ಶಿವಮೊಗ್ಗ ವಿಮಾನ ನಿಲ್ದಾಣ! ಡಿ.ಕೆ. ಶಿವಕುಮಾರ್ ಭೇಟಿಗೆ ಮುಂದಾದ ಸಂಸದ ಬಿ.ವೈ. ರಾಘವೇಂದ್ರ

ಹಂಚಿಕೊಳ್ಳಿ
WhatsApp Facebook X Telegram
BY Raghavendra Demands VGF Support to Continue Shivamogga Airport Flight Services
BY Raghavendra Demands VGF Support to Continue Shivamogga Airport Flight Services

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರದಲ್ಲಿ ರಾಜಕೀಯ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿಕೊಳ್ಳುವ ಬದಲು ವಿಮಾನಯಾನ ಸೇವೆಯನ್ನು ಮುಂದುವರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ರಾಜಕೀಯಕ್ಕಿಂತ ಜಿಲ್ಲೆಯ ಅಭಿವೃದ್ಧಿ ಹಾಗೂ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವುದೇ ಮುಖ್ಯ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣದಲ್ಲಿ ವಿಮಾನ ಸಂಚಾರ ಮುಂದುವರಿಸುವ ಸಂಬಂಧ ರಾಜ್ಯ ಸರ್ಕಾರ ಅಗತ್ಯ ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿದರು.

ವಿಮಾನ ಸಂಚಾರ ಮುಂದುವರಿಸುವ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈಗಾಗಲೇ ಮುಖ್ಯಮಂತ್ರಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಶನಿವಾರ ಡಿ.ಕೆ. ಶಿವಕುಮಾರ್ ಅವರನ್ನು ಖುದ್ದಾಗಿ ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.

ಸಂಸದ ರಾಘವೇಂದ್ರರವರ ಮಾತಿನ ಪ್ರಮುಖ ಅಂಶಗಳು

  • ಉಡಾನ್ ಯೋಜನೆಯಡಿ ವಿಮಾನಯಾನ ಸೇವೆಗೆ ನಿಗದಿಪಡಿಸಿದ್ದ 3 ವರ್ಷಗಳ ಅವಧಿ ಪೂರ್ಣಗೊಂಡಿದೆ. ಯೋಜನೆಯ ನಿಯಮಗಳ ಪ್ರಕಾರ ಒಂದು ವರ್ಷದ ಕಮರ್ಷಿಯಲ್ ಬ್ರೇಕ್ ಇರಲಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆಯನ್ನು ಮುಂದುವರಿಸಲು ರಾಜ್ಯ ಸರ್ಕಾರ ಮುಂದಾಗಬೇಕಿದೆ ಎಂದು ತಿಳಿಸಿದರು.
  • ಕಲಬುರಗಿ ಮತ್ತು ಬೀದರ್ ವಿಮಾನ ನಿಲ್ದಾಣಗಳಿಗೆ ನೀಡಿರುವ ಮಾದರಿಯಲ್ಲಿಯೇ ಶಿವಮೊಗ್ಗ ವಿಮಾನ ನಿಲ್ದಾಣಕ್ಕೂ ರಾಜ್ಯ ಸರ್ಕಾರ ಪೂರ್ಣ ಪ್ರಮಾಣದ ವಯಬಿಲಿಟಿ ಗ್ಯಾಪ್ ಫಂಡಿಂಗ್ (ವಿಜಿಎಫ್) ಭರಿಸಬೇಕು. ವಿಮಾನಯಾನ ಸೇವೆಯ ನಿರಂತರತೆಗೆ ಸರ್ಕಾರದಿಂದ ಈ ಆರ್ಥಿಕ ನೆರವು ಅಗತ್ಯವಾಗಿದೆ ಎಂದು ಪ್ರತಿಪಾದಿಸಿದರು.
  • ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನಯಾನ ಸೇವೆ ಆರಂಭಿಸಲು ಸ್ಟಾರ್ ಏರ್‌ಲೈನ್ಸ್ ಸಂಸ್ಥೆ ಈಗಾಗಲೇ ಸರ್ಕಾರಕ್ಕೆ ಪತ್ರ ಬರೆದಿದೆ. ಶಿವಮೊಗ್ಗ–ಬೆಂಗಳೂರು ಮಾರ್ಗದಲ್ಲಿ ವಿಮಾನ ಹಾರಾಟ ನಡೆಸಲು ಸಂಸ್ಥೆ ಆಸಕ್ತಿ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದರು.
  • ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರವನ್ನು ರಾಜಕೀಯ ಆರೋಪಗಳಿಗೆ ಸೀಮಿತಗೊಳಿಸದೆ, ಜಿಲ್ಲೆಯ ಅಭಿವೃದ್ಧಿ ಮತ್ತು ಜನರಿಗೆ ವಿಮಾನಯಾನ ಸೌಲಭ್ಯ ಮುಂದುವರಿಸುವ ನಿಟ್ಟಿನಲ್ಲಿ ಗಮನಹರಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor