ಸುದ್ದಿಯ ಸ್ಥಳ: Shivamogga district, Karnataka
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ಜಿಲ್ಲೆಯ ಕಾರ್ಮಿಕರು ಹಾಗೂ ಅವರ ಕುಟುಂಬಸ್ಥರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅಡ್ಡಿಯಾಗಿರುವ ರೆಫರಲ್ ಪತ್ರಗಳ ಸಮಸ್ಯೆಯನ್ನು ಶೀಘ್ರ ಬಗೆಹರಿಸಿ, ಖಾಸಗಿ ಒಪ್ಪಂದದ ಆಸ್ಪತ್ರೆಗಳ ರೆಫರಲ್ ಸೌಲಭ್ಯವನ್ನು ಮರುಸ್ಥಾಪಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅವರು ಒತ್ತಾಯಿಸಿದ್ದಾರೆ.
ನಗರದ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ನೌಕರರ ರಾಜ್ಯ ವಿಮಾ ನಿಗಮ (ESIC) ಸಂಬಂಧಿತ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಿಲ್ಲೆಯ ಕಾರ್ಮಿಕರು ಎದುರಿಸುತ್ತಿರುವ ವೈದ್ಯಕೀಯ ಚಿಕಿತ್ಸಾ ಸಮಸ್ಯೆಗಳ ಕುರಿತು ಗಮನ ಸೆಳೆದರು. ವಿಶೇಷವಾಗಿ ESI ಫಲಾನುಭವಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಎದುರಾಗಿರುವ ರೆಫರಲ್ ಪತ್ರಗಳ ಅಡೆತಡೆ, ಹೊರರೋಗಿ (OPD) ಚಿಕಿತ್ಸಾ ಸೌಲಭ್ಯಗಳ ಮೇಲಿನ ನಿರ್ಬಂಧ, ಅಗತ್ಯ ಔಷಧಿಗಳ ಕೊರತೆ, ಗಂಭೀರ ಕಾಯಿಲೆಗಳ ಚಿಕಿತ್ಸೆಯಲ್ಲಿ ಉಂಟಾಗುತ್ತಿರುವ ವಿಳಂಬ ಹಾಗೂ ವೈದ್ಯಕೀಯ ವೆಚ್ಚ ಮರುಪಾವತಿ ವಿಳಂಬ ಸೇರಿದಂತೆ ಹಲವು ಪ್ರಮುಖ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು.
ತಮ್ಮ ದುಡಿಮೆಯ ಒಂದು ಭಾಗವನ್ನು ಪ್ರತಿ ತಿಂಗಳು ESI ಯೋಜನೆಗೆ ವಂತಿಗೆಯಾಗಿ ಪಾವತಿಸುವ ಕಾರ್ಮಿಕರಿಗೆ, ಅಗತ್ಯವಿರುವ ಸಂದರ್ಭದಲ್ಲಿ ಸಕಾಲದಲ್ಲಿ ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ದೊರೆಯುವುದು ಅತ್ಯಂತ ಮುಖ್ಯವಾಗಿದೆ. ಆಡಳಿತಾತ್ಮಕ ನಿರ್ಬಂಧಗಳಿಂದ ಯಾವುದೇ ಕಾರ್ಮಿಕರು ಹಾಗೂ ಅವರ ಕುಟುಂಬದ ಸದಸ್ಯರು ಚಿಕಿತ್ಸೆಯಿಂದ ವಂಚಿತರಾಗಬಾರದು ಎಂದು ಡಾ. ಧನಂಜಯ ಸರ್ಜಿ ಪ್ರತಿಪಾದಿಸಿದರು. ಅಲ್ಲದೆ, ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ಚಿಕಿತ್ಸೆಗೆ ಯಾವುದೇ ಅಡಚಣೆಯಾಗದಂತೆ ಅಧಿಕಾರಿಗಳು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಅವರು ಸಭೆಯಲ್ಲಿ ಹೇಳಿದರು.
ಈ ಸಭೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಗೋಪಿನಾಥ್, ESIC ಅಧಿಕಾರಿಗಳು, ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
