ಸುದ್ದಿಯ ಸ್ಥಳ: Shivamogga district, Karnataka
ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ವಿಮಾನ ನಿಲ್ದಾಣದ ಅಭಿವೃದ್ಧಿಗೆ ರಾಜ್ಯ ಸರ್ಕಾರ ತನ್ನಿಂದ ಸಾಧ್ಯವಾದ ಎಲ್ಲ ಸಹಕಾರವನ್ನೂ ನೀಡುತ್ತಿದೆ. ಉಡಾನ್ ಯೋಜನೆ ಕೇಂದ್ರ ಸರ್ಕಾರದ್ದಾಗಿದ್ದು, ಈ ಬಗ್ಗೆ ಕೇಂದ್ರದೊಂದಿಗೆ ಮಾತನಾಡಬೇಕಿದೆ ಎಂದರು.
ಸುಮಾರು 200 ಕೋಟಿ ರೂ. ಯೋಜನೆ ಎಂದು ಆರಂಭವಾದ ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಗೆ ಅಂತಿಮವಾಗಿ 600 ಕೋಟಿ ರೂ.ವರೆಗೂ ವೆಚ್ಚವಾಗಿದೆ. ರಾಜ್ಯ ಸರ್ಕಾರದ ಶ್ರಮ ಮತ್ತು ಹಣದಲ್ಲಿ ಯೋಜನೆ ರೂಪಿಸಿ, ನಂತರ ಅದನ್ನು ಮುಚ್ಚುವ ಹಂತಕ್ಕೆ ತಂದು ಅಂಬಾನಿ, ಅದಾನಿ ಅವರಂಥ ಖಾಸಗಿ ಉದ್ಯಮಿಗಳಿಗೆ ಮಾರಾಟ ಮಾಡುವ ಉದ್ದೇಶ ಬಿಜೆಪಿಯದ್ದಾಗಿದೆ ಎಂದು ಆರೋಪಿಸಿದರು.
ಈ ಸಂಬಂಧ ಸಚಿವ ಎಂ.ಬಿ. ಪಾಟೀಲ್ ಅವರೊಂದಿಗೂ ಚರ್ಚಿಸಿದ್ದೇನೆ. ಯಾವುದೇ ಕಾರಣಕ್ಕೂ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಖಾಸಗೀಕರಣಕ್ಕೆ ಬಿಟ್ಟುಕೊಡುವುದಿಲ್ಲ. ಈ ಕುರಿತು ಕೇಂದ್ರ ಸರ್ಕಾರಕ್ಕೂ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣ ಉದ್ಘಾಟಿಸಿ ಪ್ರಚಾರ ಪಡೆದುಕೊಂಡರು. ಆದರೆ, ಉದ್ಘಾಟನೆಯ ಬಳಿಕ ಆರಂಭದಲ್ಲಿ ಹಲವು ತಿಂಗಳು ವಿಮಾನ ಹಾರಾಟವೇ ಇರಲಿಲ್ಲ. ರಾಜ್ಯ ಸರ್ಕಾರವೇ ಪ್ರಯತ್ನಪಟ್ಟು ವಿಮಾನ ಸಂಚಾರ ಆರಂಭಿಸಲು ಶ್ರಮಿಸಿತು ಎಂದು ಹೇಳಿದರು.
