
ಮಲೆನಾಡು ಟುಡೆ ಸುದ್ದಿ / ತೀರ್ಥಹಳ್ಳಿ / ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ತೀರ್ಥಹಳ್ಳಿ ಹಾಗೂ ಆಗುಂಬೆ ಭಾಗಕ್ಕೆ ತೆರಳುವ ಪ್ರಯಾಣಿಕರಿಗೆ ಬಸ್ನಲ್ಲಿ ಪ್ರಯಾಣಿಸಲು ಅವಕಾಶ ನೀಡುತ್ತಿಲ್ಲ. ಅಲ್ಲದೆ, ಬಸ್ ಸಿಬ್ಬಂದಿ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿರುವ ಜಯ ಕರ್ನಾಟಕ ಸಂಘಟನೆ, ಈ ಧೋರಣೆಯನ್ನು ಖಂಡಿಸಿ ಇಂದು ಅಂದರೆ ಅಕ್ಟೋಬರ್ 19ರಂದು ತೀರ್ಥಹಳ್ಳಿ ಪೇಟೆಯಲ್ಲಿ ರಸ್ತೆತಡೆ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದಲ್ಲಿ ಸಮಸ್ಯೆ
ಈ ಕುರಿತು ಮಾಹಿತಿ ನೀಡಿರುವ ಜಯ ಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ಕುರುವಳ್ಳಿ ನಾಗರಾಜ್, ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ರಾತ್ರಿ 9.30ರ ನಂತರ ತೀರ್ಥಹಳ್ಳಿ ಭಾಗದ ಪ್ರಯಾಣಿಕರನ್ನು ಬಸ್ನಲ್ಲಿ ಕರೆದೊಯ್ಯಲು ಸಿಬ್ಬಂದಿ ನಿರಾಕರಿಸುತ್ತಿದ್ದಾರೆ. ಪ್ರಯಾಣಿಕರಿಗೆ ತೊಂದರೆ ನೀಡುತ್ತಿರುವ ಸಿಬ್ಬಂದಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಆದರೂ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಆರೋಪಿಸಿದ್ದಾರೆ.ಪ್ರಯಾಣಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಪ್ರಯಾಣಿಕರ ಹಿತದೃಷ್ಟಿಯಿಂದ ಪ್ರತಿಭಟನೆಯ ಹಾದಿ ಹಿಡಿಯುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.



ಕೊಪ್ಪ ಸಹಕಾರ ಸಾರಿಗೆ ಬಸ್ಗಳ ಸಂಚಾರ ಸ್ಥಗಿತಗೊಂಡ ನಂತರ ತೀರ್ಥಹಳ್ಳಿ ತಾಲೂಕಿನ ಹಲವು ಗ್ರಾಮಗಳು ಸಾರಿಗೆ ಸಂಪರ್ಕದ ಸಮಸ್ಯೆ ಎದುರಿಸುತ್ತಿವೆ. ರಾಮಕೃಷ್ಣಪುರ, ತೀರ್ಥಮುತ್ತೂರು, ಕಟ್ಟೆಹಕ್ಕಲು, ಶುಂಠಿಕಟ್ಟೆ, ಉಟ್ಟೂರು, ಹೊದಲ, ಯಡಹಳ್ಳಿ, ಆಲಸೆ, ಬಿದರಗೋಡು, ನಾಬಳ, ಮಲ್ಲಂದೂರು, ಮುನ್ನೂರು, ಗಡಿಕಲ್ಲು, ಹೇರಂಬಾಪುರ ಹಾಗೂ ಶೇಡ್ಡಾರು ಸೇರಿದಂತೆ ಅನೇಕ ಗ್ರಾಮಗಳಿಗೆ ಬಸ್ ಸಂಪರ್ಕ ಇಲ್ಲದಂತಾಗಿದೆ ಎಂದು ನಾಗರಾಜ್ ತಿಳಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿರುವುದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು, ವೃದ್ಧರು ಹಾಗೂ ಅನಾರೋಗ್ಯಪೀಡಿತರು ತೊಂದರೆ ಅನುಭವಿಸುತ್ತಿದ್ದಾರೆ. ಸಾರ್ವಜನಿಕರ ಅನುಕೂಲಕ್ಕಾಗಿ ಈ ಮಾರ್ಗಗಳಲ್ಲಿ ತಕ್ಷಣ ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ.
ಶಿವಮೊಗ್ಗದಿಂದ ರಾತ್ರಿ 9.30ರ ನಂತರ ತೀರ್ಥಹಳ್ಳಿ ಹಾಗೂ ಆಗುಂಬೆವರೆಗೆ ಕೆಎಸ್ಆರ್ಟಿಸಿ ಬಸ್ಗಳ ಸಂಚಾರಕ್ಕೆ ಸಾರಿಗೆ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು. ರಾತ್ರಿ ವೇಳೆ ಪ್ರಯಾಣಿಸುವ ಸಾರ್ವಜನಿಕರಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂಬುದು ಸಂಘಟನೆಯ ಪ್ರಮುಖ ಬೇಡಿಕೆಯಾಗಿದೆ. ಈ ಬೇಡಿಕೆಗಳನ್ನು ಸಾರಿಗೆ ಇಲಾಖೆ ಗಂಭೀರವಾಗಿ ಪರಿಗಣಿಸದಿದ್ದರೆ ಜಯ ಕರ್ನಾಟಕ ಸಂಘಟನೆ ವತಿಯಿಂದ ನಿರಂತರ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಕುರುವಳ್ಳಿ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.


