ಸುದ್ದಿಯ ಸ್ಥಳ: Shivamogga district, Karnataka
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ತಾಲೂಕಿನ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಿಂದ ವಿಚಾರಣಾಧೀನ ಕೈದಿಯೊಬ್ಬ ಪರಾರಿಯಾಗಲು ಯತ್ನಿಸಿದ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ. ಪಿ. ರಂಗನಾಥ್ ನೀಡಿದ ದೂರಿನ ಮೇರೆಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಸೆಂಟ್ರಲ್ ಜೈಲ್
ಮನು ಅಲಿಯಾಸ್ ಮನೋಜ್ (21) ಪರಾರಿಗೆ ಯತ್ನಿಸಿದ ಆರೋಪ ಎದುರಿಸುತ್ತಿರುವ ವಿಚಾರಣಾಧೀನ ಕೈದಿ. ನವೆಂಬರ್ 20ರಂದು ಸಂಜೆ ಕಾರಾಗೃಹದಲ್ಲಿ ಲಾಕಪ್ ಮಾಡುವ ಸಂದರ್ಭದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಕಾರಾಗೃಹದ ಶರಾವತಿ ವಿಭಾಗದಲ್ಲಿದ್ದ ಮನೋಜ್ ಲಾಕಪ್ ಸಂದರ್ಭದಲ್ಲಿ ತನ್ನ ವಿಭಾಗದಲ್ಲಿ ಇಲ್ಲದಿರುವುದು ಸಿಬ್ಬಂದಿಯ ಗಮನಕ್ಕೆ ಬಂದಿದೆ. ಕೂಡಲೇ ಕಾರ್ಯಪ್ರವೃತ್ತರಾದ ಕಾರಾಗೃಹದ ಅಧಿಕಾರಿಗಳು ಹಾಗೂ ಸಿಬ್ಬಂದಿ ಒಳ ಆವರಣ ಸೇರಿದಂತೆ ಎಲ್ಲ ವಿಭಾಗಗಳಲ್ಲಿ ಕೂಲಂಕಷವಾಗಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಆರಂಭದಲ್ಲಿ ಕೈದಿ ಪತ್ತೆಯಾಗಿರಲಿಲ್ಲ.
ಬಳಿಕ ಕಾರಾಗೃಹದ ಮುಖ್ಯ ವೀಕ್ಷಕ ಗಜೇಂದ್ರ ಎಸ್. ಹಾಗೂ ವೀಕ್ಷಕ ಕಲಂದರ್ ಅವರು ಒಳ ಆವರಣದಲ್ಲಿ ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿ ಕಟ್ಟಡವೊಂದರ ಮೇಲೆ ಮನೋಜ್ ಇರುವುದು ಕಂಡುಬಂದಿದೆ. ತಕ್ಷಣವೇ ಸಿಬ್ಬಂದಿ ಆತನನ್ನು ಕೆಳಗಿಳಿಯುವಂತೆ ಸೂಚಿಸಿದ್ದಾರೆ. ಬಳಿಕ ಆತನನ್ನು ವಶಕ್ಕೆ ಪಡೆದು ಕಾರಾಗೃಹದ ಮತ್ತೊಂದು ವಿಭಾಗಕ್ಕೆ ಸ್ಥಳಾಂತರಿಸಿ ಲಾಕಪ್ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮನೋಜ್ ಕಾರಾಗೃಹದಿಂದ ಪರಾರಿಯಾಗಲು ಪ್ರಯತ್ನಿಸಿದ್ದು, ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಾರಾಗೃಹದ ಮುಖ್ಯ ಅಧೀಕ್ಷಕರು ವೀಕ್ಷಕ ಸತ್ತೆಪ್ಪ ಮನ್ನಿಕೇರಿ ಅವರ ಮೂಲಕ ನವೆಂಬರ್ 23ರಂದು ದೂರು ಸಲ್ಲಿಸಿದ್ದಾರೆ. ದೂರಿನ ಅನ್ವಯ ತುಂಗಾನಗರ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) 2023ರ ಕಲಂ 262ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
