎಚ್ಚರಿಸಿದ ಅವರು, ಇಂದಿನ ಯಶಸ್ವಿ ಬಂದ್ ಸರ್ಕಾರದ ನೀತಿಗಳ ವಿರುದ್ಧದ ಜನಾಭಿಪ್ರಾಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದರು. ಗ್ರಾಮೀಣ ಭಾಗಗಳಿಂದ ನೂರಾರು ರೈತರು ಟ್ರ್ಯಾಕ್ಟರ್ ಹಾಗೂ ಟ್ರಿಲ್ಲರ್‌ಗಳ ಮೂಲಕ ನಗರಕ್ಕೆ ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದು, ಈ ಪ್ರತಿಭಟನೆಯು ಮುಂದಿನ ದಿನಗಳಲ್ಲಿ ರಾಜ್ಯವ್ಯಾಪಿ ಉಗ್ರ ಸ್ವರೂಪ ಪಡೆದುಕೊಳ್ಳುವ ಮುನ್ಸೂಚನೆ ನೀಡಿದೆ.

Sagara Bandh Farmers Protest Electricity Privatization

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.