ಶಿವಮೊಗ್ಗ ನಗರದ ನ್ಯೂ ಮಂಡ್ಲಿ ಬಳಿ ಇರುವ ಪೇಪರ್ ಫ್ಯಾಕ್ಟರಿಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಏಕಾಏಕಿ ಹೊತ್ತಿಕೊಂಡ ಬೆಂಕಿಯ ಕೆನ್ನಾಲಿಗೆಗೆ ಫ್ಯಾಕ್ಟರಿಯಲ್ಲಿದ್ದ ಪೇಪರ್ ರೋಲ್‌ಗಳು ಉರಿದಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ.
ಕಾರ್ಖಾನೆಯಾದ್ಯಂತ ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದೆ. ಬೆಂಕಿಯ ತೀವ್ರತೆ ಅರಿತ ತಕ್ಷಣವೇ ಫ್ಯಾಕ್ಟರಿಯಲ್ಲಿದ್ದ ಸಿಬ್ಬಂದಿ ಹೊರಗೆ ಓಡಿಬಂದಿದ್ದರಿಂದ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅಗ್ನಿ ಅವಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
